ಬೆಂಗಳೂರು: ಸ್ಮಾರ್ಟ್ ಮೀಟರ್ ಗುತ್ತಿಗೆಯಲ್ಲಿ ಅಕ್ರಮ ನಡೆದಿದೆ. ಈ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಲು ನಿರ್ದೇಶನ ಕೋರಿ ಬಿಜೆಪಿ ಮುಖಂಡರು ಸಲ್ಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ.
ಬಿಜೆಪಿ ನಾಯಕರಾದ ಸಿ.ಎನ್. ಅಶ್ವತ್ಥನಾರಾಯಣ, ಎಸ್.ಆರ್. ವಿಶ್ವನಾಥ್ ಮತ್ತು ಧೀರಜ್ ಮುನಿರಾಜು ಸಲ್ಲಿಸಿದ್ದ ಖಾಸಗಿ ದೂರು ರದ್ದು ಕೋರಿ ಇಂಧನ ಸಚಿವ ಕೆ.ಜೆ. ಜಾರ್ಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ನ್ಯಾಯಪೀಠ ಮಂಗಳವಾರ ಅರ್ಜಿಯನ್ನು ರದ್ದುಗೊಳಿಸಿ ಆದೇಶಿಸಿದೆ.
ಖಾಸಗಿ ದೂರಿನ ಸಂಬಂಧ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಆದೇಶವನ್ನೂ ರದ್ದುಪಡಿಸಿದೆ.
ಈ ಹಿಂದೆ ನಡೆದಿದ್ದ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಒಂದು ರಾಜಕೀಯ ಪಕ್ಷ ಮತ್ತೊಂದು ರಾಜಕೀಯ ಪಕ್ಷದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಖಾಸಗಿ ದೂರು ಪರಿಗಣಿಸಿರುವ ವಿಚಾರಣಾ ನ್ಯಾಯಾಲಯ, ತನಿಖಾ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದ್ದು, ಇದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಪೀಠಕ್ಕೆ ವಿವರಿಸಿದರು.
ದೂರುದಾರರ ಪರ ವಕೀಲರು, ಯಾವುದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ದೂರು ದಾಖಲಿಸಿದಾಗ ಅದಕ್ಕೆ ಸಂಬಂಧಿಸಿದಂತೆ ವರದಿಯನ್ನು ಕೇಳುವುದಕ್ಕೆ ನ್ಯಾಯಾಲಯಕ್ಕೆ ಅವಕಾಶ ಇರಲಿದೆ. ಈ ಅರ್ಜಿಗೆ ಸಂಬಂಧಿಸಿದಂತೆ ಪ್ರತಿವಾದಿಗಳಾದ ನಮ್ಮ ಕಕ್ಷಿದಾರರಿಗೆ ನೋಟಿಸ್ ಬಂದಿಲ್ಲ, ಅರ್ಜಿಯ ಪ್ರತಿಯನ್ನು ನೋಡಿಲ್ಲ. ಆದ ಕಾರಣದ ವಿಚಾರಣೆ ಮುಂದೂಡಬೇಕು ಎಂದು ಕೋರಿದರು.


