Menu

ಬೆಳಗಾವಿ ಅಧಿವೇಶನ ಆರಂಭ: ಅಗಲಿದ ಗಣ್ಯರಿಗೆ ಸಂತಾಪ ಸಲ್ಲಿಸಿದ ಸಿಎಂ

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭಗೊಂಡಿದ್ದು, ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸಲ್ಲಿಸಿದರು.

ಮಾಜಿ ಸಚಿವರು, ಹಾಲಿ ಸಂಸದರಾಗಿದ್ದ ಉತ್ತರ ಕರ್ನಾಟಕ ಭಾಗದ  ಹೆಚ್.ವೈ.ಮೇಟಿ ಅವರ ಕುರಿತು ಮಾತನಾಡಿದ ಮುಖ್ಯಮಂತ್ರಿ,  ದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕ. ನನ್ನ ಅನುಯಾಯಿಗಳಲ್ಲಿ ಮೇಟಿ ಅಗ್ರಗಣ್ಯರು.  ವೃತ್ತಿಯಲ್ಲಿ ಕೃಷಿಕರಾಗಿದ್ದ ಮೇಟಿಯವರು ಬಿಲ್‌ಕೆರೂರು ಮಂಡಳ ಪಂಚಾಯಿತಿ ಅಧ್ಯಕ್ಷರಾಗುವ ಮೂಲಕ ರಾಜಕೀಯ ಪ್ರವೇಶಿಸಿದ್ದರು. ಬಾಗಲಕೋಟೆ ತಾಲೂಕು ಕೃಷಿ ಹುಟ್ಟುವಳಿ ಮಾರಾಟ ಸಮಿತಿ, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ, ಮತ್ತು ಎಂ.ಎಸ್.ಐ.ಎಲ್.ನ ಅಧ್ಯಕ್ಷರಾಗಿ ಡಿ.ಸಿ.ಸಿ ಬ್ಯಾಂಕ್ ಹಾಗೂ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು ಎಂದು ಸ್ಮರಿಸಿದರು.

1983 ರಿಂದಲೂ ಹೆಚ್.ವೈ. ಮೇಟಿಯವರೊಂದಿಗೆ ಒಡನಾಡವಿತ್ತು. ನಾನು ಜನತಾ ಪಕ್ಷ, ಜನತಾ ದಳ ಹಾಗೂ ಕಾಂಗ್ರೆಸ್ ಪಕ್ಷದಲ್ಲಿದ್ದರೂ ನಾನು ಕೈಗೊಳ್ಳುವ ತೀರ್ಮಾನಗಳಿಗೆ ಬದ್ಧರಾಗಿದ್ದರು. ಅಹಿಂದ ಸಂಘಟನೆಯಲ್ಲಿ ನನ್ನೊಂದಿಗೆ ಹೆಗಲು ಕೊಟ್ಟು ದುಡಿದವರು.ಶಾಸಕರಾಗಿ, ಸಂಸದರಾಗಿ, ಸಚಿವರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಮೇಟಿಯವರು ಸಜ್ಜನ ರಾಜಕಾರಣಿ ರಾಜಕೀಯ ತತ್ವಗಳನ್ನು ತಪ್ಪದೇ ಪಾಲಿಸುತ್ತಿದ್ದ ಅವರು ಜನರೊಂದಿಗೆ ಬೆರೆಯುವ ಗುಣವಿದ್ದ ಮೇಟಿಯವರು, ಜಾತ್ಯಾತೀತ ತತ್ವದ ಪಾಲಕರಾಗಿದ್ದರು. ಅವರು ಎಲ್ಲ ಜಾತಿ-ಧರ್ಮಗಳನ್ನು ಪ್ರೀತಿಯಿಂದ ಕಾಣುವ ಸ್ವಭಾವದವರಾಗಿದ್ದರು ಎಂದು ಹೇಳಿದರು.

ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಆರ್.ವಿ. ದೇವರಾಜ್  ವೃತ್ತಿಯಲ್ಲಿ ವ್ಯಾಪಾರಸ್ಥರಾಗಿದ್ದ್ದದು, ಉತ್ತಮ ಸಂಘಟಕರಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಆರ್.ವಿ. ದೇವರಾಜ್ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ದೇವರಾಜು ಅವರು, 1989ರ ಚುನಾವಣೆಯಲ್ಲಿ ಮೊದಲ ಬಾರಿಗೆ ಮತ್ತು 1999 ಹಾಗೂ 2013ರಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. 2004 ರಿಂದ 2010 ರವರೆಗೆ ವಿಧಾನ ಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಅಲ್ಲದೇ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹಾಗೂ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅವರ ಅಗಲಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದು ಸಂತಾಪ ಸೂಚಿಸಿದರು.

ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ್, ಅವರು ವಿವಿಧ ಸಂಘ-ಸಂಸ್ಥೆಗಳ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದ ಅವರು ತಾಲ್ಲೂಕು ಬೋರ್ಡ್ ಅಧ್ಯಕ್ಷರಾಗಿ, ತುಂಗಭದ್ರಾ ಅಣೆಕಟ್ಟು ಮಂಡಳಿ ಹಾಗೂ ಹಟ್ಟಿ ಚಿನ್ನದ ಗಣಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.1999ರಲ್ಲಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದಿಂದ 11ನೇ ವಿಧಾನಸಭೆಗೆ ಚುನಾಯಿತರಾಗಿದ್ದರು. ಕ್ಷೇತ್ರದ ಜನರ ಹಾಗೂ ರೈತರ ಪರವಾಗಿ ಸದಾ ಶ್ರಮಿಸುತ್ತಿದ್ದರು. ಶಿವಶರಣಪ್ಪಗೌಡ ಪಾಟೀಲ್ ನಿಧನದಿಂದ ಒಬ್ಬ ಮುಸ್ಸದ್ದಿ ಹಾಗೂ ರೈತರ ಪರ ನಾಯಕನನ್ನು ಕಳೆದುಕೊಂದಂತಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದರು.

ಗುಬ್ಬಿ ತಾಲೂಕಿನಲ್ಲಿ ಜನಿಸಿದ್ದ  ಸಾಲುಮರದ ತಿಮ್ಮಕ್ಕ  ನೆಟ್ಟಿರುವ ಮರಗಳು ಇವತ್ತು ಹೆಮ್ಮರವಾಗಿ ಬೆಳೆದು ನಿಂತು ಜನರಿಗೆ ನೆರಳು ನೀಡುತ್ತಿವೆ. 4,000 ಕ್ಕೂ ಹೆಚ್ಚು ಮರಗಳನ್ನು ಬೆಳೆಸುವ ಮೂಲಕ ಸಾಲುಮರದ ತಿಮ್ಮಕ್ಕ ಎಂದೇ ಹೆಸರು ವಾಸಿಯಾಗಿದ್ದರು. ತಿಮ್ಮಕ್ಕ ಅವರು ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ತಮ್ಮ ಕೊನೆಯ ಆಸೆಯನ್ನು ಪತ್ರ ಮುಖೇನ ತಿಳಿಸಿದ್ದು, ಈ ಬಗ್ಗೆ ಸರ್ಕಾರ ಪರಿಶೀಲಿಸಲಿದೆ. ಪರಿಸರದ ಬಗೆಗಿನ ಇವರ ಅತೀವ ಕಾಳಜಿಯನ್ನು ಪರಿಗಣಿಸಿ ಸರ್ಕಾರವು ಇವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಪರಿಸರ ರಾಯಭಾರಿಯನ್ನಾಗಿ ನೇಮಿಸಿತ್ತು. ಅರಣ್ಯ ಇಲಾಖೆಯ ವತಿಯಿಂದ ಪರಿಸರವಾದಿಗಳಿಗೆ ಪ್ರತಿವರ್ಷ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿಯನ್ನು ಕೊಡುವ ಬಗ್ಗೆ ಈಗಾಗಲೇ ಘೋಷಣೆ ಮಾಡಿದ್ದೇವೆ.ತಿಮ್ಮಕ್ಕ ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಗೌರವ ನಮನ ಸಲ್ಲಿಸಿದರು.

ಎಸ್.ಎಲ್.ಬೈರಪ್ಪ ಕನ್ನಡ ಸಾಹಿತ್ಯ ಲೋಕದ ದಿಗ್ಗಜರಲ್ಲಿ ಒಬ್ಬರಾಗಿದ್ದವರು. ಇವರ ಹಲವು ಪುಸ್ತಕಗಳು ಇಂಗ್ಲೀಷ್ ಸೇರಿದಂತೆ ಭಾರತದ ವಿವಿಧ ಭಾಷೆಗಳಿಗೆ ಅನುವಾದಗೊಂಡಿವೆ. 1931ರ ಆಗಸ್ಟ್ 20 ರಂದು  ಹಾಸನ ಸಂತೆಶಿವರ ಗ್ರಾಮದಲ್ಲಿ ಜನಿಸಿದ್ದ ಭೈರಪ್ಪನವರು, ಕಿತ್ತು ತಿನ್ನುವ ಬಡತನದ ನಡುವೆಯೂ ಅತಿ ಎತ್ತರಕ್ಕೆ ಬೆಳೆದ ವ್ಯಕ್ತಿತ್ವ. ಹುಬ್ಬಳ್ಳಿಯ ಶ್ರೀ ಕಾಡಸಿದ್ಧೇಶ್ವರ ಕಾಲೇಜು, ಗುಜರಾತ್‌ನ ಸರ್ದಾರ್ ಪಟೇಲ್ ವಿಶ್ವವಿದ್ಯಾಲಯ, ದೆಹಲಿಯ ಎನ್‌ಸಿಇಆರ್‌ಟಿ ಮತ್ತು ಮೈಸೂರಿನ ಪ್ರಾದೇಶಿಕ ಶಿಕ್ಷಣ ಕಾಲೇಜಿನಲ್ಲಿ ತರ್ಕ ಮತ್ತು ಮನೋವಿಜ್ಞಾನದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. 25 ಕಾದಂಬರಿಗಳನ್ನು ಬರೆದಿದ್ದಾರೆ. 1999ರಲ್ಲಿ ಕನಕಪುರದಲ್ಲಿ ನಡೆದ 67ನೇ ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.ಪದ್ಮಶ್ರೀ, ಪದ್ಮಭೂಷಣ, ಸರಸ್ವತಿ ಸಮ್ಮಾನ್, ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪಂಪ ಪ್ರಶಸ್ತಿ, ಎನ್.ಟಿ.ಆರ್ ರಾಷ್ಟ್ರೀಯ ಪ್ರಶಸ್ತಿ, ಡಾ: ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿ ಸೇರಿದಂತೆ ಹತ್ತು ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಭೈರಪ್ಪ ಅವರ ನಿಧನದಿಂದ ಸಾಹಿತ್ಯ ಪ್ರೇಮಿಗಳಿಗೆ ದೊಡ್ಡ ನಷ್ಟವುಂಟಾಗಿದೆ ಎಂದು ಸಂತಾಶಪ ಸಲ್ಲಿಸಿದರು.

ಹಾಸ್ಯ ನಟ ಎಂ.ಎಸ್. ಉಮೇಶ್ ಅವರ ಕುರಿತು ಮಾತನಾಡಿದ ಸಿದ್ದರಾಮಯ್ಯ,  ಕನ್ನಡ ವೃತ್ತಿ ರಂಗಭೂಮಿ ಮತ್ತು ಚಲನಚಿತ್ರರಂಗದ ಜನಪ್ರಿಯ ಹಾಸ್ಯ ಕಲಾವಿದರಾಗಿದ್ದ ಉಮೇಶ್  ವಿಶಿಷ್ಟ ಸಂಭಾಷಣೆ, ಅಭಿನಯ, ಅಭಿವ್ಯಕ್ತಿಗಳಿಂದ ಕನ್ನಡ ಚಿತ್ರರಸಿಕರ ಮನ ಗೆದ್ದವರು.  ಕೆ. ಹಿರಣ್ಣಯ್ಯ ಮಿತ್ರ ಮಂಡಲಿಯಲ್ಲಿ ಅ.ನ.ಕೃ. ರವರ ‘ಜಗಜ್ಯೋತಿ ಬಸವೇಶ್ವರ’ ನಾಟಕದಲ್ಲಿ ಬಿಜ್ಜಳನ ಮಗನ ಪಾತ್ರದಲ್ಲಿ ಇವರ ಅಭಿನಯ ಎಲ್ಲರ ಗಮನ ಸೆಳೆದಿತ್ತು. ಗುಬ್ಬಿ ವೀರಣ್ಣ, ಕೆ.ಹಿರಣ್ಣಯ್ಯ, ಎಂ.ಸಿ. ಮಹಾದೇವಸ್ವಾಮಿಯಂತಹ ರಂಗ ದಿಗ್ಗಜರ ಗರಡಿಯಲ್ಲಿ ಬೆಳೆದ ಉಮೇಶ್ ರವರು, ಹಲವು ದಶಕಗಳ ಕಾಲ ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಸೇವೆ ಸಲ್ಲಿಸಿದರು.  ಉಮೇಶ್ ರವರ ನಿಧನದಿಂದ ಕನ್ನಡ ಚಿತ್ರರಂಗ ಅನುಭವಿ ಹಾಗೂ ಉತ್ತಮ ನಟನನ್ನು ಕಳೆದುಕೊಂಡಂತಾಗಿದೆ ಎಂದು ಗೌರವಪೂರ್ಣ ನಮನ ಸಲ್ಲಿಸಿದರು.

ಅಗಲಿದ ಎಲ್ಲರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಮತ್ತು ಅವರ ಕುಟುಂಬದ ಸದಸ್ಯರಿಗೆ  ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ತಿಳಿಸಿ, ಸಭಾಧ್ಯಕ್ಷ ಯು.ಟಿ. ಖಾದರ್ ಸದನದಲ್ಲಿ ಮಂಡಿಸಿದ ಸಂತಾಪ ಸೂಚನಾ ನಿರ್ಣಯವನ್ನು ಮುಖ್ಯಮಂತ್ರಿ ಅನುಮೋದಿಸಿದರು.

Related Posts

Leave a Reply

Your email address will not be published. Required fields are marked *