ಆಫ್ರಿಕ ಖಂಡದ ಕಾಂಗೋ ಮತ್ತು ಉಗಾಂಡಾದಲ್ಲಿ ಮಾರಣಾಂತಿಕ ಎಬೋಲಾ ವೈರಸ್ ವೇಗವಾಗಿ ಹರಡುತ್ತಿರುವ ಹಿನ್ನೆಲೆ ಭಾರತ ಸರ್ಕಾರವು ಮುನ್ನೆಚ್ಚರಿಕೆ ಕ್ರಮವಾಗಿ ದೇಶದ ಎಲ್ಲಾ ಪ್ರಮುಖ ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಹೈ-ಅಲರ್ಟ್ ಘೋಷಿಸಿ ಪ್ರಯಾಣಿಕರಿಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಕೇಂದ್ರ ಆರೋಗ್ಯ ಕಾರ್ಯದರ್ಶಿ ಪುಣ್ಯ ಸಲಿಲ ಶ್ರೀವಾಸ್ತವ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಎಬೋಲಾ ತಡೆಗೆ ಸಂಪೂರ್ಣ ಸಿದ್ಧತೆ ಮಾಡಿಕೊಳ್ಳುವಂತೆ ಮತ್ತು ಪ್ರಮಾಣಿತ ಕಾರ್ಯಾಚರಣೆ ವಿಧಾನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.
ಎಬೋಲಾ ನಿಗಾ ಕ್ರಮಗಳನ್ನು ಬಲಪಡಿಸಲು ರಾಜ್ಯಗಳಿಗೆ ನಿರ್ದೇಶನ ನೀಡಲಾಗಿದ್ದು, ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಕಡ್ಡಾಯ ತಪಾಸಣೆ, ಕ್ವಾರಂಟೈನ್ ವ್ಯವಸ್ಥೆ, ರೋಗಿಗಳ ತುರ್ತು ನಿರ್ವಹಣೆ, ರೆಫರಲ್ ಪ್ರಕ್ರಿಯೆ ಮತ್ತು ಪ್ರಯೋಗಾಲಯ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಮಾರ್ಗಸೂಚಿಯನ್ನು ಅನುಸರಿಸುವಂತೆ ಸೂಚನೆ ನೀಡಲಾಗಿದೆ.
ಸಂಬಂಧಪಟ್ಟ ಸಚಿವಾಲಯಗಳು ಮತ್ತು ಇಲಾಖೆಗಳು ಆರೋಗ್ಯ ಸಚಿವಾಲಯದೊಂದಿಗೆ ನಿರಂತರ ಸಮನ್ವಯ ಸಾಧಿಸಿ ಮುನ್ನೆಚ್ಚರಿಕೆ ವಹಿಸಬೇಕಿದೆ. ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ, ಉಗಾಂಡಾ ಮತ್ತು ದಕ್ಷಿಣ ಸುಡಾನ್‌ನಂತಹ ಹೈ-ರಿಸ್ಕ್ ದೇಶಗಳಿಂದ ಬರುವ ಅಥವಾ ಆ ದೇಶಗಳ ಮೂಲಕ ಪ್ರಯಾಣಿಸಿ ಬರುವ ಪ್ರಯಾಣಿಕರು, ಇಮಿಗ್ರೇಷನ್ ಕ್ಲಿಯರೆನ್ಸ್‌ಗೂ ಮುನ್ನ ವಿಮಾನ ನಿಲ್ದಾಣದ ಹೆಲ್ತ್ ಡೆಸ್ಕ್ ಅಥವಾ ಹೆಲ್ತ್ ಆಫೀಸರ್‌ಗೆ ಕಡ್ಡಾಯವಾಗಿ ಮಾಹಿತಿ ನೀಡಬೇಕಿದೆ.


