ಕಾಳಜಿ ಕೇಂದ್ರಗಳಲ್ಲಿ ಪೌಷ್ಠಿಕ ಆಹಾರ, ಸೋಂಕು ನಿಯಂತ್ರಣ ಕ್ರಮಕ್ಕೆ ಸರ್ಕಾರ ಸೂಚನೆ

ಕಾಳಜಿ ಕೇಂದ್ರಗಳಲ್ಲಿ ಪೌಷ್ಠಿಕ ಆಹಾರ, ಸೋಂಕು ನಿಯಂತ್ರಣ ಕ್ರಮಕ್ಕೆ ಸರ್ಕಾರ ಸೂಚನೆ

ಬೆಂಗಳೂರು, ಅ 18  ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ ಉಂಟಾಗಿರುವ ಭೀಕರ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯ ಮುಂದುವರಿದಿದೆ. ಸೂಕ್ತ ಪರಿಹಾರ ಕಾರ್ಯ ಮುಂದುವರೆಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ದೇಶನ ನೀಡಿದ್ದು, ಜನ ಜಾನುವಾರುಗಳ ರಕ್ಷಣೆ ತೀವ್ರಗೊಂಡಿದೆ.

ತೀವ್ರ ಆತಂಕ ಪರಿಸ್ಥಿತಿಯಿರುವ ಪ್ರದೇಶಗಳಲ್ಲಿನ ಜನರನ್ನು ಕಾಳಜಿ ಕೇಂದ್ರಗಳಿಗೆ ಸೇರಿಸಲಾಗುತ್ತಿದೆ. ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಬೀದರ್, ಕೊಪ್ಪಳ, ಗದಗ, ಬಳ್ಳಾರಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯ ತೀವ್ರಗೊಳಿಸಲಾಗಿದೆ.

ಇಲ್ಲಿ ಕಾಳಜಿ ಕೇಂದ್ರಗಳಲ್ಲಿರುವವರಿಗೆ ಸೂಕ್ತ ಮೂಲಸೌಕರ್ಯ ಹಾಗೂ ಪೌಷ್ಠಿಕ ಆಹಾರ ಒದಗಿಸುವಂತೆ ಸರ್ಕಾರ ಸೂಚನೆ ನೀಡಿದೆ. ಬೆಳಗಿನ ಉಪಹಾರ, ಮಧ್ಯಾಹ್ನದ ಊಟ, ಸಾಯಂಕಾಲದ ತಿಂಡಿ ಮತ್ತು ರಾತ್ರಿ ಊಟದಲ್ಲಿ ನೀಡುವ ಪೌಷ್ಠಿಕ ಆಹಾರದ ಪಟ್ಟಿಯನ್ನು ಎಲ್ಲಾ ಜಿಲ್ಲಾಡಳಿತಕ್ಕೆ ಕಳುಹಿಸಿದ್ದು, ಸರಬರಾಜು ಮಾಡುವವರು ವಿಶೇಷ ಕಾಳಜಿ ವಹಿಸಬೇಕು ಎಂದು ಆದೇಶಿಸಲಾಗಿದೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ವಿತರಣೆ ಸಂದರ್ಭದಲ್ಲಿ ನಿಯಮವನ್ನು ಪಾಲಿಸುವ ಜೊತೆಗೆ ಸ್ವಚ್ಛತೆ ಕಾಪಾಡಬೇಕು ಎಂದು ಆದೇಶಿಸಲಾಗಿದೆ.

ಕೋವಿಡ್-19 ಸೋಂಕು ಹರಡದಂತೆ ಸೂಕ್ತ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕು. ರೋಗಲಕ್ಷಣಗಳು ಕಂಡುಬಂದರೆ, ಅಗತ್ಯ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಯಾವುದೇ ಲೋಪ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು, ಭೀಮಾ ಹಾಗೂ ಕಾಗಿನಾ ನದಿಗಳು ಉಕ್ಕಿ ಹರಿಯುತ್ತಿವೆ. ಅಫ್ಜಲ್ ಪುರ ತಾಲೂಕಿನ ಸೊನ್ನ ಬ್ಯಾರೇಜ್ ನಿಂದ ನಿನ್ನೆ 8 ಲಕ್ಷ ಕ್ಯೂಸೆಕ್ ಗೂ ಹೆಚ್ಚು ನೀರನ್ನು ಭೀಮಾ ನದಿಗೆ ಹರಿಸಲಾಗಿದ್ದು, ಹಲವು ಗ್ರಾಮಗಳು ಜಲಾವೃತವಾಗಿವೆ. ನದಿ ತೀರದಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದ್ದು, ಜನರ ರಕ್ಷಣಾ ಕಾರ್ಯ ಭರದಿಂದ ಸಾಗಿದೆ.

ಜಿಲ್ಲೆಯ ಸೊನ್ನ ಬ್ಯಾರೇಜ್ ನಿಂದ 8 ಲಕ್ಷ ಕ್ಯೂಸೆಕ್ ನೀರನ್ನು ಭೀಮಾನದಿಗೆ ಬಿಡಲಾಗಿದೆ. ನೀರಿನ ಪ್ರಮಾಣ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಈಗಾಗಲೇ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಹೆಚ್ಚಿದ್ದು, ಅಫ್ಜಲ್ ಪುರ, ಜೇವರ್ಗಿ, ಶಹಾಬಾದ್ ತಾಲೂಕುಗಳ ನದಿ ಪಾತ್ರದ ಗ್ರಾಮಗಳು ಹಾಗೂ ಕಾಗಿನ ನದಿ ದಡದಲ್ಲಿರುವ ಗ್ರಾಮಗಳ ಜನರು , ತಕ್ಷಣ ಸುರಕ್ಷಿತ ಹಾಗೂ ಎತ್ತರದ ಪ್ರದೇಶಗಳಿಗೆ ತೆರಳುವಂತೆ ಮನವಿ ಮಾಡಲಾಗಿದೆ.

ಸ್ಥಳಾಂತರ ಪ್ರಕ್ರಿಯೆಯಲ್ಲಿ, ಸ್ಥಳೀಯ ಆಡಳಿತ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಜನತೆ ಸಹಕಾರ ಸೂಕ್ತ ರೀತಿಯಲ್ಲಿ ದೊರೆತಿಲ್ಲ. ಜಿಲ್ಲಾಡಳಿತ, ಪರಿಸ್ಥಿತಿ ನಿರ್ವಹಣೆಗೆ ಎಲ್ಲ ಕ್ರಮಗಳನ್ನು ಕೈಗೊಂಡಿದ್ದು, ಅಧಿಕಾರಿಗಳು ಸಮರೋಪಾದಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚಿಸಿದೆ. ಭಾರತೀಯ ಸೇನೆ, ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್ ತಂಡಗಳು ಪರಿಹಾರ ಕಾರ್ಯದಲ್ಲಿ ಭಾಗಿಯಾಗಿವೆ.

, ,

Leave a Reply

Your email address will not be published. Required fields are marked *