Menu

ಎಂಎಲ್ ಸಿ ಸೂರಜ್ ರೇವಣ್ಣಗೆ ಬಿಗ್ ರಿಲೀಫ್: ಬಿ ರಿಪೋರ್ಟ್ ಸಲ್ಲಿಸಿದ ಸಿಐಡಿ

suraj revanna

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನಪರಿಷತ್​ ಜೆಡಿಎಸ್ ಸದಸ್ಯ ಸೂರಜ್​ ರೇವಣ್ಣ ವಿರುದ್ಧದ ಒಂದು ಪ್ರಕರಣದಲ್ಲಿ ಸಿಐಡಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ.

ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ 2 ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ಸೂರಜ್ ರೇವಣ್ಣ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದ್ದವು. ಒಂದು ಪ್ರಕರಣದಲ್ಲಿ ಸಿಐಡಿ ಈಗಾಗಲೇ ಚಾರ್ಜ್​​ಶೀಟ್ ಸಲ್ಲಿಸಿದೆ. ಮತ್ತೊಂದು ಪ್ರಕರಣದಲ್ಲಿ ಇದೀಗ ಬಿ ರಿಪೋರ್ಟ್ ಸಲ್ಲಿಸಿದೆ.

ಸೂರಜ್ ರೇವಣ್ಣ ವಿರುದ್ಧ ಬ್ರಿಗೇಡ್ ಖಜಾಂಚಿ ನೀಡಿದ್ದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಸಿಐಡಿ ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ.

ಹಿನ್ನೆಲೆ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 2024ರ ಜೂನ್ 22 ರಂದು ಸಂತ್ರಸ್ತ ದೂರು ನೀಡಿದ್ದರು. ಇದರ ಆಧಾರದಲ್ಲಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್​​ಗಳ ಅಡಿ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಹಾಸನದ ಜಿಲ್ಲಾ ಪೊಲೀಸ್ ಠಾಣೆಗೆ ಸಂತ್ರಸ್ತ ದೂರು ನೀಡಲು ಆಗಮಿಸಿದ್ದರು. ಆದರೆ, ನಂತರ ಅದನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರಿಗೆ ವರ್ಗಾಯಿಸಲಾಗಿತ್ತು. ಅದರಂತೆ, ಜೂನ್ 23 ರಂದು ಸೂರಜ್ ರೇವಣ್ಣರನ್ನು ಬಂಧಿಸಲಾಗಿತ್ತು.

ಮತ್ತೊಂದೆಡೆ, ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಎಂಬವರು ಸಂತ್ರಸ್ತನ ವಿರುದ್ಧ ಪ್ರತಿ ದೂರು ನೀಡಿದ್ದರು. ಸೂರಜ್ ರೇವಣ್ಣ ವಿರುದ್ಧ ದೂರುದಾರ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿ, ಐದು ಕೋಟಿ ರೂ. ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಬ್ಲ್ಯಾಕ್​​ಮೇಲ್ ಮಾಡಿದ್ದರು ಎಂದು ಶಿವಕುಮಾರ್ ದೂರಿನಲ್ಲಿ ಉಲ್ಲೇಖಿಸಿದ್ದರು.

Related Posts

Leave a Reply

Your email address will not be published. Required fields are marked *