ನೆಲಮಂಗಲ ಜಿಂದಾಲ್ ಬಳಿ ಕೆಎಸ್ಸಾರ್ಟಿಸಿ ಬಸ್ ಮತ್ತು ಕಾರು ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ.
ದುರ್ಗಾ ಪ್ರಸಾದ್ (20), ಕೇಶವ್ (19), ಲಲಿತ್ (22), ಹರ್ಷಿತ್ (20) ಸೇರಿ ಐವರು ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ತುಮಕೂರು ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್ ಹಾರಿ ಬೆಂಗಳೂರು ಕಡೆಯಿಂದ ಹೊರಟಿದ್ದ ಬಸ್ಗೆ ಡಿಕ್ಕಿಯಾಗಿದೆ.
ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಐವರ ಮೃತದೇಹಗಳಿದ್ದು, ಒಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮೃತ ಹರ್ಷಿತ್ ರಾಜನಕುಂಟೆ ಸಾಯಿ ವಿದ್ಯಾ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ದ್ವಿತೀಯ ವರ್ಷದ ಡಿಗ್ರಿ ಓದುತ್ತಿದ್ದ.
ಗಂಭೀರ ಗಾಯಗೊಂಡಿದ್ದ ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಪ್ರಾಣ ಬಿಟ್ಟಿದ್ದಾನೆ. ಹರ್ಷಿತ್ ಸ್ನೇಹಿತನ ಭೇಟಿ ಮಾಡಿ ಬರುವುದಾಗಿ ಮನೆಯಿಂದ ಹೊರ ಬಂದಿದ್ದ. ತುಮಕೂರು ಕಡೆಯಿಂದ ಬೆಂಗಳೂರಿನತ್ತ ಕಾರಿನಲ್ಲಿ ಐವರು ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಬಸ್ ಮುಂಭಾಗ ಜಖಂ ಆಗಿದ್ದರೆ, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.


