Menu

ದೆಹಲಿಗೆ ಅಶೋಕ್, ವಿಜಯೇಂದ್ರ ದೌಡು; ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ?

vijayendra

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಭೇಟಿ ನೀಡಿ ಮರಳಿದ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ರಾಜ್ಯಾಧ್ಯಕ್ಷರ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಬುಧವಾರ ಬೆಳಿಗ್ಗೆ ದಿಢೀರನೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಇಬ್ಬರು ನಾಯಕರು ತೆರಳಿರುವ ಹಿಂದೆ ಪ್ರಮುಖ ಬದಲಾವಣೆ ನಿರೀಕ್ಷಿಸಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತ ಚರ್ಚೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದು ಗಮನಾರ್ಹ. ಉಭಯ ನಾಯಕರ ಭೇಟಿಯ ನಿಖರ ಕಾರಣ ಇನ್ನೂ ಸ್ಪಷ್ಟಪಡಿಸಲಾಗಿಲ್ಲ. ಆದರೆ, ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷರ ನೇಮಕಾತಿ ಕುರಿತು ಶೀಘ್ರದಲ್ಲೇ ತೀರ್ಮಾನವನ್ನು ಪ್ರಕಟಿಸಬಹುದು ಎಂಬ ನಿರೀಕ್ಷೆ ಇದೆ ಎಂಬುದಾಗಿ ಪಕ್ಷದ ಮೂಲಗಳು ತಿಳಿಸಿವೆ.

ಆರ್ ಅಶೋಕ್ ಅವರ ಆಪ್ತ ಮೂಲಗಳ ಪ್ರಕಾರ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಭೇಟಿಗೆ ತೆರಳಿದ್ದಾರೆ ಎನ್ನಲಾಗಿದೆ. ಆದರೆ, ಮತ್ತೊಂದು ಮೂಲಗಳ ಪ್ರಕಾರ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮತ್ತು ಗೃಹ ಸಚಿವ ಅಮಿತ್ ಶಾ ಅವರೊಂದಿಗೂ ಅಶೋಕ್ ಮಾತುಕತೆ ನಡೆಸುವ ಸಾಧ್ಯತೆಯಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ.

ಮತ್ತೊಂದೆಡೆ, ಕಳೆದ 15 ದಿನಗಳಲ್ಲಿ ರಾಜ್ಯದಲ್ಲಿ ನಡೆದ ಬೆಳವಣಿಗೆಗಳು ಮತ್ತು ಪಕ್ಷದೊಳಗಿನ ಭಿನ್ನಾಭಿಪ್ರಾಯಗಳನ್ನು ನಿವಾರಿಸುವ ಪ್ರಯತ್ನದ ಭಾಗವಾಗಿ ಈ ಭೇಟಿ ನಡೆದಿರಬಹುದು ಎಂದೂ ಹೇಳಲಾಗುತ್ತಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕ ಇಬ್ಬರನ್ನೂ ಬಿಜೆಪಿ ಹೈಕಮಾಂಡ್ ದೆಹಲಿಗೆ ಕರೆಸಿಕೊಂಡಿದೆಯೇ ಅಥವಾ ಇವರಾಗಿಯೇ ಹೈಕಮಾಂಡ್ ಭೇಟಿ ಮಾಡಲು ತೆರಳಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಆದರೆ, ಇಬ್ಬರೂ ಪ್ರತ್ಯೇಕವಾಗಿ ತೆರಳಿರುವುದು ನಿಜ. ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಕುರಿತಾಗಿ ಹೈಕಮಾಂಡ್ ತೀರ್ಮಾನ ಘೋಷಿಸಬಹುದು ಎಂಬ ನಿರೀಕ್ಷೆಯೂ ಇದೆ. ಹೀಗಾಗಿ ರಾಜ್ಯಾಧ್ಯಕ್ಷ ಸ್ಥಾನದ ಕುರಿತಾದ ಚರ್ಚೆಗಾಗಿಯೇ ಉಭಯ ನಾಯಕರು ದೆಹಲಿಗೆ ತೆರಳಿರಬಹುದು ಎನ್ನಲಾಗುತ್ತಿದೆ.

Related Posts

Leave a Reply

Your email address will not be published. Required fields are marked *