ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಮಲ್ಶಿರಾಸ್ ತಹಸಿಲ್ನಲ್ಲಿ ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದು ಮಹಿಳೆಯರು ಮತ್ತು ಮಕ್ಕಳು ಸೇರಿ ಎಂಟು ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಅಪಘಾತದಲ್ಲಿ ಏಳು ಜನರು ಗಾಯಗೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಪಂಢರಪುರ ಮೂಲದ 15 ಜನರು ಮಾಸ್ವಾಡ್ನ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸಾಗುತ್ತಿರುವಾಗ ತಂಡುಲ್ವಾಡಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಪಿಕಪ್ನಲ್ಲಿ ಇದ್ದವರು ಹೆಚ್ಚಿನವರು ಸಂಬಂಧಿಕರು ಮತ್ತು ಅಕ್ಕಪಕ್ಕದ ನಿವಾಸಿಗಳು ಎಂದು ತಿಳಿದುಬಂದಿದೆ.
15 ಜನರಿದ್ದ ಪಿಕ್-ಅಪ್ ವಾಹನವು ಭಾನುವಾರ ಸಂಜೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಜಮೀನಿಗೆ ನುಗ್ಗಿ ಬಾವಿಗೆ ಬಿದ್ದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸೋಲಾಪುರದ ಪೊಲೀಸ್ ವರಿಷ್ಠಾಧಿಕಾರಿ ಅತುಲ್ ಕುಲಕರ್ಣಿ ತಿಳಿಸಿದ್ದಾರೆ.
ಈ ದುರಂತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಂತಾಪ ಸೂಚಿಸಿ, ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ ಘೊಷಿಸಿದ್ದಾರೆ. ಸೋಲಾಪುರ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


