ಆಗಸ್ಟ್ 5ರಂದು ಬೆಳಿಗ್ಗೆ 6 ಗಂಟೆಯಿಂದ ರಾಜ್ಯ ರಸ್ತೆ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ. ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿದಂತೆ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿದೆ.
ಕೆಎಸ್ಆರ್ಟಿಸಿ ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಜನವರಿಯಲ್ಲೇ 4 ನಿಗಮದ ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಹೆಚ್ಚಳ ಮಾಡಬೇಕಿತ್ತು, ಆದರೆ ಈವರೆಗೆ ಮಾಡಿಲ್ಲ. ಹೀಗಾಗಿ ಸರ್ಕಾರದ ನಡೆ ಖಂಡಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಖಂಡ ಅನಂತ ಸುಬ್ಬರಾವ್ ನೇತೃತ್ವದಲ್ಲಿ ಮುಷ್ಕರ ನಡೆಯಲಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಸಾರಿಗೆ ಮುಷ್ಕರದ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಇ-ಮೇಲ್ ಮೂಲಕ ನೋಟಿಸ್ ಕಳಿಸಿರುವುದಾಗಿ ತಿಳಿಸಿದ್ದಾರೆ. .4 ನಿಗಮದ 1 ಲಕ್ಷದ 15 ಸಾವಿರ ನೌಕರರಿಗೆ 38 ತಿಂಗಳ ಭತ್ಯೆ ನೀಡಬೇಕಿತ್ತು. ಆದರೆ 2025 ಜುಲೈ ಬಂದರೂ ಇನ್ನೂ ಸಂಬಳ ಹೆಚ್ಚಳ ಮಾಡಲು ಮುಂದಾಗಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜುಲೈ 7ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದರು. ಈ ಸಭೆಯಲ್ಲಿ ನೌಕರರ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ ಮತ್ತು ವೇತನ ಹೆಚ್ಚಳ ಬಗ್ಗೆ ಒಂದು ವಾರದೊಳಗೆ ಸಭೆ ಮಾಡುವುದಾಗಿ ಹೇಳಿದ್ದರು. ಆದರೆ ಯಾವುದೇ ಸಭೆ ಕರೆದಿಲ್ಲ ಎಂದು ತಿಳಿಸಿದ್ದಾರೆ.