ವಸತಿ ಶಾಲೆಯ ಭೀಕರ ಅಗ್ನಿ ಅವಘಡದಲ್ಲಿ 2ನೇ ತರಗತಿ ವಿದ್ಯಾರ್ಥಿ ಸಜೀವದಹನಗೊಂಡಿರುವ ಘಟನೆ ಮಡಿಕೇರಿಯಲ್ಲಿ ಸಂಭವಿಸಿದೆ.
ವಸತಿ ಶಾಲೆಯಲ್ಲಿ 2ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ಪುಷ್ಪಕ್ ಚೆಟ್ಟಿಮಾನಿ ನಿವಾಸಿ ಅನೀಲ್ ಅವರ ಪುತ್ರ ಪುಷ್ಪಕ್ ಮೃತಪಟ್ಟಿದ್ದಾನೆ.
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾಟಗೇರಿ ಗ್ರಾಮದಲ್ಲಿ ಬೆಳಗಿನ ನಾಲ್ಕು-ಐದು ಗಂಟೆ ವೇಳೆಗೆ ಈ ದುರಂತ ಸಂಭವಿಸಿದೆ. ಶಾಲೆಯ ವಸತಿ ಗೃಹದಲ್ಲಿ ಒಟ್ಟು 53 ಮಂದಿ ವಿದ್ಯಾರ್ಥಿಗಳು ವಾಸಿಸುತ್ತಿದ್ದು, ಉಳಿದ ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಅಗ್ನಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಹಾಗೂ ಶಾಲಾ ಸಿಬ್ಬಂದಿ ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಯತ್ನಿಸಿದರೂ, ಪುಷ್ಪಕ್ ಆ ಸಮಯದಲ್ಲಿ ಸಿಕ್ಕಿಹಾಕಿಕೊಂಡಿದ್ದಾನೆಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಿದರು. ಶಾರ್ಟ್ ಸರ್ಕ್ಯೂಟ್‌ನಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ವಸತಿ ಶಾಲೆಯ ಸುರಕ್ಷತಾ ಅಂಶಗಳನ್ನು ಪರಿಶೀಲಿಸಲಾಗುತ್ತಿದೆ.