Menu

ಬಡವರಿಗಾಗಿ ಪ್ರತಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ

ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ಹಾಗೂ ಗೃಹ ವೈದ್ಯರ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಯ ಉದ್ಘಾಟನೆ, ಬೆಳಗಾವಿ ಸ್ಮಾರ್ಟ್ ಸಿಟಿ ಅನುದಾನದಲ್ಲಿ ನಿರ್ಮಾಣಗೊಂಡ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಬಸ್ ನಿಲ್ದಾಣದ ಉದ್ಘಾಟನೆ, ರಾಣಿ ಚನ್ನಮ್ಮ ವಿವಿಯ ಹಿರೇಬಾಗೇವಾಡಿ ಹೊಸ ಆವರಣದಲ್ಲಿ ಪಿ.ಎಂ ಉಷಾ ವಿವಿಧ ಕಟ್ಟಡಗಳ ಹಾಗೂ ರಾಷ್ಟ್ರೀಯ ಹೆದ್ದಾರಿಯಿಂದ ವಿವಿಯ ನೂತನ ಆವರಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಬರಿ ಆಸ್ಪತ್ರೆ ಕಟ್ಟಡ ಕಟ್ಟಿದರೆ ಸಾಲದು. ಅದಕ್ಕೆ ತಕ್ಕಂತೆ ತಜ್ಞ ವೈದ್ಯರನ್ನೂ ನೇಮಿಸುತ್ತೇವೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಿದ್ದೇವೆ . ಸದ್ಯ ಪ್ರಭಾಕರ್ ಕೋರೆ ಅವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಸರ್ಕಾರಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕಾಗಿ ಕೋರೆ ಅವರಿಗೆ ಅಭಿನಂದಿಸುತ್ತೇನೆ ಎಂದರು.

ನಮ್ಮ ಸರ್ಕಾರ ಅಸಮಾನತೆಯನ್ನು ಅಳಿಸುವ ದಿಕ್ಕಿನಲ್ಲಿ ತಳ ಸಮುದಾಯಗಳಿಗೆ ಅವಕಾಶ ಮತ್ತು ಅನುಕೂಲಗಳನ್ನು ಕಲ್ಪಿಸುತ್ತಿದೆ. ಅಸಮಾನತೆ ಇರುವವರೆಗೆ ತಳ ಸಮುದಾಯಗಳ ಜನ ಮುಖ್ಯವಾಹಿನಿಗೆ ಬರಲು ಸಾಧ್ಯವಿಲ್ಲ ಎನ್ನುವ ಮಾತುಗಳನ್ನು ನೆನಪಿನಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಹೇಳಿದರು.

ಬುದ್ದ-ಬಸವ-ಗಾಂಧಿ-ಅಂಬೇಡ್ಕರ್ ಆಶಯದಂತೆ ನಮ್ಮ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಸಮಾಜದ ಕಟ್ಟ ಕಡೆಯವರಿಗೂ ಅಭಿವೃದ್ಧಿ ತಲುಪಿದಾಗ ಮಾತ್ರ ಸಮಾಜದ, ದೇಶದ ಅಭಿವೃದ್ಧಿ ಸಾಧ್ಯ ಎನ್ನುವುದು ಎಲ್ಲರ ಆಶಯವಾಗಿದೆ. ಹೀಗಾಗಿ ಎಲ್ಲರ ಕಲ್ಯಾಣ ಕಾರ್ಯಕ್ರಮಗಳನ್ನು ನಾವು ರೂಪಿಸುತ್ತಿದ್ದೇವೆ ಎಂದು ಸಿದ್ದರಾಮಯ್ಯ ಅವರು ವಿವರಿಸಿದರು.

ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಜಾರಿಗೆ ತಂದ ಭಾಗ್ಯಗಳು, ಈಗ ಜಾರಿಗೆ ತಂದಿರುವ ಗ್ಯಾರಂಟಿಗಳು ರಾಜ್ಯದ ಜನರ ಕೊಳ್ಳುವ ಶಕ್ತಿಯನ್ನು, ತಲಾ ಆದಾಯವನ್ನು ಹೆಚ್ಚಿಸಿ‌ ಮಹಿಳೆಯರನ್ನೂ ಆರ್ಥಿಕವಾಗಿ ಸಬಲರನ್ನಾಗಿ ಮಾಡಲಾಗಿದೆ. ಬಡವರಿಗೆ ಆರ್ಥಿಕವಾಗಿ ಶಕ್ತಿ ಬಂದರೆ ಸಮಾಜದ ಜಾತಿ ವ್ಯವಸ್ಥೆ, ಅಸಮಾನತೆ ಅಳಿಸಲು ಸಾಧ್ಯವಾಗುತ್ತದೆ ಎಂದರು.

ರಾಜ್ಯದ ಎಂಟು ಜಿಲ್ಲೆಗಳಲ್ಲಿ ಶೇ95 ರಷ್ಟು ಅಧಿಕ ಮಳೆಯಾಗಿ ರಾಜ್ಯದಲ್ಲಿ 10 ಲಕ್ಷ ಹೆಕ್ಟೇರ್ ಬೆಳೆ ನಾಶ ಆಗಿರುವ ಅಂದಾಜಿದೆ. ಈ ಬೆಳೆ ಹಾನಿಗೆ ದಾಖಲೆ ಮೊತ್ತದ ಪರಿಹಾರ ಹಣ ನೀಡಿ ರೈತರು, ಬೆಳೆಗಾರರು, ಕೃಷಿಕರ ನೆರವಿಗೆ ಧಾವಿಸಿದ್ದೇವೆ ಎಂದು ತಿಳಿಸಿದರು.

ಸಚಿವರಾದ ಶರಣ ಪ್ರಕಾಶ್ ಪಾಟೀಲ್, ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ರಾಮಲಿಂಗಾರೆಡ್ಡಿ, ಎಂ.ಸಿ.ಸುಧಾಕರ್ ಸೇರಿ ಹಲವು ಗಣ್ಯರು, ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

Related Posts

Leave a Reply

Your email address will not be published. Required fields are marked *