Wednesday, September 17, 2025
Menu

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಸಚಿವಾಲಯ ಸ್ಥಾಪನೆಗೆ ಸಂಪುಟ ಸಮ್ಮತಿ: ಪ್ರಿಯಾಂಕ್‌ ಖರ್ಗೆ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕಾರ್ಯಗಳನ್ನು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಕಲ್ಯಾಣ ಕರ್ನಾಟಕ ಪ್ರದೇಶ ಸಚಿವಾಲಯ ಸ್ಥಾಪನೆಗೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಸಚಿವಾಲಯ ಸ್ಥಾಪನೆಯಾಗಿರುವುದರಿಂದ ಕಲ್ಯಾಣ ಕರ್ನಾಟಕ ಪ್ರದೇಶದ ಮತ್ತಷ್ಟು ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಹೇಳಿರುವ ಸಚಿವರು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಕಾಮಗಾರಿಗಳನ್ನು ಸಕಾಲದಲ್ಲಿ ಪೂರೈಸುವ ಸಲುವಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ವ್ಯಾಪ್ತಿಯ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಗೆ ಹೆಚ್ಚುವರಿ ಹುದ್ದೆಗಳನ್ನು ಸೃಷ್ಟಿಸುವ ಮೂಲಕ ಈ ಕಚೇರಿಗಳನ್ನು ಮತ್ತಷ್ಟು ಬಲಪಡಿಸಲೂ ಸಚಿವ ಸಂಪುಟ ನಿರ್ಧಾರ ತೆಗೆದುಕೊಂಡಿದೆ ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.

ಕಲಬುರಗಿಯಲ್ಲಿರುವ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯಾಲಯಕ್ಕೆ ಮಂಜೂರಾಗಿರುವ 83 ಹುದ್ದೆಗಳಲ್ಲಿ ಖಾಲಿ ಇರುವ 20 ಹುದ್ದೆಗಳನ್ನು ಹಾಗೂ ಈ ಪ್ರದೇಶದ 7 ಜಿಲ್ಲೆಗಳಿಗೂ ಹೊಸ ಹುದ್ದೆಗಳನ್ನು ಸೃಷ್ಟಿಸಲಾಗುವುದು ಎಂದೂ ಸಚಿವರು ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ನಿಟ್ಟನಲ್ಲಿ ಹೊಸ ಸಚಿವಾಲಯವನ್ನು ಸೃಷ್ಟಿಸಲು ಕಾರಣರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸಂಪಟದ ಸಹೋದ್ಯೋಗಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಕೃತಜ್ಞತೆಗಳನ್ನು ಅರ್ಪಿಸಿದ್ದಾರೆ.

Related Posts

Leave a Reply

Your email address will not be published. Required fields are marked *