ಜೂನ್ 30ರೊಳಗೆ ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ನಡೆಯಲಿದ್ದು, ಬ್ಯಾಲಟ್ ಪೇಪರ್‌ನಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಮತದಾರರ ಕರಡು ಪಟ್ಟಿ ಪ್ರಕಟ ಕುರಿತ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್. ಸಂಗ್ರೇಶಿ ಈ ವಿಷಯ ತಿಳಿಸಿದರು. ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆ ನಡೆಸಲು ಆಯೋಗ ಸಿದ್ಧತೆ ಮಾಡಿಕೊಂಡಿದೆ. ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಿ. ಹೆಸರಿಲ್ಲದಿದ್ದರೆ ಅಗತ್ಯವಿರುವ ನಮೂನೆ ಮೂಲಕ ಅರ್ಜಿ ಸಲ್ಲಿಸಿ ಮತದಾರರ ಪಟ್ಟಿಗೆ ಸೇರ್ಪಡೆಯಾಗುವ ಅವಕಾಶವಿದೆ ಎಂದು ಹೇಳಿದರು.
ಜಿಬಿಎ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್. ರಾಮಚಂದ್ರನ್ ಅವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್‌ವಾರು ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 88,91,411 ಮತದಾರರು ಬರಲಿದ್ದಾರೆ. ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಪಶ್ಚಿಮ ನಗರ ಪಾಲಿಕೆಗಳು ಸೇರಿದಂತೆ ಒಟ್ಟು ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 369 ವಾರ್ಡ್‌ಗಳು ರಚನೆಯಾಗಿವೆ ಎಂದು ಮಾಹಿತಿ ನೀಡಿದರು.
ಜನವರಿ 20, 2026 ರಿಂದ ಫೆಬ್ರವರಿ 3, 2026 ರವರೆಗೆ ಬೂತ್ ಲೆವಲ್ ಅಧಿಕಾರಿಗಳು ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಈ ಅವಧಿಯಲ್ಲಿ ಹಕ್ಕು ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು. ಹಕ್ಕು ಹಾಗೂ ಆಕ್ಷೇಪಣೆಗಳ ವಿಲೇವಾರಿಯು ಫೆಬ್ರವರಿ 4 ರಿಂದ ಫೆಬ್ರವರಿ 18, 2026 ರವರೆಗೆ ನಡೆಯಲಿದ್ದು, ಮಾರ್ಚ್ 16, 2026 ರಂದು ಮತದಾರರ ಪಟ್ಟಿಯ ಅಂತಿಮ ಪ್ರಕಟಣೆ ಮಾಡಲಾಗುವುದು ಎಂದು ಹೇಳಿದರು.
ಮತದಾರರ ಅನುಕೂಲಕ್ಕಾಗಿ ಐದು ನಗರ ಪಾಲಿಕೆಗಳ ಸಹಾಯವಾಣಿ ಸಂಖ್ಯೆಗಳು ಈ ಕೆಳಗಿನಂತಿವೆ: ಬೆಂಗಳೂರು ಕೇಂದ್ರ : 080-229758032. ಬೆಂಗಳೂರು ಉತ್ತರ : 080-229759363. ಬೆಂಗಳೂರು ದಕ್ಷಿಣ : 94806857044. ಬೆಂಗಳೂರು ಪೂರ್ವ : 94806857065. ಬೆಂಗಳೂರು ಪಶ್ಚಿಮ : 9480685703.


