Menu

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಮಾಧ್ಯಮಗಳ ಮೇಲಿನ ನಿರ್ಬಂಧ ತೆರವುಗೊಳಿಸಿದ ಹೈಕೋರ್ಟ್

ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಗಳ ಮೇಲೆ ವಿಧಿಸಿದ್ದ ನಿರ್ಬಂಧವನ್ನು ಹೈಕೋರ್ಟ್ ರದ್ದುಗೊಳಿಸಿ ಮಹತ್ವದ ಆದೇಶ ನೀಡಿದೆ.

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್.ಡಿ ಮಾಧ್ಯಮಗಳು ಮಾನಹಾನಿಕರ ವರದಿ ಮಾಡದಂತೆ ನಿರ್ಬಂಧ ವಿಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಎತ್ತಿ ಹಿಡಿದಿದ್ದ ಹೈಕೋರ್ಟ್ ಶುಕ್ರವಾರ ತೆರವುಗೊಳಿಸಿತು.

ಪ್ರತಿಬಂಧಕಾದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ದಕ್ಷಿಣ ಕನ್ನಡದ ಕುಡ್ಲ ರ್ಯಾಂಪೇಜ್ ಪ್ರಧಾನ ಸಂಪಾದಕ ಅಜಯ್ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಮಾಧ್ಯಮಗಳ ಮೇಲೆ ವಿಧಿಸಿದ್ದ ನಿರ್ಬಂಧ ರದ್ದುಗೊಳಿಸಿ ಆದೇಶ ಹೊರಡಿಸಿದರು.

ಈ ಅರ್ಜಿಯನ್ನು ಪುರಸ್ಕರಿಸಿದಂತ ಹೈಕೋರ್ಟ್ ನ್ಯಾಯಪೀಠ ದಿನಾಂಕ 8-7-2025ರಂದು ವಿಚಾರಣಾಧೀನ ನ್ಯಾಯಾಲಯವು ಮಾಡಿರುವ ಆಕ್ಷೇಪಾರ್ಹವಾದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ರದ್ದುಪಡಿಸಿದೆ. ಅಲ್ಲದೇ ಮಧ್ಯಂತರ ಅರ್ಜಿಯನ್ನು ಹೊಸದಾಗಿ ಪರಿಗಣಿಸಲು ಪ್ರಕರಣವನ್ನು ಸಕ್ಷಮ ನ್ಯಾಯಾಲಯಕ್ಕೆ ವಾಪಾಸ್ ಕಳುಹಿಸಿದೆ.

ವಿಚಾರಣಾಧೀನ ನ್ಯಾಯಾಲಯವು ಈ ಆದೇಶವನ್ನು ಮಾಡಿರುವ ಅಂಶಗಳನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು. ಸಕ್ಷಮ ನ್ಯಾಯಾಲಯವು ಮಧ್ಯಂತರ ಅರ್ಜಿಯನ್ನು ತುರ್ತಾಗಿ ನಿರ್ಧರಿಸಬೇಕು ಎಂಬುದಾಗಿ ತೀರ್ಪಿನಲ್ಲಿ ಉಲ್ಲೇಖಿಸಿ ಆದೇಶಿಸಿದೆ.

ಇದೇ ಸಂದರ್ಭದಲ್ಲಿ ಸಿವಿಲ್ ದಾವೆ, ಕ್ರಿಮಿನಲ್ ಪ್ರಕ್ರಿಯೆ, ಆರೋಪ, ಪ್ರತ್ಯಾರೋಪದ ಮೇಲೆ ಈ ನ್ಯಾಯಲಯವು ಯಾವುದೇ ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ. ಆದೇಶದಲ್ಲಿ ಪರಿಗಣಿಸಿರುವ ಒಂದು ಅಂಶವನ್ನು ಹೊರತುಪಡಿಸಿ ಪಕ್ಷಕಾರರ ನಡುವೆ ಎಲ್ಲಾ ವಾದಗಳನ್ನು ಮುಕ್ತವಾಗಿ ಇರಿಸಲಾಗಿದೆ ಎಂಬುದಾಗಿ ಹೈಕೋರ್ಟ್ ತಿಳಿಸಿದೆ.

Related Posts

Leave a Reply

Your email address will not be published. Required fields are marked *