ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದು ದುರುಳರು ವಿಕೃತಿ ಮೆರೆದಿದ್ದಾರೆ. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ವಿಕೃತರು ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದಲ್ಲಿ ತಡ ರಾತ್ರಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದು ರಕ್ತದ ಕೋಡಿ ಹರಿಸಿದ್ದಾರೆ. ಹಸುಗಳ ಕೆಚ್ಚಲನ್ನು ಕೊಯ್ದುವರು ಪರಾರಿಯಾಗಿದ್ದು, ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕರ್ಣ ಎಂಬವರಿಗೆ ಸೇರಿದ ಹಸುಗಳ ಮೇಲೆ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಕಾಟನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರಿಂದ ಮಾಹಿತಿ ಪಡೆದಿರುವ ಪೊಲೀಸರು, ಸಿಸಿಟಿ ಪರಿಶೀಲಿಸಿದ್ದಾರೆ.
ಈ ಕೃತ್ಯಕ್ಕೆ ಸ್ಥಳೀಯರು ಆಕ್ರೋಶಗೊಂಡಿದ್ದು, ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ. ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದಾರೆ. ಕೂಡಲೇ ಕಿಡಿಗೇಡಿಗಳನ್ನು ಬಂಧಿಸಬೇಕು. ಅಲ್ಲಿಯವರೆಗೂ ಸ್ಥಳದಿಂದ ಹೋಗಲ್ಲ ಎಂದು ಹೇಳಿದ್ದಾರೆ.
ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮುಂಜಾಗ್ರತಾ ಕ್ರಮವಾಗಿ ಸ್ಥಳಕ್ಕೆ ಚಿಕ್ಕಪೇಟೆ ಎಸಿಪಿ ರಮೇಶ್ ದೌಡಾಯಿಸಿದ್ದಾರೆ. ಕೂಡಲೇ ಕಿಡಿಗೇಡಿಗಳನ್ನು ಬಂಧಿಸಿಬೇಕು, ಇಲ್ಲವಾದಲ್ಲಿ ನಮ್ಮ ಕೈಯಲ್ಲಿ ಕೊಡಿ ನಾವು ಬುದ್ದಿ ಕಲಿಸುತ್ತೇವೆ ಎಂದು ಹಸುಗಳ ಮಾಲೀಕ ಕರ್ಣ ಹೇಳಿದ್ದಾರೆ.
ಹಸುಗಳ ಕೆಚ್ಚಲು ಕೊಯ್ದ ಜಿಹಾದಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ವಹಿಸದಿದ್ದರೆ, ರಾಜ್ಯದಾದ್ಯಂತ ಕರಾಳ ಸಂಕ್ರಾಂತಿ ಆಚರಿಸಲಾಗುವುದು ಎಂದು ಆರ್.ಅಶೋಕ ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ಸರ್ಕಾರ ಹೊಸ ವರ್ಷಕ್ಕೆ ಬೆಲೆ ಏರಿಕೆಯ ಕೊಡುಗೆ ನೀಡಿದೆ. ಅದೇ ರೀತಿ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಹಸುವಿನ ಕೆಚ್ಚಲು ಕೊಯ್ದುಹಾಕುವ ಕೊಡುಗೆಯನ್ನು ನೀಡಿದೆ. ಇಂತಹ ಜಿಹಾದಿ ಮನಸ್ಥಿತಿಯನ್ನು ನಾನು ಈವರೆಗೆ ನೋಡಿಲ್ಲ ಎಂದರು.
ಚಾಮರಾಜಪೇಟೆಯಲ್ಲಿ ಮಾದಕ ವಸ್ತು ದಂಧೆ ನಡೆಯುತ್ತಿದೆ. ಆಸ್ಪತ್ರೆ, ಮೆಡಿಕಲ್ ಸ್ಟೋರ್ ಗಳಲ್ಲಿ ಮಾತ್ರೆ, ಔಷಧಿಗಳನ್ನು ಮಾದಕ ವಸ್ತುಗಳಾಗಿ ಬಳಸಲಾಗುತ್ತಿದೆ. ಈ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿದ್ದೆ. ಆದರೂ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು: ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ಪ್ರತಿಭಟನೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ತಪ್ಪಿತಸ್ಥರ ಮಾಹಿತಿ ದೊರೆತಿಲ್ಲ. ಪೊಲೀಸ್ ಆಯುಕ್ತರು ತಪ್ಪಿತಸ್ಥರನ್ನು ಪತ್ತೆ ಹಚ್ಚಿ , ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ ಎಂದರು.