“ರಾಜಕೀಯದಲ್ಲಿ ಕುಮಾರಸ್ವಾಮಿ ಅವರಿಗಿಂತ ಹೆಚ್ಚಿನ ಅನುಭವವಿದೆ. ನಾನು ಸಿಎಂ ಆಗದೇ ಇರಬಹುದು, ಆದರೆ ಆಡಳಿತ ವಿಚಾರದಲ್ಲಿ ಅವರಿಗಿಂತ ಅನುಭವ ಹೊಂದಿದ್ದೇನೆ. ಅವರಿಂದ ಕಲಿಯುವ ಅಗತ್ಯ ನನಗಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿರುಗೇಟು ನೀಡಿದರು.
ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ನಡೆಸಿದ ಸಭೆಗೆ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ನಾನು ಬಹಳ ಕಾಲ ಸಚಿವನಾಗಿ ಕೆಲಸ ಮಾಡಿದ್ದೇನೆ. ಆಡಳಿತ ಹೇಗೆ ಮಾಡಬೇಕು, ಯಾರ ಜೊತೆ ಸಭೆ ಮಾಡಬೇಕು, ಮಾಡಬಾರದು ಎಂಬುದು ನನಗೆ ಚೆನ್ನಾಗಿ ಗೊತ್ತಿದೆ” ಎಂದು ತಿರುಗೇಟು ನೀಡಿದರು.
ಬಳ್ಳಾರಿಯಲ್ಲಿ ಬ್ಯಾನರ್ ಗಲಭೆ ಬಳಿಕ ಪೊಲೀಸ್ ಅಧಿಕಾರಿಗಳ ಸಭೆ ನಡೆಸುವುದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಯಾರು, ಅವರಿಗೆ ಆ ಅಧಿಕಾರ ಯಾರು ಕೊಟ್ಟರು, ರಾಜ್ಯದಲ್ಲಿ ಗೃಹ ಸಚಿವರು ಇಲ್ಲವೇ ಎಂದು ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದರು.
ಡಿಸಿಎಂ ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದಾರೆ. ರಾಜ್ಯದಲ್ಲಿರುವ ಗೃಹ ಸಚಿವರು ಹೆಬ್ಬೆಟ್ಟು ಸಚಿವರಾ, ಯಾವ ಆಧಾರದಲ್ಲಿ ಡಿಕೆ ಶಿವಕುಮಾರ್ ಸಭೆ ನಡೆಸಿದ್ದಾರೆ, ಗೃಹ ಇಲಾಖೆಯಲ್ಲಿ ಡಿಸಿಎಂ ಹಸ್ತಕ್ಷೇಪ ಏಕೆ ಎಂದು ಕಿಡಿ ಕಾರಿದ್ದರು.
ಕಾಂಗ್ರೆಸ್ ಸತ್ಯ ಶೋಧನಾ ಸಮಿತಿಗೆ ಅಧಿಕಾರಿಗಳು ಯಾವ ಮಾಹಿತಿ ಕೊಡುತ್ತಾರೆ, ಕಾರ್ಯಕರ್ತರು, ಕಾಂಗ್ರೆಸ್ ನಾಯಕರು ಘಟನೆಗೆ ಕಾರಣರಾದ ಶಾಸಕರ ವಿರುದ್ಧವೇ ಸತ್ಯಶೋಧನೆ ಸಮಿತಿಯ ಮುಂದೆ ದೂರು ನೀಡಿದ್ದಾರೆ. ಹಾಗಾದರೆ ನಿಮ್ಮ ತನಿಖೆಯ ಹಣೆಬರಹ ಏನು ಎಂದು ಪ್ರಶ್ನಿಸಿದ್ದರು.
ಬಳ್ಳಾರಿ ನಗರದಲ್ಲಿ ನಡೆದ ಪ್ರಕರಣವನ್ನು ಮುಚ್ಚಿ ಹಾಕಲು ಸರ್ಕಾರ ತರಾತುರಿಯಲ್ಲಿ ಕೆಲಸ ಮಾಡುತ್ತಿದೆ. ಕುಟುಂಬದವರಿಗೆ ಅಂತಿಮ ವಿಧಿ ವಿಧಾನ ನಡೆಸುವುದಕ್ಕೆ ಅವಕಾಶವನ್ನೂ ನೀಡದೆ ಕೊಲೆಯಾದ ಕಾರ್ಯಕರ್ತನ ಮೃತದೇಹವನ್ನು ಸುಟ್ಟಿದ್ದು ಯಾಕೆ, ಇದಕ್ಕೆಲ್ಲಾ ಸರ್ಕಾರ ಉತ್ತರ ಕೊಡಬೇಕು ಎಂದು ಆಗ್ರಹಿಸಿದ್ದರು.


