Monday, September 22, 2025
Menu

ರಾಜ್ಯ ಸೇರಿ ದೇಶದ ಹಲವೆಡೆ ಭಾರಿ ಮಳೆ ಸಾಧ್ಯತೆ

ಹವಾಮಾನ ಇಲಾಖೆ ನೀಡಿರುವ ವರದಿ ಪ್ರಕಾರ, ಸೆಪ್ಟೆಂಬರ್ 22ರಂದು ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಪೂರ್ವ ಕರಾವಳಿಯಲ್ಲಿ ಸಮುದ್ರವು ಪ್ರಕ್ಷುಬ್ಧವಾಗುವ ಬಗ್ಗೆ ಇಲಾಖೆ ಎಚ್ಚರಿಕೆ ನೀಡಿದೆ.

ಒಡಿಶಾ, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳದ ಮೀನುಗಾರರು ಪರಿಸ್ಥಿತಿ ಸುಧಾರಿಸುವವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ದಕ್ಷಿಣದಲ್ಲಿ ಕೇರಳ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ.

ದೇಶದ ಪೂರ್ವ, ಈಶಾನ್ಯ ಮತ್ತು ದಕ್ಷಿಣ ಭಾಗಗಳಲ್ಲಿ ವ್ಯಾಪಕವಾಗಿ ಮುಂಗಾರು ಮಳೆಯಾಗಲಿದ್ದು, ಮಧ್ಯ ಮತ್ತು ವಾಯುವ್ಯ ಪ್ರದೇಶಗಳಲ್ಲೂ ಮಳೆಯಾಗುವ ನಿರೀಕ್ಷೆಯಿದೆ. ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಮಳೆಯಾಗಲಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಅರುಣಾಚಲ ಪ್ರದೇಶ ಮತ್ತು ಬಿಹಾರದಂತಹ ರಾಜ್ಯಗಳಲ್ಲಿ ಹಲವೆಡೆ ಹೆಚ್ಚಿನ ಮಳೆ ಸುರಿಯಲಿದೆ. ಗುಡುಗು ಸಹಿತ ವ್ಯಾಪಕ ಮಳೆಯಾಗುವುದರಿಂದ ತಗ್ಗು ಪ್ರದೇಶಗಳಲ್ಲಿ, ವಿಶೇಷವಾಗಿ ನಗರ ಪ್ರದೇಶಗಳಲ್ಲಿ ಪ್ರವಾಹ ಉಂಟಾಗುವ ಅಪಾಯವಿದೆ. ಸಿಕ್ಕಿಂ, ಅರುಣಾಚಲ ಪ್ರದೇಶ ಮತ್ತು ಮೇಘಾಲಯದ ಕೆಲವು ಭಾಗಗಳಲ್ಲಿ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಜಾರ್ಖಂಡ್, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಮಳೆಯಿಂದಾಗಿ ಜನಜೀವನಕ್ಕೆ ತೊಂದರೆಯಾಗಬಹುದು, ಜನ ಅನಗತ್ಯ ಪ್ರಯಾಣವನ್ನು ಮುಂದೂಡುವಂತೆ ಇಲಾಖೆ ಸಲಹೆ ನೀಡಿದೆ. ಒಡಿಶಾದಲ್ಲೂ ಭಾರಿ ಮಳೆಯಾಗಲಿದೆ.

ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಮಧ್ಯಮ ಮಳೆಯಾಗುವ ನಿರೀಕ್ಷೆಯಿದ್ದು, ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಬಹುದು. ದೆಹಲಿ, ಹರಿಯಾಣ ಮತ್ತು ಪಂಜಾಬ್‌ನ ಕೆಲವು ಭಾಗಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಸಾರ್ವಜನಿಕರು ಅನಗತ್ಯ ಪ್ರಯಾಣ ಸ್ಥಗಿತಗೊಳಿಸಿ ಸುರಕ್ಷತೆಗಾಗಿ ಸಂಚಾರ ಸಲಹೆಗಳನ್ನು ಅನುಸರಿಸಲು ಹವಾಮಾನ ಇಲಾಖೆ ಸೂಚಿಸಿದೆ.

Related Posts

Leave a Reply

Your email address will not be published. Required fields are marked *