ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತ ಚಿತ್ರ ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಅಭಿಮಾನಿಗಳ ವಿರುದ್ಧದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಂಗಳವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದು, ರಮ್ಯಾ ನೀಡಿದ ದೂರನ್ನು ಸ್ವೀಕರಿಸಿದ್ದು ರಮ್ಯಾ 43 ಖಾತೆಗಳ ವಿರುದ್ಧ ದೂರು ನೀಡಿದ್ದು, ಇವುಗಳ ತನಿಖೆಯ ಜವಾಬ್ದಾರಿಯನ್ನು ಸಿಸಿಬಿಗೆ ವಹಿಸಲಾಗಿದೆ ಎಂದರು.
ಅಶ್ಲೀಲ ಸಂದೇಶ ಕಳುಹಿಸಿದ್ದ 43 ಇನ್ಸ್ಟ್ರಾಗಾಂ ಖಾತೆಗಳ ಪೈಕಿ ದೂರು ನೀಡಿದ ಬೆನ್ನಲ್ಲೇ 30 ಖಾತೆಗಳ ವಿರುದ್ಧ ಎಫ್ ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡು ಸಂದೇಶ ರವಾನೆ, ಕಾಮೆಂಟ್ ಮಾಡುತ್ತಿದ್ದವರ ವಿರುದ್ಧ ಜುಲೈ 28 ರಂದು ಖುದ್ದು ರಮ್ಯಾ ಅವರೇ ತೆರಳಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಸೈಬರ್ ಕ್ರೈಮ್ ಠಾಣೆಗೆ ದೂರು ನೀಡಿದ್ದರು.
ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆ ಕಾಯ್ದೆ 2023ರ 351(2) (ಕ್ರಿಮಿನಲ್ ಬೆದರಿಕೆಯ ಉದ್ದೇಶದ ಅಪರಾಧ), 351(3) (ಸಾವು, ತೀವ್ರ ನೋವುಂಟು ಮಾಡುವ ಉದ್ದೇಶದ ಕ್ರಿಮಿನಲ್ ಬೆದರಿಕೆ), 352 (ಉದ್ದೇಶಪೂರ್ವಕ ಅವಮಾನದ ಮೂಲಕ ಶಾಂತಿಭಂಗದ ಯತ್ನ), 75(1) (ಲೈಂಗಿಕ ಕಿರುಕುಳ) 75(1)(IV) (ಲೈಂಗಿಕ ಟೀಕೆ) ಹಾಗೂ 79 (ಮಹಿಳೆಯ ಗೌರವಕ್ಕೆ ಧಕ್ಕೆ) ಆರೋಪದಡಿ ಪ್ರಕರಣ ದಾಖಲಾಗಿದೆ.