ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಮಂಡಳಿ ನೀಡಿರುವ ಆದೇಶವನ್ನು ಖಂಡಿಸಿ ರಾಜ್ಯದ ರೈತರು ಮತ್ತು ಜನತೆಯ ಹಿತಾಸಕ್ತಿಗೆ ಆಗ್ರಹಿಸಿ
ಶ್ರೀರಂಗಪಟ್ಟಣದಲ್ಲಿ ಕಾವೇರಿ ನದಿಗಿಳಿದು ರೈತರು ಆಕ್ರೋಶ ಹೊರ ಹಾಕಿದ್ದಾರೆ.
ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು, ಒತ್ತಡಕ್ಕೆ ಮಣಿದು ನೀರು ಹರಿಸಿದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಕರವೇ ಪ್ರವೀಣ್ ಶೆಟ್ಟಿ ಬಣ ಹಾಗೂ ರೈತಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಘೋಷಿಸಿವೆ.
ಮಂಡ್ಯದ ಕಾವೇರಿ ನೀರಾವರಿ ನಿಗಮದ ಕಚೇರಿ ಮುಂದೆಯೂ ಪ್ರತಿಭಟನೆ ನಡೆಸಿದ ಸಂಘಟನೆಗಳು, ತಮಿಳುನಾಡು ಸಿಎಂ ವಿಜಯ್ ನಟನೆಯ ʻಜನನಾಯಗನ್ʼ ಸಿನಿಮಾ ಬ್ಯಾನ್ ಮಾಡುವಂತೆ ಆಗ್ರಹಿಸಿವೆ.
ಕನ್ನಡಪರ ಸಂಘಟನೆಗಳು ಸಿನಿಮಾ ಪ್ರದರ್ಶನವಾಗುತ್ತಿರುವ ಗುರುಶ್ರೀ ಚಿತ್ರಮಂದಿರಕ್ಕೆ ಮುತ್ತಿಗೆ ಹಾಕಲು ಯತ್ನಿಸಿ ಕೂಡಲೇ ಸಿನಿಮಾ ಪ್ರದರ್ಶನ ರದ್ದು ಮಾಡಲು ಆಗ್ರಹಿಸಿವೆ.
ರೈತ ಹಿತರಕ್ಷಣಾ ಸಮಿತಿ ವಿಶ್ವೇಶ್ವರಯ್ಯ ಪ್ರತಿಮೆ ಸಮೀಪ ಮೈಸೂರು – ಬೆಂಗಳೂರು ಹಳೇ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಹಮ್ಮಿಕೊಂಡಿದ್ದು, ರಸ್ತೆಯಲ್ಲಿ ಕುಳಿತು ರೈತರು ಪರತಿಭಟನೆ ನಡೆಸುತ್ತಿದ್ದಾರೆ. ಮಹಿಳಾ ಹೋರಾಟಗಾರರು ಉರುಳು ಸೇವೆ ಮಾಡಿ ಪ್ರತಿರೋಧ ವ್ಯಕ್ತಪಡಿಸಿದರು. ಕೆಆರ್ಎಸ್ ಬಳಿ ಪ್ರತಿಬಟನೆ ತೀವ್ರಗೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆ ಮಂಡ್ಯ ಎಸ್ಪಿ ಡಾ.ವಿ.ಜೆ.ಶೋಭಾರಾಣಿ ಮಾತನಾಡಿ, ಕೆಆರ್ಎಸ್ ಸೇರಿದಂತೆ ಸೂಕ್ಷ್ಮ ಪ್ರದೇಶದಲ್ಲಿ ಭಾರೀ ಬಂದೋಬಸ್ತ್ ಕೈಗೊಳ್ಳಲಾಗಿದೆ. ಭದ್ರತೆಗಾಗಿ 1500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಅಹಿತಕರ ಘಟನೆಗಳು ನಡೆಯದಂತೆ ಕ್ರಮವಹಿಸಿರುವುದಾಗಿ ಹೇಳಿದ್ದಾರೆ.
ತಮಿಳುನಾಡಿಗೆ ಪ್ರತಿನಿತ್ಯ 3,500 ಟಿಎಂಟಿ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿರ್ದೇಶನವನ್ನು ವಿರೋಧಿಸಿ ರೈತರೊಂದಿಗೆ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಹೋರಾಟವನ್ನು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲಿಸಿದೆ. ಕಾವೇರಿ ವಿಚಾರದಲ್ಲಿ ಕನ್ನಡಪರ ಸಂಘಟನೆಗಳು ಯಾವುದೇ ಹೋರಾಟಕ್ಕೆ ಕರೆ ಕೊಟ್ಟರೂ ಸಿದ್ಧ ಎಂದು ಮಂಡಳಿ ತಿಳಿಸಿದೆ.
ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಸೇರಿದಂತೆ ಉಳಿದ ಪದಾಧಿಕಾರಿಗಳು ಹಾಗೂ ಕಲಾವಿದರ ಸಂಘದ ಕಾರ್ಯದರ್ಶಿ ರಾಕ್ಲೈನ್ ವೆಂಕಟೇಶ್ ಹಾಗೂ ಪ್ರದರ್ಶಕರ ವಲಯ, ವಿತರಕರ ವಲಯ ಹಾಗೂ ಒಕ್ಕೂಟ ಸೇರಿದಂತೆ ಫಿಲ್ಮ್ ಚೇಂಬರ್ ಅಡಿಯಲ್ಲಿ ಬರುವ ಎಲ್ಲಾ ಅಂಗ ಸಂಸ್ಥೆಗಳೂ ಬೆಂಬಲ ಪ್ರಕಟಿಸಿವೆ.
ರಾಜ್ಯ ಬಿಜೆಪಿ ಕೆಆರ್ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದು, ಜಲಾಶಯದ ಬಳಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ , ಆರ್. ಅಶೋಕ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನೆಯುತ್ತಿದೆ. ಸಿ.ಟಿ.ರವಿ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಮಂಡ್ಯ-ಮೈಸೂರು ಭಾಗದ ಸಾವಿರಾರು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಪಾಲ್ಗೊಂಡು, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಹನಿ ನೀರನ್ನೂ ಹರಿಸಬಾರದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಭದ್ರತೆಗಾಗಿ ಕೆಆರ್ಎಸ್ ಸೇರಿದಂತೆ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ 1500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಿದ್ದು, ಬಿಗಿ ಬಂದೋಬಸ್ತ್ ಮಾಡಿ ಜಲಾಶಯದ ಸುತ್ತಮುತ್ತ ಬ್ಯಾರಿಕೇಡ್ಗಳನ್ನು ಹಾಕಿ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಕೆಆರ್ಎಸ್, ಬೃಂದಾವನ ಉದ್ಯಾನವನಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.


