ತಜ್ಞರು ಮತ್ತು ಅಧಿಕಾರಿಗಳ ತಾಂತ್ರಿಕ ಸಮಿತಿಯ ವರದಿ ಶಿಫಾರಸ್ಸಿನ ಅನ್ವಯ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಜಂಗಲ್ ಸಫಾರಿ (ಉದ್ಯಾನ ಪ್ರವಾಸ) ಪುನರಾರಂಭಿಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ.
ಈ ಬಗ್ಗೆ ತಾಂತ್ರಿಕ ಸಮಿತಿಯ ವರದಿಯನ್ನು ಅಂಗೀಕರಿಸಲಾಗಿದ್ದು, ವೈಜ್ಞಾನಿಕ ಮೌಲ್ಯಮಾಪನದ ನಂತರ ಪರಿಣಾಮಕಾರಿ ಸಾಗಣೆ ಸಾಮರ್ಥ್ಯದ ಆಧಾರದ ಮೇಲೆ ಜಂಗಲ್ ಸಫಾರಿಗೆ ಹಸಿರು ನಿಶಾನೆ ನೀಡಲಾಗಿದೆ. ಸಮಿತಿಯ ಶಿಫಾರಸಿನ ಪ್ರಕಾರ ನಿಯಂತ್ರಿತ ರೀತಿಯಲ್ಲಿ ಜಂಗಲ್ ಸಫಾರಿ ನಡೆಸಲು ಸೂಚನೆ ನೀಡಲಾಗಿದೆ.
ಕರ್ನಾಟಕವು ಪರಿಸರ ಪ್ರವಾಸೋದ್ಯಮದಲ್ಲಿ ಅಪಾರ ಸಾಮರ್ಥ್ಯ ಹೊಂದಿದ್ದು, ಸದಾ ಸುಸ್ಥಿರ ಪ್ರವಾಸೋದ್ಯಮ ಮಾದರಿ ಪಾಲಿಸಿಕೊಂಡು ಬಂದಿದೆ. ಇದು ಸ್ಥಳೀಯ ಉದ್ಯೋಗ ಮತ್ತು ಜೀವನೋಪಾಯದ ಅವಕಾಶಗಳ ಸೃಷ್ಟಿಗೆ ಸಹಾಯ ಮಾಡುತ್ತದೆ ಹಾಗೂ ಸ್ಥಳೀಯ ಆರ್ಥಿಕತೆಯನ್ನು ಉತ್ತೇಜಿಸಲು ನೆರವಾಗುತ್ತದೆ.
ಪರಿಸರ ವ್ಯವಸ್ಥೆಯ ಸಮಗ್ರತೆಯನ್ನು ರಕ್ಷಿಸುವ ಜೊತೆಗೆ, ಪರಿಸರ ಪ್ರವಾಸೋದ್ಯಮವು ವನ್ಯಜೀವಿ ಸಂರಕ್ಷಣೆ, ಸ್ಥಳೀಯರ ಜೀವನೋಪಾಯ ಮತ್ತು ಪ್ರವಾಸಿಗರ ಉತ್ತಮ ಅನುಭವಕ್ಕೆ ಪೂರಕವಾದ ಪರಿಸರ ಪ್ರವಾಸೋದ್ಯಮಕ್ಕೆ ಕರ್ನಾಟಕ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಕಚೇರಿಯ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಸಮಿತಿಯ ಶಿಫಾರಸಿನಂತೆ ನಿಯಂತ್ರಿತ ಹಾಗೂ ಸುರಕ್ಷಿತ ರೀತಿಯಲ್ಲಿ ಸಫಾರಿ ನಡೆಸಲಾಗಲಿದ್ದು, ಈ ನಿರ್ಧಾರದಿಂದ ಸ್ಥಳೀಯ ಪ್ರವಾಸೋದ್ಯಮ, ಉದ್ಯೋಗಾವಕಾಶ ಹಾಗೂ ಆರ್ಥಿಕ ಚಟುವಟಿಕೆಗಳಿಗೆ ಹೊಸ ಚೈತನ್ಯ ದೊರೆಯುವ ನಿರೀಕ್ಷೆಯಿದೆ.
2025ರ ನವೆಂಬರ್‌ನಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತೀವ್ರಗೊಂಡಿದ್ದನ್ನು ಪರಿಗಣಿಸಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಬಳಿಕ ಪರಿಸ್ಥಿತಿಯ ಅಧ್ಯಯನಕ್ಕಾಗಿ ತಾಂತ್ರಿಕ ಸಮಿತಿ ನೀಡಿದ ಮಧ್ಯಂತರ ವರದಿಯ ಅನ್ವಯ 2026ರ ಫೆಬ್ರವರಿ 19ರಿಂದ ಶೇ.50ರ ಸಾಮರ್ಥ್ಯದಲ್ಲಿ ಹಾಗೂ ಕಡಿಮೆ ಅವಧಿಯ ಸಫಾರಿಗೆ ಸರ್ಕಾರ ಅವಕಾಶ ನೀಡಿತ್ತು. ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಸಿ, ಅಂತಿಮ ವರದಿ ಬರುವವರೆಗೆ ಸೀಮಿತ ಪ್ರಮಾಣದಲ್ಲಿ ಮಾತ್ರ ಸಫಾರಿ ನಡೆಸಲು ನಿರ್ಧರಿಸಲಾಗಿತ್ತು.


