Thursday, January 30, 2025
Menu

ಉದ್ಯಮಿಗಳಿಗೆ ವಿವಿ ಕುಲಪತಿ ಹುದ್ದೆ ಬೇಡ: ಸಚಿವ ಡಾ.ಎಂ.ಸಿ.ಸುಧಾಕರ್

ವಿಶ್ವವಿದ್ಯಾಲಯ ಧನ ಸಹಾಯ ಆಯೋಗವು (ಯುಜಿಸಿ) ಕರಡು ನಿಯಮಾವಳಿಗಳಲ್ಲಿ ಕುಲಪತಿ ಸ್ಥಾನಕ್ಕೆ ಉದ್ಯಮಿಗಳು, ಸಾರ್ವಜನಿಕ ಆಡಳಿತ, ನೀತಿ ನಿರೂಪಣೆಯಲ್ಲಿ ಕೆಲಸ ಮಾಡಿದವರು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಹಿರಿಯ ಅಧಿಕಾರಿಗಳನ್ನೂ ನೇಮಕ ಮಾಡಲು ಅವಕಾಶ ಕಲ್ಪಿಸಲಾಗಿದೆ. ಕುಲಪತಿ ನೇಮಕಾತಿ ವಿಚಾರದಲ್ಲಿ ರಾಜ್ಯ ಸರ್ಕಾರದ ಅಧಿಕಾರ ಮೊಟಕುಗೊಳಿಸಿ ರಾಜ್ಯಪಾಲರಿಗೆ ಸಂಪೂರ್ಣ ಪರಮಾಧಿಕಾರ ನೀಡುವ ಕೆಲಸ ಮಾಡಲಾಗಿದೆ ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಶ್ವವಿದ್ಯಾಲಯ ಧನ ಸಹಾಯ ಆಯೋಗವು ವಿಶ್ವವಿದ್ಯಾಲಯಗಳ ನೇಮಕಾತಿಗೆ ಸಂಬಂಧಿಸಿದಂತೆ ಬಿಡುಗಡೆ ಮಾಡಿರುವ ಹೊಸ ಕರಡು ನಿಯಮಾವಳಿಗಳು ರಾಜ್ಯಗಳ ಅಧಿಕಾರ ಮೊಟಕುಗೊಳಿಸುವ ದುರುದ್ದೇಶದಿಂದ ಕೂಡಿದ್ದು, ಕೂಡಲೇ ವಾಪಸ್‌ ಪಡೆಯಬೇಕೆಂದು ರಾಜ್ಯ ಸರ್ಕಾರ ಒತ್ತಾಯಿಸಿದೆ.

ಸಚಿವ ಡಾ.ಎಂ.ಸಿ.ಸುಧಾಕರ್ ಈ ಸಂಬಂಧ ಕೇಂದ್ರ ಶಾಲಾ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರಿಗೆ ಪತ್ರ ಬರೆದಿದ್ದು, ದೂರಿದ್ದಾರೆ. ಯುಜಿಸಿಯ ಹೊಸ ಕರಡು ನಿಯಮಾವಳಿಗಳು ಅವೈಜ್ಞಾನಿಕವಾಗಿವೆ. ವಿಶ್ವವಿದ್ಯಾಲಯಗಳ ಕುಲಪತಿ ನೇಮಕ, ಬೋಧಕ, ಬೋಧಕೇತರ ಸಿಬ್ಬಂದಿ ನೇಮಕಾತಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕಿರುವ ಅಧಿಕಾರ ಮೊಟಕುಗೊಳಿಸಲು ಈ ನಿಯಮ ರೂಪಿಸಲಾಗಿದೆ. ಈ ಮೂಲಕ ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆಯನ್ನು ರಾಜ್ಯಗಳ ಮೇಲೆ ಹೇರಲು ಮುಂದಾಗಿದೆ. ತಜ್ಞರೊಂದಿಗೆ ಚರ್ಚಿಸಿದ ಬಳಿಕ ಈ ಕರಡು ನಿಯಮಾವಳಿಗೆ ಸರ್ಕಾರದ ವಿರೋಧವಿದೆ. ಆದ್ದರಿಂದ ಕೂಡಲೇ ವಾಪಸ್ ಪಡೆಯಬೇಕೆಂದು ಆಗ್ರಹಿಸಿದ್ದಾರೆ.

ವಿಶ್ವವಿದ್ಯಾಲಯ ಧನಸಹಾಯ ಆಯೋಗ ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ ಕುಲಪತಿಗಳ ನೇಮಕಾತಿಗೆ ರಾಜ್ಯಪಾಲರಿಗೆ ಸರ್ವಾಧಿಕಾರ ನೀಡಿ ರಾಜ್ಯಗಳ ಅಧಿಕಾರ ಕಸಿಯಲು ಹೊರಟಿರುವ ಕೇಂದ್ರದ ಕ್ರಮ ಖಂಡನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದರು.

Related Posts

Leave a Reply

Your email address will not be published. Required fields are marked *