Menu

ಒಂದೇ ಒಂದು ಗ್ರಾಮದಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಆಗುವಂತಿಲ್ಲ: ಸಿಎಂ ಖಡಕ್‌ ಸೂಚನೆ

ಶುದ್ದ ಕುಡಿಯುವ ನೀರಿಗೆ ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಸಮಸ್ಯೆ ಆಗಬಾರದು ಎಂದು ಜಿಲ್ಲಾಧಿಕಾರಿಗಳಿಗೆ-ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಸ್ಪಷ್ಟ ಸೂಚನೆ ನೀಡಿದ್ದಾರೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಈ ಸೂಚನೆ ನೀಡಿದರು.

ರಾಜ್ಯದಲ್ಲಿ ಎಲ್ಲಿಯೂ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು. ಕುಡಿಯುವ ನೀರಿನ ನಿರ್ವಹಣೆಗೆ ಯಾವುದೇ ಹಣಕಾಸಿನ ಕೊರತೆ ಇರುವುದಿಲ್ಲ. ಪಂಚಾಯತ್ ರಾಜ್ ಇಲಾಖೆಗೆ 60 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದರು.  ಜಿಲ್ಲೆಗಳಲ್ಲಿ ತುರ್ತು ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಧಿಕಾರಿಗಳು ಕ್ರಿಯಾ ಯೋಜನೆ ರೂಪಿಸಿ, ಟಾಸ್ಕ್ ಫೋರ್ಸ್‌ನಿಂದ ಅನುಮೋದನೆ ಪಡೆದುಕೊಂಡು ಅನುಷ್ಠಾನಗೊಳಿಸಲು ಮುಖ್ಯಮಂತ್ರಿ  ಸೂಚನೆ ನೀಡಿದರು.

ಪ್ರತಿ ವರ್ಷ ಕುಡಿಯುವ ನೀರಿನ ತೊಂದರೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಸಮಸ್ಯೆಯನ್ನು ಶಾಶ್ವತವಾಗಿ ನೀಗಿಸಲು ಯೋಜನೆ ರೂಪಿಸಬೇಕು. ಅಗತ್ಯಬಿದ್ದರೆ ಮಾತ್ರ ಬೋರ್‌ವೆಲ್‌  ಕೊರೆಯಬೇಕು. ಯಾವುದೇ ಕಾರಣಕ್ಕೂ ಅನಗತ್ಯವಾಗಿ ಬೋರ್ವೆಲ್ ಕೊರೆದು ವೆಚ್ಚ ಮಾಡಬಾರದು ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.  ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ವಾಡಿಕೆಗಿಂತ ಶೇಕಡಾ 55ರಷ್ಟು ಮಾನ್ಸೂನ್ ಪೂರ್ವ ಹೆಚ್ಚು ಮಳೆಯಾಗಿದೆ. ವಾಡಿಕೆಗಿಂತ ಯಾವುದೇ ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆ ದಾಖಲಾಗಿಲ್ಲ ಎಂದು ಹೇಳಿದರು.

27 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಎಲ್ಲಾ ಜಲಾಶಯಗಳಲ್ಲಿ ಶೇ.50ರಿಂದ ಶೇ.60 ರಷ್ಟು ಹೆಚ್ಚಿನ ನೀರಿನ ಸಂಗ್ರಹವಿದೆ.  ಈ ವರ್ಷ ವಾಡಿಕೆ ಗಿಂತ ಹೆಚ್ಚು ಮುಂಗಾರು ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾನ್ಸೂನ್ ವಿಳಂಬವಾದರೆ 6319 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದು ಎಂದು ಗುರುತಿಸಲಾಗಿದೆ ಎಂದರು.

ಪ್ರಸ್ತುತ 551 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, 123ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಅಗತ್ಯ ಸಂದರ್ಭ ದಲ್ಲಿ ನೀರು ಪಡೆಯಲು ಈಗಾಗಲೇ 3ಸಾವಿರ ಖಾಸಗಿ ಬೋರ್‌ವೆಲ್‌ ಗಳನ್ನು ಗುರುತಿಸಲಾಗಿದ್ದು, 480 ಬೋರ್‌ವೆಲ್‌ಗಳನ್ನು ಖಾಸಗಿಯವರಿಂದ ಬಾಡಿಗೆ ಪಡೆದು ನೀರು ಒದಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

Related Posts

Leave a Reply

Your email address will not be published. Required fields are marked *