Thursday, January 30, 2025
Menu

ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ಚಿಕಿತ್ಸೆ: ಸಚಿವ ಕೆ.ಜೆ.ಜಾರ್ಜ್

ಇಂಧನ ಇಲಾಖೆ ಸಿಬ್ಬಂದಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಕಲ್ಪಿಸುವ ಸೌಲಭ್ಯವನ್ನು ಎಲ್ಲಾ ವಿದ್ಯುತ್ ಸರಬರಾಜು ಕಂಪನಿ (ಎಸ್ಕಾಂ) ಗಳಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚಿಸಿದ್ದಾರೆ.

ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ಇಂಜಿನಿಯರ್‌ಗಳ ಸಂಘದ ವಜ್ರಮಹೋತ್ಸವ ಸಂವಹನ ಉಪನ್ಯಾಸ ಹಾಗೂ ಸಂಘದ 2025ನೇ ಸಾಲಿನ ತಾಂತ್ರಿಕ ದಿನಚರಿ ಬಿಡುಗಡೆ ಸಮಾರಂಭ ಉದ್ಘಾಟಿಸಿ, ತಾಂತ್ರಿಕ ದಿನಚರಿ ಮತ್ತು ಕ್ಯಾಲೆಂಡರ್ ಬಿಡುಗಡೆ ಮಾಡಿ  ಮಾತನಾಡಿದರು.

ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಕಂಪನಿ (ಸೆಸ್ಕ್) ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಕಲ್ಪಿಸಲಾಗಿದೆ. ಇತರ ಎಸ್ಕಾಂಗಳಲ್ಲೂ ಶೀಘ್ರವೇ ಈ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಕಾರ್ಯಕ್ರಮದಲ್ಲಿ ಹಾಜರಿದ್ದ ಎಸ್ಕಾಂಗಳ ಅಧ್ಯಕ್ಷರೂ ಆಗಿರುವ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ಅವರಿಗೆ ಸೂಚನೆ ನೀಡಿದರು.

ಇಲಾಖೆಯಲ್ಲಿ ಹಿರಿತನದ ಆಧಾರದ ಮೇಲೆ ಬಡ್ತಿ, ಹುದ್ದೆಗಳ ಭರ್ತಿ, ಹಳೇ ಪಿಂಚಣಿ ವ್ಯವಸ್ಥೆ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅದೇ ರೀತಿ ಇಲಾಖೆ ಪ್ರಗತಿ ಜತೆಗೆ ಜನರಿಗೆ ಸಮರ್ಪಕ ವಿದ್ಯುತ್ ಪೂರೈಸಲು ಶ್ರಮಿಸುತ್ತಿರುವ ಇಂಧನ ಇಲಾಖೆಯ ಅಧಿಕಾರಿಗಳು, ನೌಕರರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ರೈತರಿಗೆ ಸೌರ ಪಂಪ್ ಸೆಟ್ ಗಳನ್ನು ಒದಗಿಸುವ ಕುಸುಮ್-ಬಿ ಯೋಜನೆ ಜತೆಗೆ ಫೀಡರ್ ಮಟ್ಟದ ಸೌರೀಕರಣ ಮೂಲಕ ರೈತರ ಪಂಪ್‍ಸೆಟ್‍ಗಳಿಗೆ ಸೌರ ಶಕ್ತಿಯಿಂದ ವಿದ್ಯುತ್ ಸರಬರಾಜು ಮಾಡುವ ಕುಸುಮ್- ಸಿ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಮೊದಲ ಹಂತದ ಯೋಜನೆ ಪ್ರಗತಿಯಲ್ಲಿದ್ದು, 2ನೇ ಹಂತದಲ್ಲಿ ಫೀಡರ್ ಮಟ್ಟದ ಸೌರೀಕರಣ ಮೂಲಕ 1200 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಿ ರೈತರಿಗೆ ನೀಡಲು ನಿರ್ಧರಿಸಲಾಗಿದೆ. ಈ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಿದರೆ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಬಹುತೇಕ ಬಗೆಹರಿಯುತ್ತದೆ ಎಂದರು.

ವಿದ್ಯುತ್  ಶೇಖರಣೆ ಮಾಡಿ ಅಗತ್ಯ ಸಂದರ್ಭದಲ್ಲಿ ಜನರಿಗೆ ಒದಗಿಸಲು ಸರ್ಕಾರ ಯೋಜನೆ ರೂಪಿಸಿದೆ.  ಶರಾವತಿಯಲ್ಲಿ 2000 ಮೆಗಾವ್ಯಾಟ್ ಮತ್ತು ವಾರಾಹಿಯಲ್ಲಿ 1500 ಮೆಗಾವ್ಯಾಟ್ ಸಾಮರ್ಥ್ಯದ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

Related Posts

Leave a Reply

Your email address will not be published. Required fields are marked *