ದೆಹಲಿಯಲ್ಲಿ ಬಾಂಬ್ ಸ್ಪೋಟವಾಗಿರುವ ಹಿನ್ನೆಲೆಯಲ್ಲಿ ಇಡೀ ರಾಜ್ಯದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಜಿಲ್ಲಾ ಕೇಂದ್ರಗಳು, ಬೆಂಗಳೂರು ವಿಮಾನ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ, ಭದ್ರತೆಯನ್ನು ಬಿಗಿಗೊಳಿಸಲು ಸೂಚನೆ ನೀಡಲಾಗಿದೆ. ದೆಹಲಿ ಸ್ಪೋಟದಲ್ಲಿ ಕೆಲವರು ಸತ್ತಿರುವ ಬಗ್ಗೆ ಮಾಹಿತಿ ಇದೆ. ಮೈಸೂರು ಪೊಲೀಸರೊಂದಿಗೆ ಈಗಾಗಲೇ ಮಾತನಾಡಿದ್ದು, ರಾಜ್ಯ ಮಟ್ಟದ ಐಜಿಪಿ, ಡಿಜಿಪಿ ಯವರೊಂದಿಗೆ ಕೂಡ ಮಾತನಾಡುತ್ತೇನೆ ಎಂದು ಹೇಳಿದರು.
ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್ ಸ್ಪೋಟದಿಂದ ಹಲವರು ಸಾವಿಗೀಡಾದ ಸುದ್ದಿ ನೋವಿನ ಜೊತೆಗೆ ದಿಗ್ಭ್ರಮೆ ಉಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.
ದೆಹಲಿಯ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರು… pic.twitter.com/jeLpi3pJrt
— CM of Karnataka (@CMofKarnataka) November 10, 2025
ಸ್ಪೋಟದಲ್ಲಿ ಮೃತರಾದ ಕುಟುಂಬದವರಿಗೆ ಸಂತಾಪ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಭದ್ರತಾ ಲೋಪವಾಗಿದೆಯೇ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಸ್ಪೋಟದ ಬಗ್ಗೆ ಪೂರ್ಣ ಮಾಹಿತಿ ಇಲ್ಲವಾದ್ದರಿಂದ ಈ ಬಗ್ಗೆ ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದರು.
ನವದೆಹಲಿ ಕೆಂಪುಕೋಟೆ ಮೆಟ್ರೋ ಸ್ಟೇಷನ್ ಗೇಟ್-1 ಬಳಿ ಸೋಮವಾರ ನಿಲ್ಲಿಸಿದ್ದ ಕಾರು ಸ್ಫೋಟಗೊಂಡು 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಹಿನ್ನೆಲೆ ದೇಶಾದ್ಯಂತ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಘಟನೆ ಸಂಬಂಧ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


