Menu

ಡಿಜಿಟಲ್‌ ಅರೆಸ್ಟ್‌: ಬೆಂಗಳೂರಿನ ಮಹಿಳಾ ಟೆಕ್ಕಿ ಕಳೆದುಕೊಂಡಿದ್ದು 31.83 ಕೋಟಿ ರೂ.

ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ಡಿಜಿಟಲ್ ಅರೆಸ್ಟ್ ಹೆಸರಿನ ವಂಚನೆಗೆ ಒಳಗಾಗಿ 31.83 ಕೋಟಿ ರೂ. ಕಳೆದುಕೊಂಡಿದ್ದಾರೆ. ಇಂದಿರಾನಗರದ 57 ವರ್ಷದ ಮಹಿಳಾ ಟೆಕ್ಕಿ ಮೇಲೆ ಸೈಬರ್ ಅಪರಾಧಿಗಳು ಆರು ತಿಂಗಳಿಗೂ ಹೆಚ್ಚು ಕಾಲ ಕಣ್ಗಾವಲಿನಲ್ಲಿರಿಸಿದ್ದರು. ಹಣ ದೋಚಿ ಸಂಪರ್ಕ ಕಡಿತಗೊಳಿಸಿದ್ದರು ಎಂದು ಹಿರಿಯ ಸೈಬರ್ ಅಪರಾಧ ತನಿಖಾಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

2024 ರ ಸೆಪ್ಟೆಂಬರ್ 15 ರಂದು ಮಹಿಳೆಗೆ ಕೊರಿಯರ್ ಸೇವೆ ಡಿಎಚ್​ಎಲ್​ನಿಂದ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಕರೆ ಮಾಡಿದ್ದಾನೆ. ಆಕೆಯ ಹೆಸರಿನಲ್ಲಿ ಮೂರು ಕ್ರೆಡಿಟ್ ಕಾರ್ಡ್‌ಗಳು, ನಾಲ್ಕು ಪಾಸ್‌ಪೋರ್ಟ್‌ಗಳು ಮತ್ತು ನಿಷೇಧಿತ ಮಾದಕ ದ್ರವ್ಯಗಳನ್ನು ಒಳಗೊಂಡಿರುವ ಪ್ಯಾಕೇಜ್ ಮುಂಬೈನ ಅಂಧೇರಿಯಲ್ಲಿರುವ ಡಿಎಚ್​ಎಲ್​ ಕೇಂದ್ರಕ್ಕೆ ಬಂದಿದೆ ಎಂದು ಹೇಳಿದ್ದಾನೆ.

ತಾನು ಬೆಂಗಳೂರಿನಲ್ಲಿ ವಾಸಿಸುತ್ತಿದ್ದು, ಕೊರಿಯರ್ ಜೊತೆ ಯಾವುದೇ ಸಂಪರ್ಕವಿಲ್ಲ ಎಂದು ಆಕೆ ಹೇಳಿದ್ದಾಳೆ. ಫೋನ್ ಸಂಖ್ಯೆ ಪ್ಯಾಕೇಜ್‌ಗೆ ಲಿಂಕ್ ಆಗಿರುವುದರಿಂದ ಇದು ಸೈಬರ್ ಅಪರಾಧವಾಗಿರಬಹುದು ಎಂದು ಕರೆ ಮಾಡಿದವ ಹೇಳಿಕೊಂಡಿದ್ದಾನೆ. ಈ ವಿಷಯದ ಬಗ್ಗೆ ಸೈಬರ್ ಅಪರಾಧ ಸೆಲ್​ಗೆ ದೂರು ನೀಡುವಂತೆ ಆಕೆಯನ್ನು ಕೇಳಿಕೊಂಡಿದ್ದಾನೆ. ಆಕೆ ಪ್ರತಿಕ್ರಿಯಿಸುವ ಮೊದಲು ಕರೆಯನ್ನು ಸಿಬಿಐ ಅಧಿಕಾರಿಯ ಸೋಗಿನಲ್ಲಿರುವ ವ್ಯಕ್ತಿಗೆ ವರ್ಗಾಯಿಸಿದ್ದ. ಸೈಬರ್ ವಂಚಕರು ಆಕೆಯ ಮೇಲೆ ನಿಗಾ ಇಡುತ್ತಿದ್ದಾರೆ ಎಂದು ಹೆದರಿಸಿ ಸ್ಥಳೀಯ ಪೊಲೀಸರನ್ನು ಸಂಪರ್ಕಿಸದಂತೆ ಅಥವಾ ಕಾನೂನು ಸಹಾಯ ಪಡೆಯದಂತೆ ಎಚ್ಚರಿಕೆ ನೀಡಿದ್ದಾರೆ.

ಮಾಹಿತಿ ನೀಡಿದರೆ ಕುಟುಂಬವನ್ನು ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿದ್ದರು. ಭಯದಿಂದ ಮತ್ತು ಮಗನ ಮದುವೆ ಸಮೀಪಿಸುತ್ತಿದ್ದರಿಂದ ಹೆದರಿದ್ದ ಸಂತ್ರಸ್ತೆ ವಂಚಕರು ಹೇಳಿದ ರೀತಿಯಲ್ಲೇ ನಡೆದುಕೊಂಡಿದ್ದರು ಎಂದು ಹೇಳಲಾಗಿದೆ.

ಕೆಲವು ದಿನಗಳ ಬಳಿಕ ಸ್ಕೈಪ್ ವೀಡಿಯೊ ಕರೆಯ ಮೂಲಕ ಸಂತ್ರಸ್ತೆಯನ್ನು ಗೃಹಬಂಧನಕ್ಕೆ ಒಳಪಡಿಸಿ, ಸಿಬಿಐ ಅಧಿಕಾರಿ ಪ್ರದೀಪ್ ಸಿಂಗ್ ಎಂದು ಹೇಳಿಕೊಂಡ ವ್ಯಕ್ತಿ ರಾಹುಲ್ ಯಾದವ್ ಎಂಬ ಇನ್ನೊಬ್ಬ ವ್ಯಕ್ತಿಗೆ ಒಂದು ವಾರ ಮೇಲ್ವಿಚಾರಣೆ ಮಾಡಲು ನಿಯೋಜಿಸಿದ. ಈ ಸಮಯದಲ್ಲಿ ಸಂತ್ರಸ್ತೆ ವರ್ಕ್ ಫ್ರಂ ಹೋಮ್​ನಲ್ಲಿದ್ದರು.

2024 ರ ಸೆಪ್ಟೆಂಬರ್ 23ರಂದು ಆರ್‌ಬಿಐನ ಹಣಕಾಸು ಗುಪ್ತಚರ ಘಟಕಕ್ಕೆ ಆಸ್ತಿಗಳನ್ನು ಘೋಷಿಸುವಂತೆ ಮಹಿಳೆಗೆ ಪ್ರದೀಪ್ ಸಿಂಗ್ ಸೂಚಿಸಿದ್ದ. ಅದರಂತೆ ಮಹಿಳೆ ನಡೆದುಕೊಂಡಿದ್ದರು. ವಂಚಕರು ಹಂತ ಹಂತವಾಗಿ ಹಣ ವಸೂಲಿ ಮಾಡಿದ್ದರು.

ಹಿರಿಯ ಪೊಲೀಸ್ ಅಧಿಕಾರಿ ನೀಡಿದ ಮಾಹಿತಿ ಪ್ರಕಾರ, ವಂಚಕರ ಸೂಚನೆಯಂತೆ ಸಂತ್ರಸ್ತೆ ಫಿಕ್ಸೆಡ್ ಡಿಪಾಸಿಟ್​​ಗಳನ್ನು ಹೊರತುಪಡಿಸಿ ಇತರ ಉಳಿತಾಯ 31.83 ಕೋಟಿ ರೂ.ಗಳನ್ನು 187 ವಹಿವಾಟುಗಳಲ್ಲಿ ವಂಚಕರಿಗೆ ವರ್ಗಾಯಿಸಿದ್ದಾಳೆ. 2025 ರ ಫೆಬ್ರವರಿ ಒಳಗೆ ಪರಿಶೀಲನೆ ಮಾಡಿದ ನಂತರ ಹಣವನ್ನು ಹಿಂತಿರುಗಿಸಲಾಗುವುದು ಎಂದು ಸಂತ್ರಸ್ತೆಗೆ ನಕಲಿ ತನಿಖಾ ಅಧಿಕಾರಿಗಳು ಭರವಸೆ ನೀಡಿ ಕ್ಲಿಯರೆನ್ಸ್ ಸರ್ಟಿಫಿಕೇಟ್ ಕೊಟ್ಟಿದ್ದರು.

ಬಳಿಕ ವಂಚಕರು ಹಣ ವಾಪಸ್ ನೀಡುವ ಸೂಚನೆ ಕಾಣದಿದ್ದಾಗ ಅನುಮಾನಗೊಂಡ ಸಂತ್ರಸ್ತೆ ಬೆಂಗಳೂರು ಪೂರ್ವ ಸೈಬರ್ ಕ್ರೈಮ್ ಪೊಲೀಸರಿಗೆ 2025ರ ನವೆಂಬರ್ 14 ರಂದು ದೂರು ನೀಡಿದ್ದರು. ಎಫ್​ಐಆರ್ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *