Menu
12

ಅನಧಿಕೃತ ಫ್ಲೆಕ್ಸ್, ಬ್ಯಾನರ್ ಯಾರೇ ಹಾಕಿದ್ರೂ ಕ್ರಮಕ್ಕೆ ಡಿಸಿಎಂ ಶಿವಕುಮಾರ್ ಸೂಚನೆ

ಪ್ರದೇಶ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಿನ್ನೆಲೆಯಲ್ಲಿ ಅರಮನೆ ಮೈದಾನ ಸುತ್ತಮುತ್ತ ಸೇರಿದಂತೆ ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್  ಬಿಬಿಎಂಪಿ ಕಮಿಷನರ್ ಅವರಿಗೆ ಸೂಚನೆ ನೀಡಿದ್ದಾರೆ.

ಇಂದು (ಸೋಮವಾರ) ಅರಮನೆ ಮೈದಾನದಲ್ಲಿ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಹಾಕಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಇದನ್ನು ಹಾಕಿರುವವರಿಗೆ ಡಿಸಿಎಂ ಸೂಚಿಸಿದ್ದಾರೆ.

ಒಂದೊಮ್ಮೆ ತೆರವು ಮಾಡದಿದ್ದರೆ ಸಂಬಂಧ ಪಟ್ಟವರ ವಿರುದ್ಧ ದಂಡ ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರಿಗೆ ತಿಳಿಸಿದ್ದಾರೆ.

“ಬೆಂಗಳೂರು ನಗರದ ಸೌಂದರ್ಯವನ್ನು ಹಾಳು ಮಾಡಬಾರದು ಎಂದು ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ನಿಷೇಧಿಸಲಾಗಿದೆ. ಸರ್ಕಾರದ ಈ ಆದೇಶವನ್ನು ಪದೇ ಪದೆ ನಿರ್ಲಕ್ಷಿಸಲಾಗಿದೆ” ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಈ ಆದೇಶ ಉಲ್ಲಂಘಿಸಿರುವವರು ನಮ್ಮ ಪಕ್ಷದವರಾದರೂ ಸರಿ, ಬೇರೆ ಪಕ್ಷದವರಾದರೂ ಸರಿ ಅಂತಹವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು” ಎಂದು ತಿಳಿಸಿರುವುದಾಗಿ ಶಿವಕುಮಾರ್  ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *