ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಮತ್ತು ಪವಿತ್ರಾ ಗೌಡ ಅವರಿಗೆ ಜಾಮೀನು ರದ್ದು ಏಕೆ ಮಾಡಬಾರದು ಎಂದು ಆರೋಪಿಗಳ ಪರ ವಕೀಲರು ಸುಪ್ರೀಂ ಕೋರ್ಟ್‌ಗೆ ಲಿಖಿತ ಕಾರಣ ಸಲ್ಲಿಸಿದ್ದಾರೆ.
ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ಪರಿಶೀಲಿಸಿರುವ ಸುಪ್ರೀಂಕೋರ್ಟ್, ದರ್ಶನ್ ಹಾಗೂ ಇತರರಿಗೆ ಜಾಮೀನು ನೀಡುವಾಗ ಹೈಕೋರ್ಟ್ ಸೂಕ್ತ ಮಾನದಂಡಗಳನ್ನು ಅನುಸರಿಸಿಲ್ಲ ಎಂದು ಸುಪ್ರೀಂಕೋರ್ಟ್ ಈಗಾಗಲೇ ಹೇಳಿದೆ.
ದರ್ಶನ್ ಅವರ ಬಂಧನದ ಪ್ರಕ್ರಿಯೆ ಬಗ್ಗೆ ಅವರ ವಕೀಲರು ಪ್ರಶ್ನೆ ಮಾಡಿದ್ದಾರೆ. ದರ್ಶನ್ ರನ್ನು ಮೈಸೂರಿನಲ್ಲಿ ಬಂಧಿಸಲಾಗಿತ್ತು, ಬೆಂಗಳೂರಿನಲ್ಲಿ FIR ದಾಖಲಿಸಲಾಗಿದೆ. ಬಂಧನಕ್ಕೆ ಕಾರಣವನ್ನು ಸಂಜೆರವರೆಗೂ ಲಿಖಿತವಾಗಿ ನೀಡಿರುವುದಿಲ್ಲ. ಬಂಧನಕ್ಕೆ ಕಾರಣಗಳನ್ನು ನೀಡದೆ ಇರುವುದು ಕಾನೂನು ಉಲ್ಲಂಘನೆ ಎಂದಿದ್ದಾರೆ. ದರ್ಶನ್ ಯಾವುದೇ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿಲ್ಲ, ಅಪಹರಣದಲ್ಲಿ ದರ್ಶನ್ ಪಾತ್ರದ ಬಗ್ಗೆ ಸಾಕ್ಷ್ಯವಿಲ್ಲ, ಅಪಹರಣಕ್ಕೆ ದರ್ಶನ್ ಸೂಚನೆ ನೀಡಿದ್ದಾರೆ ಎಂಬುದಕ್ಕೆ ಪುರಾವೆಗಳಿಲ್ಲ, ಸಾಕ್ಷಿಗಳಾದ ಕಿರಣ್, ಮಲ್ಲಿಕಾರ್ಜುನ್ ಮತ್ತು ನರೇಂದ್ರ ಸಿಂಗ್ ಅವರ ಹೇಳಿಕೆಗಳ ವಿಶ್ವಾಸಾರ್ಹತೆ ಬಗ್ಗೆ ಅನುಮಾನವಿದೆ ಎಂದು ವಕೀಲರು ಉಲ್ಲೇಖಿಸಿದ್ದಾರೆ.
ಘಟನೆ ನಡೆದ 7 ದಿನಗಳ ನಂತರ ಕಿರಣ್ ಹೇಳಿಕೆ ದಾಖಲಿಸಲಾಗಿದೆ, ಸಾಕ್ಷಿಗಳಾದ ಮಲ್ಲಿಕಾರ್ಜುನ್ ಮತ್ತು ನರೇಂದ್ರ ಸಿಂಗ್ ಕೋರ್ಟ್‌ನಲ್ಲಿ ದರ್ಶನ್ ಹೆಸರನ್ನು ಉಲ್ಲೇಖಿಸಿಲ್ಲ. ಮರಣದ ಸಮಯವನ್ನು ಪ್ರಾಸಿಕ್ಯೂಷನ್‌ಗೆ ಅನುಸಾರ ನಿರ್ಧರಿಸಲಾಗಿದೆ ಎಂದು ಕಾರಣಗಳನ್ನು ನೀಡಲಾಗಿದೆ.ಹೀಗೆ ಇನ್ನೂ ಕೆಲವು ಕಾರಣಗಳನ್ನು ಪರಿಗಣಿಸಿ ದರ್ಶನ್ ಜಾಮೀನನ್ನು ರದ್ದು ಮಾಡಬಾರದು ಎಂದು ಮನವಿ ಮಾಡಲಾಗಿದೆ.