ಬೆಂಗಳೂರು ನಗರದಲ್ಲಿ ತೆರವುಗೊಳಿಸಿರುವ ಫುಟ್‌ಪಾತ್‌ಗಳನ್ನು ಮತ್ತೆ ಅತಿಕ್ರಮಿಸಿಕೊಂಡರೆ ಅಂಥವರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ಕಠಿಣ ಕ್ರಮ ಜರುಗಿಸುವಂತೆ ಜಿಬಿಎ ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಬೆಂಗಳೂರು ಮಹಾನಗರದ ಐದು ನಗರ ಪಾಲಿಕೆ ವ್ಯಾಪ್ತಿಗಳಲ್ಲಿ ಪೊಲೀಸ್ ಹಾಗೂ ನಾಗರಿಕ ಸಂಸ್ಥೆಗಳ ಅಧಿಕಾರಿಗಳನ್ನು ಒಳಗೊಂಡ ಜಂಟಿ ಟಾಸ್ಕ್‌ಪೋರ್ಸ್‌ಗಳನ್ನು ರಚಿಸಿ ಫುಟ್‌ಪಾತ್‌ಗಳ ಮೇಲೆ ನಿಗಾ ವಹಿಸುವಂತೆ ನಿರ್ದೇಶನ ನೀಡಿದ್ದಾರೆ.
ಫುಟ್‌ಪಾತ್ ಒತ್ತುವರಿಗೆ ಸಂಬಂಧಿಸಿದಂತೆ ನಡೆದ ವರ್ಚುವಲ್ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸಮಸ್ಯೆ ಪರಿಶೀಲಿಸಿದ ಸಚಿವರು, ಒತ್ತುವರಿ ತೆರವುಗೊಳಿಸಿದ ಬಳಿಕ ಅದೇ ಸ್ಥಳದಲ್ಲಿ ಮತ್ತೆ ಒತ್ತುವರಿ ಕಾಣಿಸಿಕೊಂಡರೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.
ಒತ್ತುವರಿ ತೆರವುಗೊಳಿಸಿದ ಜಾಗ ಮತ್ತೆ ಒತ್ತುವರಿಯಾಗದಂತೆ ಶಾಶ್ವತ ವ್ಯವಸ್ಥೆ ರೂಪಿಸಬೇಕು ಎಂದು ಸೂಚಿಸಿದರು. ಪ್ರತಿ ನಗರ ಪಾಲಿಕೆ ವ್ಯಾಪ್ತಿಯಲ್ಲೂ ಪೊಲೀಸ್ ಮತ್ತು ಪಾಲಿಕೆ ಅಧಿಕಾರಿಗಳನ್ನೊಳಗೊಂಡ ಜಂಟಿ ಟಾಸ್ಕ್‌ಫೋರ್ಸ್ ಸಕ್ರಿಯವಾಗಿರಬೇಕು. ಫುಟ್‌ಪಾತ್ ಮರು ಒತ್ತುವರಿ ಕಂಡುಬಂದರೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ತಿಳಿಸಿದರು.
ಮರುಒತ್ತುವರಿ ಪ್ರಕರಣಗಳನ್ನು ಗುರುತಿಸಿ, ಪೋಟೊ ಹಾಗೂ ಜಿಯೋ-ಟ್ಯಾಗ್ ಮಾಡಿದ ದಾಖಲೆಗಳೊಂದಿಗೆ ವರದಿ ಮಾಡಬೇಕು. ಮರುಒತ್ತುವರಿ ಮಾಡುವವರ ವಿರುದ್ಧ ಎಫ್‌ಐಆರ್ ದಾಖಲಿಸುವುದು, ಒತ್ತುವರಿಗೆ ಬಳಸಿದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳುವುದು ಹಾಗೂ ನಿಯಮಾನುಸಾರ ಹೆಚ್ಚಿನ ದಂಡ ವಿಧಿಸುವುದು ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಬೀದಿ ವ್ಯಾಪಾರಕ್ಕೆ ನಿರ್ಬಂಧ ಇರುವ ರಸ್ತೆಗಳನ್ನು ಸ್ಪಷ್ಟವಾಗಿ ಗುರುತಿಸಿ ಸಂಬಂಧಪಟ್ಟ ಪೊಲೀಸ್ ಹಾಗೂ ನಾಗರಿಕ ಸಂಸ್ಥೆಗಳಿಗೆ ಅಧಿಕೃತವಾಗಿ ಮಾಹಿತಿ ನೀಡಬೇಕು, ಹೆಚ್ಚು ಸಂಚಾರವಿರುವ ಪ್ರಮುಖ ರಸ್ತೆಗಳಲ್ಲಿ ಪಾದಚಾರಿಗಳು ಹಾಗೂ ವಾಹನಗಳ ಸಂಚಾರಕ್ಕೆ ಅಡಚಣೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಸುಗಮ ಸಂಚಾರಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಹೇಳಿದರು.


