ಬಳ್ಳಾರಿಯಲ್ಲಿ ಗುರುವಾರ ರಾತ್ರಿ ಸಂಭವಿಸಿದ ಘರ್ಷಣೆ ಸಂಬಂಧ ನಿನ್ನೆಯಷ್ಟೇ ಅಧಿಕಾರ ವಹಿಸಿಕೊಂಡಿದ್ದ ಬಳ್ಳಾರಿ ಜಿಲ್ಲೆಯ ಸೂಪರಿಟೆಂಡೆಂಟ್ ಪವನ್ ನೆಜ್ಜುರ್ ಅವರನ್ನು ಅಮಾನತುಗೊಳಿಸಲಾಗಿದೆ.
ವಾಲ್ಮೀಕಿ ಜಯಂತಿ ಅಂಗವಾಗಿ ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾನರ್ ಅಳವಡಿಸುವ ಕುರಿತು ನಡೆದ ಘರ್ಷಣೆಯಲ್ಲಿ ಗಾಳಿಯಲ್ಲಿ ಹಲವು ಸುತ್ತಿನ ಫೈರಿಂಗ್ ಆಗಿದ್ದು, ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು.
ಗಾಳಿಯಲ್ಲಿ ಗುಂಡು ಹಾರಿಸುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಗುಂಡು ತಗುಲಿದ ಪರಿಣಾಮ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಡಿಜಿಪಿ ಬಳ್ಳಾರಿಯ ಸೂಪರಿಟೆಂಡೆಂಟ್ ಪವನ್ ನಿಜ್ಜಾರ್ ಅವರನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಘಟನೆಯ ಬಗ್ಗೆ ಮೇಲಾಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಡಿಜಿ-ಐಜಿಪಿ ಶುಕ್ರವಾರ ಹೊರಡಿಸಿದ ಆದೇಶದಲ್ಲಿ ಸೂಚಿಸಿದ್ದಾರೆ.
ಬ್ಯಾನರ್ ಕಟ್ಟುವ ವಿಷಯದಲ್ಲಿ ಇಲಾಖೆ ಸೂಕ್ತವಾಗಿ ಕಾರ್ಯ ನಿರ್ವಹಿಸಿಲ್ಲ. ಅಲ್ಲದೇ ಮುಂಜಾಗೃತಾ ಕ್ರಮ ಕೈಗೊಳ್ಳದೇ ಕರ್ತವ್ಯ ಲೋಪ ಎಸಗಲಾಗಿದೆ ಎಂದು ಆದೇಶದಲ್ಲಿ ಆರೋಪಿಸಲಾಗಿದೆ.


