Saturday, November 14, 2026
Menu

ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಪ್ರಧಾನಿಗೆ ಜಿ.ಪರಮೇಶ್ವರ್ ಪತ್ರ!

ಉದಯಕಾಲ ನ್ಯೂಸ್, ಬೆಂಗಳೂರು: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಜಾರಿಗೊಳಿಸಲಾಗಿರುವ ಕಾಯ್ದೆಗೆ ಸಂವಿಧಾನಾತ್ಮಕ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ತಕ್ಷಣವೇ ಗಂಭೀರ ಕ್ರಮ ಕೈಗೊಳ್ಳಬೇಕು ಎಂದು ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಪ್ರಧಾನಮಂತ್ರಿ ಹಾಗೂ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದು ಬಲವಾಗಿ ಒತ್ತಾಯಿಸಿದ್ದಾರೆ. ಸುಮಾರು ಏಳು ದಶಕಗಳ ಬಳಿಕ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಕೈಗೊಂಡಿರುವ ಈ ಐತಿಹಾಸಿಕ ತೀರ್ಮಾನಕ್ಕೆ ಕೇಂದ್ರ ಸರ್ಕಾರವು ಕಾನೂನಾತ್ಮಕ ನೆರವು ನೀಡುವಂತೆ ಅವರು ಮನವಿ ಮಾಡಿದ್ದಾರೆ.

ಮೀಸಲಾತಿ ಹೆಚ್ಚಳ ಮತ್ತು ಹೈಕೋರ್ಟ್ ತೀರ್ಪಿನ ಆಘಾತ

ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ. 15ರಿಂದ ಶೇ. 17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ. 3ರಿಂದ ಶೇ. 7ಕ್ಕೆ ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು 2022ರಲ್ಲಿ ಕಾಯ್ದೆ ರೂಪಿಸಿತ್ತು. 2011ರ ಜನಗಣತಿಯ ಪ್ರಕಾರ ರಾಜ್ಯದಲ್ಲಿ ಎಸ್‌ಸಿ ಜನಸಂಖ್ಯೆ ಶೇ. 17.15 ಹಾಗೂ ಎಸ್‌ಟಿ ಜನಸಂಖ್ಯೆ ಶೇ. 6.95ರಷ್ಟಿದ್ದು, ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ಶಿಫಾರಸಿನ ಮೇರೆಗೆ 2022ರ ನವೆಂಬರ್ 1ರಿಂದ ಅನ್ವಯವಾಗುವಂತೆ ಈ ಕಾಯ್ದೆ ಜಾರಿಗೆ ಬಂದಿತ್ತು.

ಆದರೆ, ಒಟ್ಟು ಮೀಸಲಾತಿ ಶೇ. 56ಕ್ಕೆ ಏರಿಕೆಯಾಗುವುದು ಸುಪ್ರೀಂ ಕೋರ್ಟ್ ನಿರ್ದೇಶಿತ ಶೇ. 50ರ ಮೀಸಲಾತಿ ಮಿತಿಯನ್ನು ಮೀರಿದಂತಾಗುತ್ತದೆ ಎಂಬ ಕಾರಣಕ್ಕೆ ಕರ್ನಾಟಕ ಹೈಕೋರ್ಟ್ 2026ರ ಅಕ್ಟೋಬರ್ 12ರಂದು ಮೀಸಲಾತಿ ಹೆಚ್ಚಳದ ನಿಬಂಧನೆಗಳನ್ನು ರದ್ದುಗೊಳಿಸಿದೆ. ಹೈಕೋರ್ಟ್ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರ ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ನ್ಯಾಯಾಂಗ ಪ್ರಕ್ರಿಯೆ ನಡೆಯುತ್ತಿದೆ ಎಂಬ ಕಾರಣ ನೀಡಿ ಕೇಂದ್ರ ಸರ್ಕಾರ ಈ ವಿಷಯವನ್ನು ಮುಂದೂಡಬಾರದು ಎಂದು ಪರಮೇಶ್ವರ್ ಪ್ರತಿಪಾದಿಸಿದ್ದಾರೆ.

ತಮಿಳುನಾಡು ಮಾದರಿ 9ನೇ ಅನುಸೂಚಿಗೆ ಸೇರಿಸಲು ಆಗ್ರಹ

ತಮಿಳುನಾಡಿನಲ್ಲಿ ಶೇ. 69ರ ಮೀಸಲಾತಿಗೆ ಸಂವಿಧಾನಾತ್ಮಕ ರಕ್ಷಣೆ ನೀಡಲು 1994ರಲ್ಲಿ 76ನೇ ಸಂವಿಧಾನ ತಿದ್ದುಪಡಿ ಮೂಲಕ ಅಲ್ಲಿನ ಕಾಯ್ದೆಯನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸಲಾಗಿತ್ತು. ಅದೇ ಮಾದರಿಯಲ್ಲಿ ಕರ್ನಾಟಕದ ಶೇ. 56ರ ಮೀಸಲಾತಿಗೂ ರಕ್ಷಣೆ ನೀಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಕರ್ನಾಟಕ ಸರ್ಕಾರವು 2023ರ ಮಾರ್ಚ್‌ಲ್ಲೇ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, 2025ರ ಡಿಸೆಂಬರ್‌ನಲ್ಲಿ ವಿಧಾನಸಭೆಯಲ್ಲಿ ನಿರ್ಣಯವನ್ನೂ ಅಂಗೀಕರಿಸಲಾಗಿದೆ.

ಪ್ರಧಾನಿ ಖುದ್ದು ಮಧ್ಯಪ್ರವೇಶಿಸಿ, ಸಂಸತ್ತಿನಲ್ಲಿ ಅಗತ್ಯ ತಿದ್ದುಪಡಿ ಮಸೂದೆ ಮಂಡಿಸಬೇಕು. ರಾಷ್ಟ್ರೀಯ ಎಸ್‌ಸಿ ಮತ್ತು ಎಸ್‌ಟಿ ಆಯೋಗಗಳೊಂದಿಗೆ ಸಮಾಲೋಚನೆ ನಡೆಸಿ, ಕೇಂದ್ರ ಕಾನೂನು, ಸಾಮಾಜಿಕ ನ್ಯಾಯ ಮತ್ತು ಗೃಹ ಸಚಿವಾಲಯಗಳು ಸಮನ್ವಯದಿಂದ ಕಾಲಮಿತಿಯೊಳಗೆ ಕ್ರಮ ಕೈಗೊಳ್ಳಬೇಕು. ದೇಶದಲ್ಲಿ ಶೇ. 50ರ ಮೀಸಲಾತಿ ಮಿತಿಯ ಕುರಿತು ರಾಷ್ಟ್ರಮಟ್ಟದಲ್ಲಿ ಮರುಪರಿಶೀಲನೆ ನಡೆಸುವ ಮೂಲಕ ಹಿಂದುಳಿದ ಸಮುದಾಯಗಳ ಶೈಕ್ಷಣಿಕ ಹಾಗೂ ಉದ್ಯೋಗಾವಕಾಶಗಳನ್ನು ರಕ್ಷಿಸಬೇಕು ಎಂದು  ಜಿ. ಪರಮೇಶ್ವರ್ ತಮ್ಮ ಪತ್ರದಲ್ಲಿ ಕಳಕಳಿಯ ಮನವಿ ಮಾಡಿದ್ದಾರೆ.
#SCSTReservation #KarnatakaPolitics #GPrameshwar #Udayakala #SocialJustice #Modi #IndianConstitution #ReservationHike

Related Posts

Leave a Reply

Your email address will not be published. Required fields are marked *