Menu

ಅಭಿನಯ ಸರಸ್ವತಿ ಸರೋಜಾ ದೇವಿ ನಿಧನಕ್ಕೆ ಸಿಎಂ, ಡಿಸಿಎಂ ಸೇರಿದಂತೆ ಗಣ್ಯರ ಸಂತಾಪ

ಅಭಿನಯ ಸರಸ್ವತಿ ಸರೋಜಾ ದೇವಿ ನಿಧನಕ್ಕೆ ಸಿಎಂ, ಡಿಸಿಎಂ ಸೇರಿದಂತೆ ಗಣ್ಯರು  ಸಂತಾಪ ವ್ಯಕ್ತಪಡಿಸಿ ಅವರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು  ಪ್ರಾರ್ಥಿಸಿದ್ದಾರೆ. ಹಿರಿಯ ನಟಿ ಸರೋಜಾದೇವಿ ಅವರ ನಿಧನ ವಾರ್ತೆ ನೋವುಂಟುಮಾಡಿದೆ. ಕನ್ನಡ ಚಿತ್ರರಂಗವು ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ 200 ಚಿತ್ರಗಳಲ್ಲಿ ನಟಿಸಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಸಂತಾಪ ಸಲ್ಲಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ  ಸಿಎಂ, ಭಾರತೀಯ ಚಿತ್ರರಂಗದ ಖ್ಯಾತ ಚಿತ್ರನಟಿ ಬಿ.ಸರೋಜಾದೇವಿ ಅವರ ನಿಧನದ ಬಗ್ಗೆ ಸಂತಾಪ ಸೂಚಿಸುತ್ತಾ ಮಾತನಾಡಿದ ಮುಖ್ಯಮಂತ್ರಿಗಳು, ಬಿ.ಸರೋಜಾದೇವಿಯವರು ಕನ್ನಡ ನಾಡು ಕಂಡ ಪ್ರತಿಭಾವಂತ ಕಲಾವಿದರಾಗಿದ್ದರು. ಬಹುಭಾಷಾ ನಟಿಯಾಗಿದ್ದ ಅವರು ಅಪ್ರತಿಮ ಕಲಾವಿದರಾಗಿದ್ದು, ಅವರ ಸಾವಿನಿಂದ ಇಡೀ ಕಲಾಜಗತ್ತು ಬಡವಾಗಿದೆ. ಸರೋಜಾದೇವಿಯವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬವರ್ಗ ಹಾಗೂ ಅಭಿಮಾನಿ ಬಳಗಕ್ಕೆ ದು:ಖವನ್ನು ಭರಿಸುವ ಶಕ್ತಿ ತುಂಬಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು.

ಸರೋಜಾದೇವಿ ಎಂದಾಕ್ಷಣ ಕಿತ್ತೂರು ಚೆನ್ನಮ್ಮ, ಬಬ್ರುವಾಹನ, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ ಅವರ ಮನೋಜ್ಞ ಅಭಿನಯ ಕಣ್ಣಮುಂದೆ ಬರುತ್ತದೆ. ಸದಭಿರುಚಿಯ ಚಿತ್ರಗಳ‌ ಮೂಲಕ ಹಲವು ದಶಕಗಳ‌ ಕಾಲ ಸಿನಿಪ್ರಿಯರನ್ನು ರಂಜಿಸಿದ್ದ ಅವರ ಅಗಲಿಕೆ ಭಾರತೀಯ ಚಿತ್ರರಂಗಕ್ಕಾದ ಬಹುದೊಡ್ಡ ನಷ್ಟ. ಸರೋಜಾದೇವಿಯವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುವೆ. ಅವರ ದುಃಖತಪ್ತ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಹೇಳಿದ್ದಾರೆ.

ಸರೋಜಾ ದೇವಿ ಹಿರಿಯ ತಾರೆ. ನನಗೆ ಬಹಳ ಆತ್ಮೀಯರಾಗಿದ್ದರು. ಅನೇಕ ಸಂದರ್ಭದಲ್ಲಿ ಸರ್ಕಾರದ ಅನೇಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಈ ಮಧ್ಯೆ ಅವರ ಆರೋಗ್ಯ ಸಲ್ಪ ಹೆಚ್ಚುಕಮ್ಮಿ ಆಗಿತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಭಾರತದ ಅನೇಕ ಚಿತ್ರನಟರ ಜೊತೆ ನಟಿಸಿದ್ದರು. ಅವರ ಅಭಿಮಾನಿಗಳಿಗೆ, ಬಂಧುಗಳಿಗೆ ಭಗವಂತ ಶಕ್ತಿ ಕೊಡಲಿ ಅಂತ ಕೇಳಿಕೊಳ್ಳುತ್ತೇನೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ. ಹಿರಿಯ ಅಭಿನೇತ್ರಿ ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತೀವ್ರ ನೋವು ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, ಸರೋಜಾದೇವಿ ಅವರು ತಮ್ಮ ಅಭಿನಯದ ಮೂಲಕ ಮನೆಮಾತಾಗಿದ್ದವರು. ಇಡೀ ದಕ್ಷಿಣ ಭಾರತಕ್ಕೆ ದೊಡ್ಡ ಗೌರವ ತಂದುಕೊಟ್ಟವರು. ನನಗೆ ಆತ್ಮೀಯರಾಗಿದ್ದರು. ರಾಜಕುಮಾರ್ ಹಾಗೂ ಇತರೇ ನಾಯಕ ನಟರ ಜೊತೆ ಅಭಿನಯಿಸಿದ್ದನ್ನು ನೋಡಿದ್ದೇನೆ. ಇವರ ಎಲ್ಲಾ ಅಭಿಮಾನಿಗಳಿಗೆ ಹಾಗೂ ಕುಟುಂಬ ವರ್ಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

ಅಭಿನಯ ಸರಸ್ವತಿಯಾಗಿ ಆರು ದಶಕಗಳ ಕಾಲ ಕನ್ನಡ ಸೇರಿದಂತೆ ದೇಶದ ಹಲವಾರು ಭಾಷೆಗಳ ಚಿತ್ರಗಳಲ್ಲಿ ಅಭಿನಯಿಸಿದ ಸರೋಜಾದೇವಿ ಅವರ ಅಗಲಿಕೆ ಇಡೀ ಭಾರತೀಯ ಚಿತ್ರರಂಗಕ್ಕೆ ಹಾಗೂ ವೈಯಕ್ತಿಕವಾಗಿ ನನಗೆ ಅತೀವ ದುಃಖವನ್ನುಂಟು ಮಾಡಿದೆ. ಇವರು ನಮ್ಮ ಜಿಲ್ಲೆಯ ಮನೆಮಗಳಾಗಿದ್ದವರು. “ಕಿತ್ತೂರ ರಾಣಿ ಚೆನ್ನಮ್ಮ” ಚಿತ್ರದಲ್ಲಿ ರಾಣಿ ಚೆನ್ನಮ್ಮ ಅವರ ಪಾತ್ರದಲ್ಲಿ ಅಮೋಘ ಅಭಿನಯ ನೀಡಿದರು. ಸರೋಜಾದೇವಿ ಅವರನ್ನು ಹೊರತು ಪಡಿಸಿ ಮತ್ತೊಬ್ಬರನ್ನು ಈ ಪಾತ್ರದಲ್ಲಿ ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲದ ಮಟ್ಟಿಗೆ ಕನ್ನಡಿಗರ ಮನೆ, ಮನಗಳಲ್ಲಿ ಆವರಿಸಿಕೊಂಡು ಬಿಟ್ಟಿದ್ದಾರೆ. ನನಗೂ ಸಹ ಅವರ ಚೆನ್ನಮ್ಮನ‌ ಪಾತ್ರ ಕಣ್ಣಿಗೆ ಕಟ್ಟಿದಂತಿದೆ ಎಂದು ಸ್ಮರಿಸಿದರು.

161 ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿರುವುದು ಇವರ ಹೆಗ್ಗಳಿಕೆ. ತಮಿಳು ಚಿತ್ರರಂಗದವರು ಕೂಡ ಇವರನ್ನು”ಕನ್ನಡದ ಸುಂದರಗಿಣಿ” ಎಂದು ಬಿರುದು ನೀಡಿ ಕರೆಯುತ್ತಿದ್ದರು. ಇವರ ಕಲಾ ಸಾಮರ್ಥ್ಯಕ್ಕೆ ಇದೊಂದು ಸಣ್ಣ ಉದಾಹರಣೆ . ಕನ್ನಡ ಚಿತ್ರರಂಗ ಅಂತರರಾಷ್ಟ್ರೀಯ ಮಟ್ಟಕ್ಕೆ ಬೆಳೆಯುತ್ತಿರುವ ಈ ಹೊತ್ತಿನಲ್ಲಿ ಇಂತಹ ಹಿರಿಯರ ಮಾರ್ಗದರ್ಶನ ಅಗತ್ಯವಿತ್ತು. ಕಾಲನ ಕರೆಗೆ ಓಗೊಟ್ಟು ಅಪಾರ ಅಭಿಮಾನಿಗಳನ್ನು ಅಗಲಿ ಹೋಗಿರುವ ಇವರ ಆತ್ಮಕ್ಕೆ ಶಾಂತಿ ದೊರಕಲಿ. ಅವರ ಕುಟುಂಬವರ್ಗ, ಅಭಿಮಾನಿಗಳಿಗೆ ಅಗಲಿಕೆಯ ನೋವು ಭರಿಸುವ ಶಕ್ತಿ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಶಿವಕುಮಾರ್ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಟಿ, ‘ಅಭಿನಯ ಸರಸ್ವತಿ’ ಎಂದೇ ಹೆಸರುವಾಸಿಯಾಗಿದ್ದ ಶ್ರೀಮತಿ ಬಿ.ಸರೋಜಾದೇವಿ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಸುಮಾರು 160ಕ್ಕೂ ಚಿತ್ರಗಳಲ್ಲಿ ನಾಯಕ ನಟಿಯಾಗಿ ಅಭಿನಯಿಸಿದ್ದ ಅವರ ಅಗಲಿಕೆಯಿಂದ, ಕನ್ನಡ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ, ಅವರ ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದ್ದಾರೆ.

ಸರೋಜಾದೇವಿ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಟಿಯರಲ್ಲಿ ಒಬ್ಬರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ, ಬಂಧುಮಿತ್ರರಿಗೆ ಮತ್ತು ಅಭಿಮಾನಿಗಳಿಗೆ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

Related Posts

Leave a Reply

Your email address will not be published. Required fields are marked *