ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಬ್ಯಾನರ್ ಕಟ್ಟುವ ಸಂಬಂಧ ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ನಡೆದ ಗಲಾಟೆ, ಹಿಂಸಾಚಾರದ ಬಳಿಕ ಅಮಾನತುಗೊಂಡಿದ್ದ ಎಸ್‌ಪಿ ಪವನ್ ನಜ್ಜೂರ್ ತುಮಕೂರಿನಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಸ್ನೇಹಿತನ ಫಾರ್ಮ್‌ಹೌಸ್‌ನಲ್ಲಿ ಮಾತ್ರೆ ಸೇವಿಸಿದ್ದ ನಜ್ಜೂರ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಮಾನತು ಆದೇಶದಿಂದ ಆದೇಶದಿಂದ ಮನನೊಂದು ಅವರು ಈ ಕೃತ್ಯಕ್ಕೆ ಮುಂದಾಗಿರಬಹುದು ಎನ್ನಲಾಗಿದೆ. ಆದರೆ ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಬಳ್ಳಾರಿಯಲ್ಲಿ ಡ್ಯೂಟಿಗೆ ಸೇರಿಕೊಂಡ ಕೆಲವೇ ಗಂಟೆಗಳಲ್ಲಿ ಕರ್ತವ್ಯ ಲೋಪದ ಆರೋಪದಡಿ ಪವನ್ ನಜ್ಜೂರ್ ಅವರನ್ನು ಸರ್ಕಾರ ಅಮಾನತುಗೊಳಿಸಿದೆ. 11 ವರ್ಷಗಳ ನಂತರ ಅವರಿಗೆ ಈ ಹುದ್ದೆ ಸಿಕ್ಕಿತ್ತು. ಬಳ್ಳಾರಿಯಲ್ಲಿ ಕಲ್ಲು ತೂರಾಟ ಹಾಗೂ ಗಲಭೆಯನ್ನು ನಿಯಂತ್ರಿಸಲು ವಿಫಲರಾದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದರು. ಕರ್ತವ್ಯ ಲೋಪ ಹಾಗೂ ಹಿರಿಯ ಅಧಿಕಾರಿಗಳಿಗೆ ಸರಿಯಾದ ಮಾಹಿತಿ ನೀಡದ ಕಾರಣಕ್ಕಾಗಿ ಈ ಶಿಸ್ತು ಕ್ರಮ ಜರುಗಿಸಲಾಗಿದೆ, ಡಿಐಜಿಪಿ ಹಾಗೂ ಡಿಜಿ-ಐಜಿಪಿ ಅವರ ವರದಿಯ ಆಧಾರದ ಮೇಲೆ ಸರ್ಕಾರ ಈ ಆದೇಶ ಹೊರಡಿಸಿದೆ.
ಬಳ್ಳಾರಿಯ ಅವಂಬಾವಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಹಾಕಿಸುವುದನ್ನು ಅವರ ಬೆಂಬಲಿಗರು ವಿರೋಧಿಸಿದ್ದಾರೆ. ಈ ವೇಳೆ ಜನಾರ್ದನ ರೆಡ್ಡಿ ಹಾಗೂ ಶಾಸಕ ಭರತ್ ರೆಡ್ಡಿ ಬೆಂಬಲಿಗರ ನಡುವೆ ಹೊಡೆದಾಟ ನಡೆದು ವಿಕೋಪಕ್ಕೆ ತಿರುಗಿತ್ತು. ವಿಷಯ ಗೊತ್ತಾದ ಕೂಡಲೇ ಸ್ಥಳಕ್ಕೆ ಬಿಜೆಪಿ ನಾಯಕ ಶ್ರೀರಾಮುಲು ಧಾವಿಸಿದ್ದಾರೆ. ಈ ವೇಳೆ ಗಲಾಟೆ ತೀವ್ರವಾಗುತ್ತಿದ್ದಂತೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಗನ್‌ಮ್ಯಾನ್‌ಗಳು ಫೈರಿಂಗ್ ಮಾಡಿದ್ದು ಕಾಂಗ್ರೆಸ್ ಕಾರ್ಯಕರ್ತ ರೊಬ್ಬರು ಮೃತಪಟ್ಟಿದ್ದಾರೆ. ಎರಡೂ ಕಡೆಯ ಬೆಂಬಲಿಗರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ.
ಶಾಸಕ ಭರತ್ ರೆಡ್ಡಿಯ ಆಪ್ತ ಸತೀಶ್ ರೆಡ್ಡಿಯ ಖಾಸಗಿ ಗನ್ ಮ್ಯಾನ್‌ಗಳು ಹಾರಿಸಿದ ಗುಂಡಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿಯಾಗಿದ್ದು, ಗನ್‌ಮ್ಯಾನ್‌ಗಳು ನಾಪತ್ತೆಯಾಗಿದ್ದಾರೆ.


