ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.
ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮ ವತಿಯಿಂದ ಆಯೋಜಿಸಲಾಗಿದ್ದ ಭಾಗಮಂಡಲದ ಹತ್ತಿರ ಮಡಿಕೇರಿ ಮತ್ತು ತಲಕಾವೇರಿ ಮತ್ತು ನಾಪೋಕ್ಲು –ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಲು ಸೇತುವೆ ಉದ್ಘಾಟಿಸಿ ಮಾತನಾಡಿದರು.
ಎಲ್ಲಾ ಧರ್ಮಗಳು, ಜನರು, ಜಾತಿಗಳೂ ಕೂಡ ಸಮಾನ. ನಮ್ಮ ಧರ್ಮವನ್ನು ಪ್ರೀತಿಸಿ ಗೌರವಿಸಬೇಕು. ಆದರೆ ಇನ್ನೊಂದು ಧರ್ಮವನ್ನು ಅಲ್ಲಗಳೆಯಬಾರದು. ಅದನ್ನೇ ಸಹಿಷ್ಣುತೆ ಎನ್ನುತ್ತಾರೆ. ಸಹಿಸ್ಣುತೆ ಇದ್ದಾಗ ಮಾತ್ರ ನಾವು ಮಾನವರಾಗಿ ಬಾಳಲು ಸಾಧ್ಯವಾಗುತ್ತದೆ ಎಂದರು.
ಭಾಗಮಂಡಲದಲ್ಲಿ ಕಾವೇರಿ, ಕನ್ನಿಕ ಹಾಗೂ ಸುಜ್ಯೋತಿ ನದಿಗಳ ಸಂಗಮ ತ್ರಿವೇಣಿ ಸಂಗಮವಾಗಿದೆ. ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಕೊಡಗಿನ ಅಭಿವೃದ್ಧಿಗೆ ಅನುದಾನ ನೀಡಿದಂತೆ, ಈ ಬಾರಿಯೂ ಕೊಡಗಿನ ರಸ್ತೆ ಹಾಗೂ ಮೂಲಸೌಕರ್ಯಗಳಿಗೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷ ಎಂಟು ತಿಂಗಳಲ್ಲಿ ಪ್ರಮುಖವಾಗಿ ಭರವಸೆ ನೀಡಿದ್ದ ಐದೂ ಗ್ಯಾರಂಟಿ ಯೋಜನೆಗಳನ್ನು ಒಂದು ವರ್ಷದೊಳಗೆ ಈಡೇರಿಸಿದ್ದೇವೆ. ಶಕ್ತಿ, ಅನ್ನಭಾಗ್ಯ, ಗೃಹಲಕ್ಷ್ಮೀ, ಯುವನಿಧಿ, ಗೃಹಜ್ಯೋತಿ ಯೋಜನೆಗಳನ್ನು ಜಾರಿಗೆ ತಂದು ಸಮಾಜದಲ್ಲಿನ ಎಲ್ಲಾ ಜಾತಿಯ ಬಡವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸವನ್ನು ಮಾಡಿರುವುದು ನಮ್ಮ ಸರ್ಕಾರ ಎಂದರು.
ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ, ಫಲಾನುಭವಿಗಳ ಖಾತೆಗೆ ಹಣ ತಲುಪಿಸುವ ವ್ಯವಸ್ಥೆಯನ್ನು ಸರ್ಕಾರ ಕಲ್ಪಿಸಿದೆ. ಸಿ ಅಂಡ್ ಡಿ ಭೂಮಿಗೆ ಸಂಬಂಧಿಸಿ ಸಮಿತಿಯನ್ನು ರಚಿಸಿ, ಅದರ ವರದಿಯಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ಆದ್ದರಿಂದ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದರು.
ಜನರು ಮೈಕ್ರೋಫೈನಾನ್ಸ್ ನಿಂದ ಅನುಭವಿಸುತ್ತಿರುವ ಕಿರುಕುಳವನ್ನು ತಪ್ಪಿಸಲು ಹಾಗೂ ಮೈಕ್ರೋಫೈನಾನ್ಸ್ ಸಂಸ್ಥೆಗಳ ನಿಯಂತ್ರಣಕ್ಕಾಗಿ ಸುಗ್ರೀವಾಜ್ಞೆಯನ್ನು ಜಾರಿಗೊಳಿಸಲಾಗುವುದು ಎಂದರು.