ಶಾಪಗ್ರಸ್ಥ ಜಿಲ್ಲೆ ಎಂಬ ಹಣೆ ಪಡೆದಿರುವ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಫೆಬ್ರವರಿ 15 ರಂದು ಸಚಿವ ಸಂಪುಟ ಸಭೆ ನಡೆಸಲಿದೆ.
ಪಶುಸಂಗೋಪನಾ ಸಚಿವ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೆ ವೆಂಕಟೇಶ್ ಮಾಹಿತಿ ನೀಡಿದ್ದು, ಚಾಮರಾಜನಗರ, ಮಂಡ್ಯ, ಮೈಸೂರು, ಹಾಸನ ಹಾಗೂ ಕೊಡಗು ಜಿಲ್ಲೆಯ ಜ್ವಲಂತ ಸಮಸ್ಯೆಯ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆ ಸಂಬಂಧ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಜಿಲ್ಲೆಗೆ ಅಗತ್ಯವಿರುವ ಮೂಲ ಸೌಕರ್ಯ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ತಿಳಿಸಲಾಗಿದೆ. ಒಳಚರಂಡಿ ವ್ಯವಸ್ಥೆ, ಪರಿಸರ ಪ್ರವಾಸೋದ್ಯಮ ಉತ್ತೇಜಿಸಲು ಯೋಜನೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ದಿ.ಎಸ್ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಮಿನಿ ಸಂಪುಟ ಸಭೆ ನಡೆಸಿದ್ದರು.