ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿ ಬಂಡಾಯ ಘೋಷಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ.
ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಹೈಕಮಾಂಡ್ ಭೇಟಿ ಮಾಡಲು ದೆಹಲಿಗೆ ತೆರಳಿದ್ದಾರೆ.
ಭಿನ್ನಮತ ಘೋಷಿಸಿರುವ ಬಣದ ನಾಯಕರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ ಯತ್ನಾಳ್, ಕೇಂದ್ರ ಸಚಿವ ವಿ.ಸೋಮಣ್ಣ ನಿವಾಸದಲ್ಲಿ ಸಹದ್ಯೋಗಿಗಳ ಜೊತೆಗೂಡಿ ಸಭೆ ನಡೆಸಿದ್ದು, ಕಾರ್ಯತಂತ್ರ ರೂಪಿಸುವ ಸಮಯದಲ್ಲಿ ಪಕ್ಷದ ಶಿಸ್ತು ಸಮಿತಿಯಿಂದ ನೋಟಿಸ್ ಜಾರಿ ಮಾಡಲಾಗಿದೆ.
ಶೋಕಾಸ್ ನೋಟಿಸ್ ಗೆ ಉತ್ತರ ನೀಡಲು 72 ಗಂಟೆಗಳ ಗಡುವು ನೀಡಲಾಗಿದ್ದು, ಒಂದು ವೇಳೆ ನಿಗದಿತ ಅವಧಿಯೊಳಗೆ ಉತ್ತರ ನೀಡದೇ ಇದ್ದರೆ ಶಿಸ್ತು ಕ್ರಮ ಮುಂದುರಿಸಲಾಗುವುದು ಎಂದು ಯತ್ನಾಳ್ ಗೆ ಎಚ್ಚರಿಕೆ ನೀಡಲಾಗಿದೆ.
ಯತ್ನಾಳ್ ಬಣದಲ್ಲಿ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, ಜಿಎಂ ಸಿದ್ದೇಶ್ವರ, ವಿ. ಸೋಮಣ್ಣ ಸೇರಿದಂತೆ ಹಲವು ಮುಖಂಡರು ಗುರುತಿಸಿಕೊಂಡಿದ್ದಾರೆ.