ದಕ್ಷಿಣ ಕನ್ನಡ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ದಕ್ಷಿಣ ಕನ್ನಡದ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಹಾಗೂ ಉತ್ತರಕನ್ನಡದ ಐದು ತಾಲೂಕುಗಳ ಶಾಲೆಗಳಿಗೆ ಜುಲೈ 17ರಂದು ರಜೆಯನ್ನು ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಉತ್ತರ ಕನ್ನಡದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರ ಭಾಗದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ 3 ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಸಮುದ್ರತೀರ, ತಗ್ಗು ಪ್ರದೇಶ, ಕೆರೆ, ನದಿತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಲು ಮತ್ತು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸಬೇಕು. ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಲು, ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಲು ಸೂಚಿಸಲಾಗಿದೆ. ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿ ಇರಿಸಿಕೊಳ್ಳುವಂತೆ ಸೂಚಿಸಲಾಗಿದೆ.