ನಾಡಹಬ್ಬ ಮೈಸೂರು ದಸರಾ ಉದ್ಘಾಟಕರಾಗಿ ಸರ್ಕಾರ ಸಾಹಿತಿ, ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿರುವ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಇಂದು ನಡೆಯಲಿದೆ.
ಮಾಜಿ ಸಂಸದ ಪ್ರತಾಪ್ ಸಿಂಹ , ಗಿರೀಶ್ ಕುಮಾರ್ ಮತ್ತು ಗೌರವ್ ಎಂಬವರು ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಪಿಐಎಲ್ ಸಲ್ಲಿಸಿದ್ದಾರೆ. ಹೈಕೋರ್ಟ್ ಮುಖ್ಯ ನ್ಯಾ. ವಿಭು ಬಕ್ರು ನೇತೃತ್ವದ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.
ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು, ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆ ಮಾಡುವ ಸಂಪ್ರದಾಯವಿದೆ. ರಾಜ್ಯ ಸರ್ಕಾರ ಬಾನು ಮುಷ್ತಾಕ್ ಅವರ ಆಯ್ಕೆ ಮಾಡುವ ಮೂಲಕ ಹಿಂದೂಗಳ ಭಾವನೆಗೆ ಘಾಸಿ ಮಾಡಿದೆ. ಹೀಗಾಗಿ ಬಾನು ಮುಷ್ತಾಕ್ ಅವರಿಗೆ ನೀಡಿರುವ ಆಹ್ವಾನ ಹಿಂಪಡೆಯಲು ನಿರ್ದೇಶನ ನೀಡಬೇಕು ಅನ್ನುವುದು ಅರ್ಜಿದಾರರ ಮನವಿ.
ಹಿಂದೂ ಆಗಮಿಕ ಪದ್ಧತಿಯಂತೆ ದಸರಾ ಉದ್ಘಾಟನೆ ನಡೆಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಕೆಯಾಗಿದೆ. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರ ಆಯ್ಕೆ ಯೋಗ್ಯವಾದುದು ಎಂದು ಪ್ರಶಂಸೆಗಳ ಜೊತೆಗೆ ಅವರ ಆಯ್ಕೆ ಸರಿಯಲ್ಲ, ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಎಂಬ ವಾದವೂ ತೀವ್ರಗೊಂಡಿದೆ. ಈ ಸಂಬಂಧ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನು ಪರಿಶೀಲಿ ನ್ಯಾಯಾಲಯ ಯಾವ ಆದೇಶ ಪ್ರಕಟಿಸಲಿದೆ ಎಂಬುದರತ್ತ ಎಲ್ಲರ ಚಿತ್ತ ನೆಟ್ಟಿದ್ದು, ಕುತೂಹಲದಿಂದ ಕಾಯುವಂತಾಗಿದೆ.