ಜಲ ಸಂಪನ್ಮೂಲ ಇಲಾಖೆ ಹಾಗೂ ಕೃಷ್ಣ ಭಾಗ್ಯ ಜಲ ನಿಗಮ ಸಹಯೋಗದಲ್ಲಿ ಸೆಪ್ಟೆಂಬರ್ 6ರಂದು ಆಲಮಟ್ಟಿಯಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರದಲ್ಲಿ ಕೃಷ್ಣೆಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ.
ಆಲಮಟ್ಟಿ ಆಣೆಕಟ್ಟೆಯಲ್ಲಿ ಗರಿಷ್ಠ ಮಟ್ಟದಲ್ಲಿ ನೀರು ಸಂಗ್ರಗೊಂಡಿರುವ ಹಿನ್ನೆಲೆ ಅಂದು ಬೆಳಿಗ್ಗೆ 11 ಗಂಟೆಗೆ ರಾಜ್ಯದ ಸಿಎಂ ಸಿದ್ದರಾಮಯ್ಯ ಜಲಾಶಯಕ್ಕೆ ಬಾಗಿನ ಸಮರ್ಪಿಸಲಿದ್ದಾರೆ. ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ ಘನ ಉಪಸ್ಥಿತಿ ವಹಿಸಲಿದ್ದಾರೆ.
ಜವಳಿ,ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ ಡಾ.ಎಂ.ಬಿ.ಪಾಟೀಲ, ಅಬಕಾರಿ ಖಾತೆ ಸಚಿವ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರಾದ ಆರ್.ಬಿ.ತಿಮ್ಮಾಪೂರ ಕಾರ್ಯಕ್ರದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾರಂಭದಲ್ಲಿ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.