ದಾವಣಗೆರೆಯ ಕತ್ತಲಗೆರೆ ಗ್ರಾಮದ ರೇಣುಕಮ್ಮ ಎಂಬ ಮಹಿಳೆಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ.
ಈ ಹಿಂದೆ ರೇಣುಕಮ್ಮ ಫೈನಾನ್ಸ್ ಕಂಪನಿ ಒಂದರಲ್ಲಿ ಸಾಲ ಮಾಡಿದ್ದರು. ನಂತರ ಫೈನಾನ್ಸ್ ಕಂಪನಿ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತು ಹಸು ಮಾರಿ ಸಾಲವನ್ನು ತೀರಿಸಿದ್ದರು. ಇದಾದ ಬಳಿಕ ಅನಾರೋಗ್ಯದ ಕಾರಣ ಆಸ್ಪತ್ರೆ ಖರ್ಚಿಗಾಗಿ ಮತ್ತೆ ಸಾಲ ಮಾಡಿದ್ದಾರೆ. ಇದೀಗ ಬಾಕಿ ಸಾಲ ಪಾವತಿ ಮಾಡುತ್ತಿದ್ದರೂ ಮೈಕ್ರೋ ಫೈನಾನ್ಸ್ ಸಿಬ್ಬಂದಿ ನಿತ್ಯ ಮಹಿಳೆಯ ಮನೆಗೆ ಬಂದು ಬೆದರಿಕೆ ಹಾಕಿ ಸಾಲ ತೀರಿಸುವಂತೆ ಕಿರುಕುಳ ನೀಡುತ್ತಿದ್ದಾರೆ.
ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳ ಕುರಿತಾಗಿ ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ಉನ್ನತಮಟ್ಟದ ಸಭೆ ನಡೆಸಿ, ಹಲವು ಕ್ರಮಗಳನ್ನು ಕೈಗೊಂಡಿದ್ದರು. ಸಾಲಗಾರರ ಹಿತ ಕಾಪಾಡುವ ದೃಷ್ಟಿಯಿಂದ ಆದಷ್ಟು ಬೇಗ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ರಚನೆ ಮಾಡುವುದಾಗಿ ಘೋಷಣೆ ಮಾಡಿದ್ದರು.
ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿದ್ದು, ಜನರು ಅಂತಹವರ ವಿರುದ್ಧ ದೂರು ನೀಡಿದ್ದಲ್ಲಿ ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಮೈಕ್ರೋಫೈನಾನ್ಸ್ ಸಂಸ್ಥೆ ಅಥವಾ ಲೇವಾದೇವಿಗಾರರ ನೀಡು ತೊಂದರೆಗಳ ವಿರುದ್ಧ ದೂರು ನೀಡಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿವನ್ನು ತೆರೆಯಲಾಗಿದೆ ಎಂದು ತಿಳಿಸಿದ್ದಾರೆ.