ಚಿತ್ರದುರ್ಗದ ಮಾಜಿ ಸಂಸದರು, ಹಿರಿಯ ಕಾಂಗ್ರೆಸ್ ಮುಖಂಡರು, ಕೇಂದ್ರ ರೇಷ್ಮೆ ಮಂಡಳಿಯ ಮಾಜಿ ಅಧ್ಯಕ್ಷರು ಹಾಗೂ ಪರಿಶಿಷ್ಟ ಸಮುದಾಯದ ನಾಯಕ ಎಚ್. ಹನುಮಂತಪ್ಪ ಭಾನುವಾರ ನಿಧನರಾದರು.
ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ತೆರಳುತ್ತಿದ್ದಾಗ ಆರೋಗ್ಯ ಬಿಗಡಾಯಿಸಿದ್ದು, ತುಮಕೂರಿನಲ್ಲಿರುವ ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಹನುಮಂತಪ್ಪ ಕಾಂಗ್ರೆಸ್ ಪಕ್ಷದಿಂದ ಮೂರು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಮಾಜಿ ಪ್ರಧಾನಿ ಇಂದಿರಾ ಗಾಂಧಿ, ರಾಜೀವ್ ಗಾಂಧಿಗೆ ಆಪ್ತರಾಗಿದ್ದರು. ಅವರು 1995ರಲ್ಲಿ ರಾಷ್ಟ್ರೀಯ ಎಸ್ಸಿಎಸ್ಟಿ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 2020ರಲ್ಲಿ ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರು.
ಎಚ್ ಹನುಮಂತಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಆತ್ಮಕ್ಕೆ ಸದ್ಗತಿ ಸಿಗಲಿ. ಅವರ ಕುಟುಂಬ ವರ್ಗ, ಆಪ್ತರು, ಅನುಯಾಯಿಗಳಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.


