Wednesday, September 10, 2025
Menu

ಗ್ರೇಟರ್‌ ಬೆಂಗಳೂರು: 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನದ ಕಟ್ಟಡಗಳಿಗೆ OC ಬೇಕಿಲ್ಲ

ಗ್ರೇಟರ್‌ ಬೆಂಗಳೂರು ವ್ಯಾಪ್ತಿಯಲ್ಲಿ 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿಗದಿತ ಮಿತಿಯೊಳಗೆ ನಿರ್ಮಾಣಗೊಂಡಿರುವ ಮಹಡಿಗಳು ಮತ್ತು ಹೊಸದಾಗಿ ನಿರ್ಮಿಸುವ ವಾಸದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ)ದಿಂದ ವಿನಾಯಿತಿ ನೀಡುವ ಮಹತ್ವದ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ.

1200 ಚದರಡಿ ವಿಸ್ತೀರ್ಣದವರೆಗಿನ ನಿವೇಶನದಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಿಸಿರುವ ಮತ್ತು ನಿರ್ಮಿಸುವ ನೆಲಮಹಡಿ ಸಹಿತ ಎರಡು ಅಂತಸ್ತು ಅಥವಾ ತಳ ಮಹಡಿ (ಸ್ಟಿಲ್ಟ್‌) ಸಹಿತ ಮೂರು ಮಹಡಿ ಕಟ್ಟಡಕ್ಕೆ ಒಸಿ ಪಡೆಯುವುದರಿಂದ ವಿನಾಯಿತಿ ಸಿಗಲಿದೆ. ಕುಡಿಯುವ ನೀರು ಮತ್ತು ವಿದ್ಯುತ್‌ಸಂಪರ್ಕ ಪಡೆಯುವಲ್ಲಿನ ಅಡಚಣೆ ನಿವಾರಣೆಗೂ ಇದು ಸಹಕಾರಿಯಾಗಲಿದೆ.

ಸ್ವಾಧೀನಾನುಭವ ಪತ್ರ ವಿನಾಯಿತಿ ನೀಡಿರುವ ವಾಸದ ಕಟ್ಟಡಗಳ ನಿರ್ಮಾಣಕ್ಕೆ ಆರಂಭಿಕ ಪ್ರಮಾಣ ಪತ್ರ (ಸಿಸಿ) ಪಡೆಯುವ ಅಗತ್ಯವಿಲ್ಲ ಎಂದು ಮೂಲಗಳು ಹೇಳಿವೆ. ಹಾಗಾಗಿ ನಿವೇಶನದಾರರಿಗೆ ಒಸಿ ಮತ್ತು ಸಿಸಿ ಎರಡರಿಂದಲೂ ವಿನಾಯಿತಿ ಸಿಗುವಂತಾಗಲಿದೆ.

ಗ್ರೇಟರ್‌ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ 1200 ಚ.ಅಡಿ ವಿಸ್ತೀರ್ಣ ಮೀರದಂತಹ ನಿವೇಶನಗಳಲ್ಲಿ ನಿರ್ಮಿಸುವ ಕಟ್ಟಡಗಳಿಗೆ ಪ್ರಾರಂಭಿಕ ಪ್ರಮಾಣಪತ್ರ (ಸಿಸಿ) ಹಾಗೂ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆಯುವುದರಿಂದ ವಿನಾಯಿತಿ ನೀಡುವ ಸಂಬಂಧ ಬಿಬಿಎಂಪಿಯ ನಗರ ಯೋಜನೆ ವಿಭಾಗವು ಈ ಹಿಂದೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.

ಗ್ರೇಟರ್‌ ಬೆಂಗಳೂರು ಆಡಳಿತ ಕಾಯಿದೆ 2024ರ ಸೆಕ್ಷನ್‌241(7)ರಲ್ಲಿ ಸ್ವಾಧೀನಾನುಭವ ಪ್ರಮಾಣಪತ್ರದಿಂದ ವಿನಾಯಿತಿ ನೀಡುವ ಅಧಿಕಾರವನ್ನು ಸರಕಾರಕ್ಕೆ ನೀಡಲಾಗಿದೆ. 2025ರ ಜುಲೈ 3ರಂದು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರೇಟರ್‌ ಬೆಂಗಳೂರು ಆಡಳಿತ ಕಾಯಿದೆ-2024ರ ಸೆಕ್ಷನ್‌241(7)ರಲ್ಲಿನ ಅವಕಾಶದಡಿ 1200 ಚ.ಅಡಿ ವಿಸ್ತೀರ್ಣ ಮೀರದಂತಹ ನಿವೇಶನಗಳಲ್ಲಿ ನೆಲ ಮತ್ತು 2 ಅಂತಸ್ತು ಅಥವಾ ಸ್ಟಿಲ್ಟ್‌ಮತ್ತು 3 ಅಂತಸ್ತಿನವರೆಗಿನ ಕಟ್ಟಡಗಳಿಗೆ ಒಸಿಯಿಂದ ವಿನಾಯಿತಿ ನೀಡಲು ನಿರ್ಧಾರ ಕೈಗೊಳ್ಳಲಾಗಿತ್ತು.

Related Posts

Leave a Reply

Your email address will not be published. Required fields are marked *