ಆರ್‌ಟಿಐ ಕಾರ್ಯಕರ್ತ, ಮುಡಾ ಪ್ರಕರಣದ ರೂವಾರಿ ಆಗಿರುವ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರಿನ ಸೈಬರ್ ಪೊಲೀಸರು ಬಂಧಿಸಿದ್ದಾರೆ. ಮುಡಾದ ಮಾಜಿ ಆಯುಕ್ತ ಡಿ.ಬಿ ನಟೇಶ್ ನೀಡಿದ ದೂರು ಆಧರಿಸಿ ಪೊಲೀಸರು ಬಂಧಿಸಿದ್ದಾರೆ.
ಇತ್ತೀಚೆಗಷ್ಟೇ ಸ್ನೇಹಮಯಿ ಕೃಷ್ಣ ನಟೇಶ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಒಂದೂವರೆ ಕೋಟಿ ರೂ. ನೀಡಿ, ನಟೇಶ್ ಮುಂಬಡ್ತಿ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಈ ಆರೋಪದ ಹಿನ್ನೆಲೆ ಮುಡಾ ಮಾಜಿ ಆಯುಕ್ತ ನಟೇಶ್ ಬೆಂಗಳೂರು ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ನೀಡಿದ್ದರು.
ಈ ಪ್ರಕರಣದ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು. ಸ್ನೇಹಮಯಿ ಕೃಷ್ಣ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಬೆಂಗಳೂರು ಸೈಬರ್ ಪೊಲೀಸರು ಬಂಧಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ನಿಯಮಬಾಹಿರವಾಗಿ 14 ಸೈಟುಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದರು. ಇದೇ ಹಗರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿರುದ್ಧಪ್ರಮುಖ ದಾಖಲೆಗಳನ್ನು ನಾಶಪಡಿಸಲು ಯತ್ನಿಸಿರುವುದಾಗಿ ಗಂಭೀರ ಆರೋಪ ಮಾಡಿದ್ದಾರೆ. ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಕುಟುಂಬದವರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಗುತ್ತಿಗೆಯೊಂದಕ್ಕೆ ಸಂಬಂಧಿಸಿ ದಂತೆ ಕೋಟ್ಯಂತರ ರೂಪಾಯಿ ಲಂಚ ಪಡೆದಿದ್ದಾರೆ ಎಂದು ನ್ಯಾಯಾಲಯದ ಮೆಟ್ಟಿಲೇರಿದ್ದರು.


