ನ್ಯಾಯಬೆಲೆ ಅಂಗಡಿಯಲ್ಲಿ ಕ್ಯೂಆರ್(ಕ್ವಿಕ್ ರೆಸ್ಪಾನ್ಸ್) ಸ್ಕ್ಯಾನ್ ಮೂಲಕ ಪಡಿತರ ಚೀಟಿದಾರರಿಗೆ ಇಂದಿರಾ ಫುಡ್ ಕಿಟ್ ವಿತರಣೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಸೋಮವಾರ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನದ ಕುರಿತು ನಡೆದ ಸಭೆಯಲ್ಲಿ ಐದು ಕೆ.ಜಿ ಅಕ್ಕಿ, ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ, ಸಕ್ಕರೆ, ಉಪ್ಪು ಇರುವ ಇಂದಿರಾ ಆಹಾರ ಕಿಟ್ ಗಳನ್ನು ನ್ಯಾಯಬೆಲೆ ಅಂಗಡಿಗಳಿಗೆ 10ನೇ ತಾರೀಕಿನೊಳಗೆ ವಿತರಿಸಬೇಕು ಎಂದರು.
ಪ್ರತೀ ತಿಂಗಳು ಪ್ರಸ್ತುತ 1,25,08,262 ಇಂದಿರಾ ಆಹಾರ ಕಿಟ್ ಅಗತ್ಯವಿದ್ದು, ಇದಕ್ಕಾಗಿ ತಿಂಗಳಿಗೆ 466 ಕೋಟಿ ರೂ ವೆಚ್ಚ ಅಂದಾಜಿಸಲಾಗಿದೆ. ಈ ಯೋಜನೆಯಡಿ ಪ್ರತೀ ತಿಂಗಳು ಒಟ್ಟು 18,628 ಮೆ.ಟನ್ ತೊಗರಿ ಬೇಳೆ ಮತ್ತು ತಲಾ 12,419 ಮೆ.ಟನ್ ಸೂರ್ಯಕಾಂತಿ ಎಣ್ಣೆ, ಸಕ್ಕರೆ ಮತ್ತು ಉಪ್ಪು ಅಗತ್ಯವಿದೆ ಎಂದು ಅಂದಾಜು ಮಾಡಲಾಗಿದೆ ಎಂದು ಅವರು ಹೇಳಿದರು.
ಆಹಾರ ಕಿಟ್ನಲ್ಲಿ ಪೌಷ್ಟಿಕಾಂಶಗಳಿಂದ ಕೂಡಿರುವ ತೊಗರಿ ಬೇಳೆಯನ್ನು ಗರಿಷ್ಟ ಪ್ರಮಾಣದಲ್ಲಿ ನೀಡಲು ಕ್ರಮ ಕೈಗೊಳ್ಳಬೇಕು. ನಾಫೆಡ್/ಎನ್ಸಿಸಿಎಫ್‌ನಂತಹ ಕೇಂದ್ರ ಸರಬರಾಜು ಸಂಸ್ಥೆಗಳ ಮೂಲಕ ಅಥವಾ ಖರೀದಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಕೆಟಿಪಿಪಿ ಅನ್ವಯ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಗುಣಮಟ್ಟದಲ್ಲಿ ರಾಜಿಯಾಗಬಾರದು: ಉತ್ತಮ ಗುಣಮಟ್ಟದ ಆಹಾರ ಸಾಮಗ್ರಿ ಪೂರೈಸಲು ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ರಾಜಿಯಾಗಬಾರದು. ಇದೇ ರೀತಿ ಅಳತೆಯಲ್ಲೂ ಹೆಚ್ಚು ಕಡಿಮೆಯಾಗದಂತೆ ಎಚ್ಚರಿಕೆ ವಹಿಸಬೇಕು. ಯಾವುದೇ ರೀತಿಯ ದೂರಿಗೆ ಅವಕಾಶವಾಗದಂತೆ ಪಾರದರ್ಶಕವಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಪರ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಒಟ್ಟು 4.48 ಕೋಟಿ ಫಲಾನುಭವಿಗಳಿಗೆ ಮಾಸಿಕ ಒಟ್ಟು ಸುಮಾರು 509.96 ಕೋಟಿ ರೂ. ವೆಚ್ಚವಾಗಲಿದೆ. ಐದು ಕೆ.ಜಿ ಅಕ್ಕಿಗೆ 6,426 ಕೋಟಿ ರೂ. ವಾರ್ಷಿಕ ವೆಚ್ಚವಾಗುತ್ತದೆ. ಅದೇ ಇಂದಿರಾ ಆಹಾರ ಕಿಟ್ಗೆ ವಾರ್ಷಿಕ 6,119 ಕೋಟಿ ರೂ. ವೆಚ್ಚವಾಗಲಿದೆ. ಇದರಿಂದ ಆಹಾರ ಕಿಟ್ ವಿತರಣೆಯಿಂದ 306.48 ಕೋಟಿ ರೂ. ಉಳಿತಾಯವಾಗಲಿದೆ.


