ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಯೊಬ್ಬರಿಗೆ ಧಮ್ಕಿ ಹಾಕಿದ ಆರೋಪದಡಿ ಆರೋಪಿ ನಟ ದರ್ಶನ್ ಅಭಿಮಾನಿ ಬಳಗದ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಕೇಸ್ನ 49ನೇ ಸಾಕ್ಷಿ ಸಂದೀಪ್ ಎಂಬವರಿಗೆ ಸಾಕ್ಷಿ ಹೇಳದಂತೆ ಬೆದರಿಕೆ ಒಡ್ಡಲಾಗಿದೆ ಎಂದು ಸಾಕ್ಷಿದಾರ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ಪೊಲೀಸರು ರಕ್ಷಣೆ ನೀಡಿ, ಬೆದರಿಕೆ ಹಾಕಿದ ಆರೋಪಿಗಳಿಗಾಗಿ ಕಾರ್ಯಾಚರಣೆ ಕೈಗೊಂಡು ವೇಣು, ಸುಹಾಸ್ ಮತ್ತು ಪುನೀತ್ ಎಂಬ ಮೂವರನ್ನು ಬಂಧಿಸಿ ವಿಚಾರಣೆ ನೆಸುತ್ತಿದ್ದಾರೆ.
ಬಂಧಿತರಲ್ಲಿ ಪುನೀತ್ ಎಂಬಾತ ಸೋಶಿಯಲ್ ಮೀಡಿಯಾದಲ್ಲಿ ‘ಡಿ ಕಂಪನಿ’ ಫ್ಯಾನ್ ಪೇಜ್ ಸಕ್ರಿಯವಾಗಿ ನಿರ್ವಹಿಸುತ್ತಿದ್ದ. ಸುಹಾಸ್ ಮತ್ತು ವೇಣು ತುಮಕೂರಿನ ದರ್ಶನ್ ಅಭಿಮಾನಿ ಸಂಘದ ಸದಸ್ಯರು.
ಸಾಕ್ಷಿದಾರ ಸಂದೀಪ್ ಜೊತೆ ಮಾತುಕತೆ ನಡೆಸುವ ನೆಪದಲ್ಲಿ ಯಾವುದೋ ಒಂದು ಜಾಗಕ್ಕೆ ಕರೆಸಿಕೊಂಡಿದ್ದ ಗ್ಯಾಂಗ್, ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಸುತ್ತಾಡಿಸಿದೆ. ಕೋರ್ಟ್ನಲ್ಲಿ ದರ್ಶನ್ ವಿರುದ್ಧ ಸಾಕ್ಷಿ ಹೇಳದಂತೆ ಒತ್ತಡ ಹೇರಿದ್ದಾರೆ. ಸಾಕ್ಷಿದಾರ ಒಪ್ಪದಿದ್ದಾಗ ಆರೋಪಿ ಸುಹಾಸ್ ಜೈಲಿನಲ್ಲಿರುವ ದರ್ಶನ್ ಹೆಸರು ಹೇಳಿ ಪ್ರಾಣ ಬೆದರಿಕೆ ಒಡ್ಡಿದ್ದ ಎನ್ನಲಾಗಿದೆ.
ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ರೇಣುಕಾಸ್ವಾಮಿಯನ್ನು ಬೆಂಗಳೂರಿನ ಆರ್ಆರ್ ನಗರದ ಶೆಡ್ಗೆ ಕರೆತಂದು ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ಆರೋಪ ಇದೆ. ದರ್ಶನ್ ಮತ್ತು ಗ್ಯಾಂಗ್ ಜೈಲ್ಲಲಿದ್ದು, ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ.


