ಈ ವರ್ಷ ಡಿಸೆಂಬರ್ ಅಥವಾ ಮುಂದಿನ ವರ್ಷ ಜನವರಿಯಲ್ಲಿ ಬೆಂಗಳೂರು ಹಬ್ಬ, ಐಫಾ ಪ್ರಶಸ್ತಿ ಸಮಾರಂಭ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ (ಐಫಾ) ವತಿಯಿಂದ ಉತ್ಸವ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸುವ ಸಂಬಂಧ ಐಫಾ ಪ್ರತಿನಿಧಿಗಳ ಜತೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಭೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಡಿಸೆಂಬರ್ ಅಥವಾ ಜನವರಿಯಲ್ಲಿ ಬೆಂಗಳೂರು ಹಬ್ಬ ಹಾಗೂ ಐಫಾ ಪ್ರಶಸ್ತಿ ವಿತರಣೆ ಸಮಾರಂಭ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಐಫಾದವರ ಜತೆ ಚರ್ಚೆ ನಡೆಸಲಾಯಿತು. ಬೆಂಗಳೂರಿನಲ್ಲಿ ಒಂದು ವಾರ ಉತ್ತಮ ವಾತಾವರಣ ಸೃಷ್ಟಿ ಮಾಡುವುದು ನಮ್ಮ ಆದ್ಯತೆ. ಬೆಂಗಳೂರಿನ ಬಗ್ಗೆ ಮಹತ್ವ ನೀಡಬೇಕು ಎನ್ನುವುದು ನಮ್ಮ ಆಲೋಚನೆ. ಈ ಹಿಂದೆ ರಾಜಸ್ಥಾನದಲ್ಲಿ ನಡೆದಿತ್ತು. ಇತ್ತೀಚಿನ ದಿನಗಳಲ್ಲಿ ಬಾಲಿವುಡ್ ಗಿಂತ ನಮ್ಮ ಸ್ಯಾಂಡಲ್ ವುಡ್ ಎತ್ತರಕ್ಕೆ ಹೋಗಿದೆ. ಇದಕ್ಕೆ ಉತ್ತೇಜನ ಕೊಡಬೇಕು ಎಂಬುದು ನಮ್ಮ ಉದ್ದೇಶ. ಅಕ್ಟೋಬರ್ ನಲ್ಲಿ ದಸರಾವಿರುವ ಕಾರಣಕ್ಕೆ ಡಿಸೆಂಬರ್, ಜನವರಿಯಲ್ಲಿ ನಡೆಸಬಹುದು ಎಂದು ತಿಳಿಸಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಸಂಸ್ಕೃತಿಯನ್ನು ಪರಿಚಯಿಸಲು ಅವಕಾಶ ಸಿಗಲಿದೆ. ಮುಂಬೈ ಬಿಟ್ಟರೆ ಬೆಂಗಳೂರು ಈ ರೀತಿಯ ಕಾರ್ಯಕ್ರಮಗಳಿಗೆ ಸೂಕ್ತ ಎಂದು ಆಯೋಜಕರು ತಿಳಿಸಿದ್ದಾರೆ ಎಂದು ಹೇಳಿದರು.
ಹತ್ಯೆಯನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳಬಾರದು
ಸುಹಾಸ್ ಶೆಟ್ಟಿ ಹತ್ಯೆಯನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಸಿಕೊಳ್ಳಬಾರದು. ಕರ್ನಾಟಕ ರಾಜ್ಯ ಶಾಂತಿಯಿಂದಿದೆ. ಶಾಂತಿಯಿಂದ ಇರುವುದಕ್ಕೆ ಬಿಜೆಪಿಯವರು ಸಹಕಾರ ನೀಡಬೇಕು ಎಂದು ಡಿಸಿಎಂ ಹೇಳಿದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿ, ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಬಗ್ಗೆ ಕೇಳಿದಾಗ, ಹತ್ಯೆಯಲ್ಲಿ ಭಾಗಿಯಾಗಿರುವ ತಪ್ಪಿತಸ್ಥರ ವಿರುದ್ಧ ಪೊಲೀಸರು ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ. ಈ ವಿಚಾರದಲ್ಲಿ ನಾವು ತಲೆಹಾಕಲು ಹೋಗುವುದಿಲ್ಲ ಎಂದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಮಂಗಳೂರಿನ ಪೊಲೀಸರು ಉತ್ತಮ ಸಾಮರ್ಥ್ಯ ಹೊಂದಿದ್ದಾರೆ. ಈ ಘಟನೆ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಡಿಸಿಎಂ ಹೇಳಿದರು.