ಬೀದರ್‌ನ ಪಶು ಮತ್ತು ಮೀನುಗಾರಿಕಾ ವಿಶ್ವ ವಿದ್ಯಾಲಯದಲ್ಲಿ 2017-19ರವರೆಗೆ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿರುವ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ನಡೆಸಿದೆ.
ಪಶು ಮತ್ತು ಮೀನುಗಾರಿಕಾ ವಿಶ್ವವಿದ್ಯಾಲಯದ ಸಿಬ್ಬಂದಿ ಮನೆ ಮೇಲೆ ಲೋಕಾಯುಕ್ತ ತಂಡ ದಾಳಿ ಮಾಡಿ ಪರಿಶೀಲನೆ ನಡೆಸಿದೆ ಎನ್ನಲಾಗಿದೆ. ಬೀದರ್‌ನಲ್ಲಿ ಒಟ್ಟು 25 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಪ್ರೊಫೆಸರ್, ಇಂಜಿನಿಯರ್ಸ್ ಸೇರಿ ಸಿಬ್ಬಂದಿ ಮನೆ ಮೇಲೆ ದಾಳಿಯಾಗಿದೆ ಎಂದು ತಿಳಿದು ಬಂದಿದೆ.
ಬೀದರ್, ಬೆಂಗಳೂರು, ಉಡುಪಿ, ಚಿಕ್ಕಮಗಳೂರು ಸೇರಿದಂತೆ 67 ಕಡೆ 69 ತಂಡಗಳ ಮೂಲಕ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ದಾಖಲೆಗಳ ಶೋಧದಲ್ಲಿ ತೊಡಗಿದ್ದಾರೆ. ವಿಶ್ವವಿದ್ಯಾಲಯದಲ್ಲಿ 2017-19ರವರೆಗೆ ಕೋಟ್ಯಂತರ ರೂ. ಅವ್ಯವಹಾರ ನಡೆದಿದೆ ಎನ್ನುವ ಆರೋಪ ಇದೆ. 2021ರಲ್ಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದು, ತನಿಖೆ ವೇಳೆ 28 ಕೋಟಿ ಅವ್ಯವಹಾರ ಬಯಲಿಗೆ ಬಂದಿದೆ ಎಂದು ವರದಿಯಾಗಿದೆ.
ವಿಶ್ವವಿದ್ಯಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಶಾಮೀಲಾಗಿ ಪೀಠೋಪಕರಣ, ಸ್ಟೇಷನರಿ ಖರೀದಿಯಲ್ಲಿ ಅಕ್ರಮ ಎಸಗಿದ್ದಾರೆ ಎನ್ನಲಾಗಿದೆ. ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬಿಕರ್, ಐಜಿಪಿ ಸುಬ್ರಮಣ್ಯರಾವ್ ನೇತೃತ್ವದಲ್ಲಿ ಇವೆಲ್ಲರ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.