ಬೆಂಗಳೂರಿನಲ್ಲಿ ಎರಡು ಶಿಶುಗಳಿಗೆ HMPV ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನಲೆಯಲ್ಲಿ ರಾಜ್ಯದ ಜನರಲ್ಲಿ ಆತಂಕ ಮನೆಮಾಡಿದ್ದು, ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕಳೆದ ಐದಾರು ತಿಂಗಳುಗಳಿಂದ ನಿರಂತರವಾಗಿ ಸಂಭವಿಸುತ್ತಿರುವ ಬಾಣಂತಿಯರು ಮತ್ತು ನವಜಾತ ಶಿಶುಗಳ ಸರಣಿ ಸಾವು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ಸರ್ಕಾರ, HMPV ವೈರಾಣು ಸೋಂಕು ಹರಡುವುದನ್ನು ನಿಯಂತ್ರಣ ಮಾಡಲು ಸಮರ್ಥವೇ ಎಂಬ ಅನುಮಾನ ಸಹಜವಾಗಿ ಸಾರ್ವಜನಿಕರಲ್ಲಿ ಮೂಡಿದೆ ಎಂದು ಹೇಳಿದ್ದಾರೆ.
ಈ ನಿಟ್ಟಿನಲ್ಲಿ ವಿಪಕ್ಷ ನಾಯಕನಾಗಿ ಸರ್ಕಾರಕ್ಕೆ ಸಲಹೆ ನೀಡುತ್ತೇನೆ. ಕಾಟಾಚಾರಕ್ಕೆ ಸಭೆಗಳನ್ನು ಮಾಡಿ, ಮಾರ್ಗಸೂಚಿ ಬಿಡುಗಡೆ ಮಾಡಿದರೆ ಸಾಲದು. ಸರ್ಕಾರ ಈ ಕೂಡಲೇ ಸಮರ್ಥ ಸಚಿವರನ್ನು ಒಳಗೊಂಡ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು. ಸರ್ಕಾರಕ್ಕೆ ಮತ್ತು ಟಾಸ್ಕ್ ಫೋರ್ಸ್ ಗೆ ತಾಂತ್ರಿಕ ಮಾರ್ಗದರ್ಶನ ನೀಡಲು ಒಂದು ತಜ್ಞರ ವೈದ್ಯರ ಸಮಿತಿ ರಚನೆ ಮಾಡಬೇಕು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಬ್ಬರು ಶಿಶುಗಳಿಗೆ HMPV ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನಲೆಯಲ್ಲಿ ರಾಜ್ಯದ ಜನರಲ್ಲಿ ಆತಂಕ ಮನೆಮಾಡಿದ್ದು, ಸರ್ಕಾರ ಇದನ್ನ ಅತ್ಯಂತ ಗಂಬೀರವಾಗಿ ಪರಿಗಣಿಸಬೇಕು.
ಕಳೆದ ಐದಾರು ತಿಂಗಳುಗಳಿಂದ ನಿರಂತರವಾಗಿ ಸಂಭವಿಸುತ್ತಿರುವ ಬಾಣಂತಿ ಮಹಿಳೆಯರು ಮತ್ತು ನವಜಾತ ಶಿಶುಗಳ ಸರಣಿ ಸಾವನ್ನ ನಿಯಂತ್ರಿಸುವಲ್ಲಿ… pic.twitter.com/gO99OKwfIB
— R. Ashoka (@RAshokaBJP) January 6, 2025
ಸಣ್ಣ ಮಕ್ಕಳು, ಹಿರಿಯ ನಾಗರಿಕರು, ರೋಗನಿರೋಧಕ ಶಕ್ತಿ ಕಡಿಮೆ ಇರುವವರು, ಈಗಾಗಲೇ ಶ್ವಾಸಕೋಶ ಸಮಸ್ಯೆಗಳಿಂದ ಬಳಲುತ್ತಿರುವವರ ಸಮೀಕ್ಷೆ ನಡೆಸಿ ಅಗತ್ಯವಿದ್ದವರಿಗೆ ಪರೀಕ್ಷೆ ಮಾಡಿಸಬೇಕು. ಮುಂಜಾಗ್ರತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಎಲ್ಲ ಆಸ್ಪತ್ರೆಗಳಲ್ಲಿ ಸೋಂಕು ತಗುಲಿದವರ ಚಿಕಿತ್ಸೆಗೆ ಅಗತ್ಯ ಇರುವ ಔಷಧಿ, ಆಕ್ಸಿಜನ್, ಐಸಿಯು ಬೆಡ್ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆಗಳು ಇದೆಯೇ ಎಂದು ಜಿಲ್ಲಾ ಉಸ್ತುವಾರಿ ಸಚಿವರು, ಆರೋಗ್ಯ ಸಚಿವರು ಆಸ್ಪತ್ರೆಗಳಿಗೆ ಖುದ್ದು ಭೇಟಿ ನೀಡಿ ಖಾತ್ರಿ ಪಡಿಸಿಕೊಳ್ಳಬೇಕು ಎಂದಿದ್ದಾರೆ.
ಅಗತ್ಯ ಬಿದ್ದರೆ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಮೀಸಲಿಡಲು ಕ್ರಮ ಕೈಗೊಳ್ಳಬೇಕು. ರಾಜ್ಯಾದ್ಯಂತ ಹೆಚ್ಚುವರಿ ಆಂಬುಲೆನ್ಸ್ ಗಳ ವ್ಯವಸ್ಥೆ ಮಾಡಬೇಕು. ಶಾಲೆಗಳಲ್ಲಿ ಮಕ್ಕಳ ಮೇಲೆ ವಿಶೇಷ ನಿಗಾ ಇಡಲು ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಬೇಕು. ಪ್ರತಿನಿತ್ಯ ಆರೋಗ್ಯ ಇಲಾಖೆ ವತಿಯಿಂದ ಅಧಿಕೃತ ಬುಲೆಟಿನ್ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.