ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ, ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿದ್ದ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಎರಡು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಹೈಕೋರ್ಟ್ನಲ್ಲಿ ವಿನಯ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ ಆಗಿತ್ತು. ಬಳಿಕ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಿದ್ದರು. ವಕೀಲ ಶರಣಗೌಡ ಪಾಟೀಲ್ ಅವರ ಕುಲಕರ್ಣಿ ಪರ ಸುಪ್ರೀಂಕೋರ್ಟ್ನಲ್ಲಿ ವಾದ ಮಂಡಿಸಿ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದೆ. ಸಾಕ್ಷಿಗಳ ವಿಚಾರಣೆ ಮುಗಿದಿದ್ದು, ತನಿಖೆ ಹಾಗೂ ಸಾಕ್ಷ್ಯ ಹಂತದಲ್ಲಿ ಯಾವುದೇ ಅಡಚಣೆ ಉಂಟಾಗುವ ಸಾಧ್ಯತೆ ಇಲ್ಲ ಎಂದು ವಕೀಲರ ತಂಡ ನ್ಯಾಯಪೀಠಕ್ಕೆ ತಿಳಿಸಿದೆ.
ಸುಪ್ರೀಂ ಕೋರ್ಟ್ನ ನ್ಯಾ. ಸಂಜಯ್ ಕರೋಲ ಅವರ ಪೀಠವು ವಿನಯ್ ಕುಲಕರ್ಣಿ ಅವರಿಗೆ ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ವಿನಯ್ ಕುಲಕರ್ಣಿ ಶರಣಾಗಿದ್ದರು. ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದಡಿ ವಿನಯ್ ಕುಲಕರ್ಣಿ ಅವರ ಜಾಮೀನು ರದ್ದು ಮಾಡುವಂತೆ ಸಿಬಿಐ ಮನವಿ ಮಾಡಿತ್ತು, ಹಾಗಾಗಿ ಜಾಮೀನು ರದ್ದು ಆಗಿತ್ತು.
ಜಾಮೀನಿಗೆ ಸಂಬಂಧಿಸಿದ ಷರತ್ತುಗಳು, ಧಾರವಾಡ ಜಿಲ್ಲೆಗೆ ಪ್ರವೇಶ ನೀಡಬೇಕೇ ಅಥವಾ ಬೇಡವೇ ಎಂಬ ವಿಷಯ, ಇತರ ನಿಯಂತ್ರಣ ಕ್ರಮಗಳು. ಇವೆಲ್ಲವನ್ನೂ ವಿಚಾರಣಾ ನ್ಯಾಯಾಲಯ ಕೋರ್ಟ್ ತೀರ್ಮಾನಿಸಲಿದೆ ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿ ಹೇಳಿದೆ.
ಜೂನ್ 15, 2016ರಲ್ಲಿ ಯೋಗೇಶ್ ಗೌಡ ಹತ್ಯೆಯಾಗಿತ್ತು. ಸಪ್ತಾಪುರದಲ್ಲಿರುವ ಜಿಮ್ನಲ್ಲೇ ಅವರನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಯಿತು. ಪ್ರಕರಣದಲ್ಲಿ 21ಕ್ಕೂ ಹೆಚ್ಚು ಮಂದಿ ಆರೋಪಿಗಳಿದ್ದಾರೆ. ರಾಜಕೀಯ ವೈಷಮ್ಯದಿಂದ ವಿನಯ್ ಕುಲಕರ್ಣಿ ಹತ್ಯೆಗೆ ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿತ್ತು.


