ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರ ಸ್ಪಷ್ಟಪಡಿಸಬೇಕಾಗಿರುವುದು ನಾನಲ್ಲ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೇಳಿ, ಅವರ ನಿರ್ಧಾರವನ್ನು ಪ್ರಶ್ನೆ ಮಾಡಲಾಗುತ್ತಿದೆ. ಈ ರೀತಿ ಮಾಡಬಾರದು. ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಪಕ್ಷದ ಸಂಘಟನೆ ಕುಂಠಿತವಾಗಿದೆ, ಪಕ್ಷಕ್ಕೆ ಪೂರ್ಣಪ್ರಮಾಣದ ಅಧ್ಯಕ್ಷರು ಬೇಕು ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿ ಎಂದು ಕೇಳಿದಾಗ, ಈ ಬಗ್ಗೆ ಸ್ಪಷ್ಟನೆ ನೀಡಬೇಕಿರುವುದು ನಾನಲ್ಲ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು. ಈ ವಿಚಾರವಾಗಿ ಅವರ ಬಳಿ ಕೇಳಿಎಂದು ಪ್ರತಿಕ್ರಿಯಿಸಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಉತ್ತರಿಸಿದರು.
ನಾಯಕತ್ವ ಬದಲಾವಣೆ ವಿಚಾರವಾಗಿ ನಡೆಯುತ್ತಿರುವ ಬೆಳವಣಿಗೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಯಾವುದಾದರೂ ವಿಚಾರ ಇದ್ದರೆ ನಾನೇ ಮಾಧ್ಯಮವರಿಗೆ ತಿಳಿಸುತ್ತೇನೆ. ಯಾರೂ ಬಹಿರಂಗವಾಗಿ ಮಾತನಾಡಬಾರದು ಎಂದಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲ ಬೆಳಗಾವಿಗೆ ಬರುತ್ತಿದ್ದಾರೆ. ಏನಾದರೂ ಇದ್ದರೆ ರಾಹುಲ್ ಗಾಂಧಿ, ಖರ್ಗೆ ಜತೆ ಮಾತನಾಡಲಿ. ಅವರವರ ಶ್ರಮಕ್ಕೆ ತಕ್ಕ ಸ್ಥಾನವನ್ನು ನಾಯಕರು ಕೊಡುತ್ತಾರೆ. ಶ್ರಮಪಟ್ಟು ನಾನು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಲ್ಲ, ಕಾರ್ಯಕರ್ತರು ತಂದಿದ್ದು. ಕಾಂಗ್ರೆಸ್ ಎಂಬುದು ಕಾರ್ಯಕರ್ತರ ಪಕ್ಷ ಎಂದು ಹೇಳಿದ್ದಾರೆ.
ಪಕ್ಷದ ವಿಚಾರ ಮಾಧ್ಯಮಗಳ ಮುಂದೆ ಮಾತನಾಡುವಂತಹದಲ್ಲ. ಏನೇ ಇದ್ದರೂ ಎಐಸಿಸಿ ಅಧ್ಯಕ್ಷರು, ರಾಹುಲ್ ಗಾಂಧಿ, ಮುಖ್ಯಮಂತ್ರಿ ಅಥವಾ ನನ್ನ ಬಳಿ ಬಂದು ಮಾತನಾಡಲಿ. ಇದು ಕೇವಲ ಕಾಂಗ್ರೆಸ್ ಮಾತ್ರವಲ್ಲ. ಬಿಜೆಪಿ, ಜೆಡಿಎಸ್, ರೈತ ಸಂಘ ಸೇರಿದಂತೆ ಯಾವುದೇ ಪಕ್ಷವಾದರೂ ಪಕ್ಷದ ವಿಚಾರವನ್ನು ಆಂತರಿಕವಾಗಿ ಚರ್ಚೆ ಮಾಡಬೇಕು ಎಂದು ಹೇಳುತ್ತೇನೆ. ನಾನು ಯಾವುದಾದರೂ ಹುದ್ದೆ ಬಯಸಿದರೆ ಮಾಧ್ಯಮಗಳು ಆ ಸ್ಥಾನ ನನಗೆ ಕೊಡಿಸುತ್ತೀರಾ, ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಯಾವುದೇ ಪ್ರಯೋಜನವಿಲ್ಲ. ಬದಲಿಗೆ ಇದರಿಂದ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.