ರಾಜ್ಯದಲ್ಲಿ ಲೈನ್ ಮೆನ್ ಗಳ ಕೊರತೆ ನೀಗಿಸಲು ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳನ್ನು ನೇಮಕ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಬೀದರ್ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜನಪತಿನಿಧಿಗಳು ಮತ್ತು ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಲ್ಲಿ ಲೈನ್ ಮೆನ್ ಗಳ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ 3 ಸಾವಿರ ಲೈನ್ ಮನ್ ಗಳ ನೇಮಕ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಲಾಗುವುದು ಎಂದರು.
ಟ್ರಾನ್ಸ್ ಫಾರ್ಮರ್ ಗಳ ರಿಪೇರಿ, ಅದರಲ್ಲೂ ರೈತರಿಗೆ ವಿದ್ಯುತ್ ಪೂರೈಸುವ ಟ್ರಾನ್ಸ್ ಫಾರ್ಮರ್ ಗಳ ದುರಸ್ತಿಗೆ ತುರ್ತು ಕ್ರಮ ಕೈಗೊಳ್ಳಬೇಕು. ವಿದ್ಯುತ್ ಪೂರೈಕೆಯಲ್ಲಿ ಆಗುವ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಿ ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಬೇಸಿಗೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಸಲು ಇಲಾಖೆಯು ಸನ್ನದ್ಧವಾಗಿದೆ. ವಿದ್ಯುತ್ ಸಂಬಂಧಿಸಿದಂತೆ ಕೆಲ ತಾಂತ್ರಿಕ ದೋಷಗಳು ಆಗಾಗ್ಗೆ ಕಂಡುಬರುತ್ತಿರುವುದರಿಂದ ಎಲ್ಲಾ ಕಾರ್ಯವನ್ನು ಕಾಲಮಿತಿಯಲ್ಲಿ ಮುಗಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ರಾಜ್ಯದಲ್ಲಿ ದಿನಕ್ಕೆ 16 ರಿಂದ 17 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆಯಿದೆ. ಈ ವರ್ಷ ಯಾವುದೇ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಹೇಳಿದರು.
ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಮಾತನಾಡಿ, ಜಿಲ್ಲೆಯಲ್ಲಿ ವಿದ್ಯುತ್ ಅವಘಡದಲ್ಲಿ ಮರಣ ಹೊಂದಿದ 9 ಜನರ ಕುಟುಂಬಕ್ಕೆ ಈವರೆಗೂ ಪರಿಹಾರ ನೀಡದ ಬಗ್ಗೆ ಇಂಧನ ಸಚಿವರ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕೆ.ಜೆ.ಜಾರ್ಜ್, ಮಂದಿನ 3 ದಿನದೊಳಗಾಗಿ ಪರಿಹಾರ ತಲುಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಗಡಿ ಭಾಗದಲ್ಲಿ ಹಾಗೂ ಇತರೆಡೆ ಅನಧಿಕೃತ ಬಡಾವಣೆಗಳು ನಿರ್ಮಾಣಗೊಂಡಿವೆ. ಅವರಿಗೂ ವಿದ್ಯುತ್ ಸಂಪರ್ಕ ನೀಡುವಂತೆ ಸಚಿವರಿಬ್ಬರೂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಂಸದ ಸಾಗರ್ ಈಶ್ವರ ಖಂಡ್ರೆ ಮಾತನಾಡಿ, ಟ್ರಾನ್ಸ್ ಫಾರ್ಮರ್ ಗಳ ಬದಲಾಣೆಗೆ ಹಾಗೂ ವಾಹನ ಸಾಗಾಟಕ್ಕೆ ಅಧಿಕಾರಿಗಳು ತೀರಾ ವಿಳಂಬ ಮಾಡುತ್ತಿರುವ ಬಗ್ಗೆ ಭಾಲ್ಕಿ ಭಾಗದ ಗ್ರಾಮಗಳ ಜನರಿಂದ ದೂರುಗಳು ಬರುತ್ತಿದ್ದು, ಇದಕ್ಕೆ ಅಧಿಕಾರಿಗಳು ಸ್ಪಂದಿಸಬೇಕು ಎಂದಾಗ, ಯಾವುದೇ ವಿಳಂಬವಿಲ್ಲದೆ ಕೆಲಸ ಮಾಡುವಂತೆ ಕೆ.ಜೆ.ಜಾರ್ಜ್ ಅಧಿಕಾರಿಗಳಿಗೆ ತಾಕೀತು ಮಾಡಿದರು.